ADVERTISEMENT

ವಡ್ರಹಳ್ಳಿ ವಿದ್ಯಾರ್ಥಿನಿ ಸಾವಿನ ಪ್ರಕರಣ: ಉನ್ನತ ತನಿಖೆಗೆ ಒತ್ತಾಯ, ಧರಣಿ

ಪೊಲೀಸರ ವಿರುದ್ಧ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 29 ಏಪ್ರಿಲ್ 2019, 14:49 IST
Last Updated 29 ಏಪ್ರಿಲ್ 2019, 14:49 IST
ವಡ್ರಹಳ್ಳಿ ಗ್ರಾಮದ ವಿದ್ಯಾರ್ಥಿನಿ ಸಾವಿನ ಪ್ರಕರಣ ಸಂಬಂಧ ಉನ್ನತ ತನಿಖೆ ನಡೆಸುವಂತೆ ಒತ್ತಾಯಿಸಿ ವಿವಿಧ ಸಂಘಟನೆಗಳ ಸದಸ್ಯರು ಕೋಲಾರದಲ್ಲಿ ಸೋಮವಾರ ಧರಣಿ ನಡೆಸಿದರು.
ವಡ್ರಹಳ್ಳಿ ಗ್ರಾಮದ ವಿದ್ಯಾರ್ಥಿನಿ ಸಾವಿನ ಪ್ರಕರಣ ಸಂಬಂಧ ಉನ್ನತ ತನಿಖೆ ನಡೆಸುವಂತೆ ಒತ್ತಾಯಿಸಿ ವಿವಿಧ ಸಂಘಟನೆಗಳ ಸದಸ್ಯರು ಕೋಲಾರದಲ್ಲಿ ಸೋಮವಾರ ಧರಣಿ ನಡೆಸಿದರು.   

ಕೋಲಾರ: ಕೆಜಿಎಫ್ ತಾಲ್ಲೂಕಿನ ವಡ್ರಹಳ್ಳಿ ಗ್ರಾಮದ ವಿದ್ಯಾರ್ಥಿನಿ ಸಾವಿನ ಪ್ರಕರಣ ಸಂಬಂಧ ಉನ್ನತ ತನಿಖೆ ನಡೆಸುವಂತೆ ಒತ್ತಾಯಿಸಿ ವಿವಿಧ ಸಂಘಟನೆಗಳ ಸದಸ್ಯರು ಇಲ್ಲಿ ಸೋಮವಾರ ಧರಣಿ ನಡೆಸಿದರು.

‘ವಡ್ರಹಳ್ಳಿಯ ವಿದ್ಯಾರ್ಥಿನಿ ಅನುಮಾನಾಸ್ಪದವಾಗಿ ಮೃತಪಟ್ಟಿದ್ದಾಳೆ. ಆದರೆ, ಪೊಲೀಸರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿಲ್ಲ’ ಎಂದು ಧರಣಿನಿರತರು ಆಕ್ರೋಶ ವ್ಯಕ್ತಪಡಿಸಿದರು.

‘ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಅಪರಾಧ ಚಟುವಟಿಕೆಗಳು ಹೆಚ್ಚಿವೆ. ಮಹಿಳೆಯರು ಹಾಗೂ ಹೆಣ್ಣು ಮಕ್ಕಳಿಗೆ ರಕ್ಷಣೆ ಇಲ್ಲವಾಗಿದೆ. ಆಡಳಿತಾತ್ಮಕ ಅರಾಜಕತೆ ಸೃಷ್ಟಿಯಾಗಿದೆ’ ಎಂದು ಜನವಾದಿ ಮಹಿಳಾ ಸಂಘಟನೆ ರಾಜ್ಯ ಘಟಕದ ಅಧ್ಯಕ್ಷೆ ವಿ.ಗೀತಾ ಆರೋಪಿಸಿದರು.

ADVERTISEMENT

‘ಮೃತ ವಿದ್ಯಾರ್ಥಿನಿ ಬಳಿ ವಿನೋದ್‌ ಎಂಬಾತನ ಫೋಟೊಗಳು ಪತ್ತೆಯಾಗಿವೆ. ಆತನೇ ವಿದ್ಯಾರ್ಥಿನಿಯನ್ನು ಕೊಲೆ ಮಾಡಿರುವ ಸಾಧ್ಯತೆ ಇದೆ. ವಿದ್ಯಾರ್ಥಿನಿ ಸಾವಿನ ನಂತರ ಕೆಲ ಸ್ಥಳೀಯ ಮುಖಂಡರು ವಿನೋದ್‌ ಮತ್ತು ಸಂತ್ರಸ್ತ ವಿದ್ಯಾರ್ಥಿನಿ ಕುಟುಂಬ ಸದಸ್ಯರ ನಡುವೆ ರಾಜಿ ಮಾಡಿಸಲು ಯತ್ನಿಸಿದ್ದಾರೆ. ಇದು ಖಂಡನೀಯ’ ಎಂದರು.

‘ಹಿಂದಿನ ವರ್ಷ ಮಾಲೂರಿನಲ್ಲಿ ಕಿಡಿಗೇಡಿಯೊಬ್ಬ ವಿದ್ಯಾರ್ಥಿನಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಕೊಲೆ ಮಾಡಿದ್ದ. ಆ ಪ್ರಕರಣದ ಕಹಿ ನೆನಪು ಮಾಸುವ ಮುನ್ನವೇ ಕೆಜಿಎಫ್‌ ತಾಲ್ಲೂಕಿನಲ್ಲಿ ಮತ್ತೊಬ್ಬ ವಿದ್ಯಾರ್ಥಿನಿ ನಿಗೂಢವಾಗಿ ಮೃತಪಟ್ಟಿದ್ದಾಳೆ. ಜಿಲ್ಲೆಯಲ್ಲಿ ಹೆಣ್ಣು ಮಕ್ಕಳು ಜೀವ ಭಯದಲ್ಲಿ ಬದುಕುವಂತಾಗಿದೆ’ ಎಂದು ಹೇಳಿದರು.

ವಿದ್ಯಾರ್ಥಿನಿಯರಿಗೆ ಆತಂಕ: ‘ದೇಶಕ್ಕೆ ಸ್ವಾತಂತ್ರ್ಯ ಬಂದು ಏಳು ದಶಕವಾದರೂ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ, ಅತ್ಯಾಚಾರ ಮುಂದುವರಿದಿದೆ. ಮಗಳ ಮೇಲೆ ವಿನೋದ್‌ ಅತ್ಯಾಚಾರ ಎಸಗಿದ್ದಾನೆ ಎಂದು ವಿದ್ಯಾರ್ಥಿನಿ ತಾಯಿ ಆರೋಪಿಸಿದ್ದಾರೆ. ಈ ಪ್ರಕರಣದಿಂದ ಶಾಲಾ ಕಾಲೇಜು ವಿದ್ಯಾರ್ಥಿನಿಯರು ಆತಂಕಗೊಂಡಿದ್ದಾರೆ. ಪೋಷಕರು ಹೆಣ್ಣು ಮಕ್ಕಳನ್ನು ಶಾಲಾ ಕಾಲೇಜಿಗೆ ಕಳುಹಿಸಲು ಭಯಪಡುವಂತಾಗಿದೆ’ ಎಂದು ಧರಣಿನಿರತರು ಆತಂಕ ವ್ಯಕ್ತಪಡಿಸಿದರು.

‘ವಡ್ರಹಳ್ಳಿ ಪ್ರಕರಣದಿಂದ ನಾಗರೀಕ ಸಮಾಜ ತಲೆ ತಗ್ಗಿಸುವಂತಾಗಿದೆ. ನೊಂದವರು ಪೊಲೀಸ್ ಠಾಣೆಗೆ ದೂರು ನೀಡಿದರೂ ನ್ಯಾಯ ಸಿಗುತ್ತಿಲ್ಲ. ಪೊಲೀಸರು ನಿಷ್ಪಕ್ಷಪಾತವಾಗಿ ತನಿಖೆ ನಡೆಸುತ್ತಿಲ್ಲ. ವಿದ್ಯಾರ್ಥಿನಿ ಕುಟುಂಬಕ್ಕೆ ನ್ಯಾಯ ಸಿಗುವ ವಿಶ್ವಾಸವಿಲ್ಲ’ ಎಂದು ಕಿಡಿಕಾರಿದರು.

ತಂಡ ರಚಿಸಬೇಕು: ‘ಸಂತ್ರಸ್ತ ವಿದ್ಯಾರ್ಥಿನಿ ಕುಟುಂಬಕ್ಕೆ ಪರಿಹಾರ ನೀಡಬೇಕು, ನ್ಯಾಯಮೂರ್ತಿ ವರ್ಮಾ ಸಮಿತಿಯ ಶಿಫಾರಸು ಜಾರಿ ಮಾಡಬೇಕು. ಹೆಣ್ಣು ಮಕ್ಕಳಿಗೆ ರಕ್ಷಣೆ ನೀಡಬೇಕು. ಇಂತಹ ಪ್ರಕರಣಗಳು ಮರುಕಳಿಸದಂತೆ ಎಚ್ಚರಿಕೆ ವಹಿಸಬೇಕು’ ಎಂದು ಒತ್ತಾಯಿಸಿದರು.

‘ಪ್ರಕರಣದ ತನಿಖೆಗೆ ವಿಶೇಷ ತಂಡ ರಚಿಸಬೇಕು. ಪೊಲೀಸರು ಯಾವುದೇ ಒತ್ತಡಕ್ಕೆ ಮಣಿಯದೆ ನಿಷ್ಪಕ್ಷಪಾತವಾಗಿ ತನಿಖೆ ನಡೆಸಬೇಕು. ಜತೆಗೆ ಪ್ರಕರಣದ ವಿಚಾರಣೆಯನ್ನು ಸಾಧ್ಯವಾದಷ್ಟು ಶೀಘ್ರವಾಗಿ ಪೂರ್ಣಗೊಳಿಸಿ ಆರೋಪಿಗೆ ಶಿಕ್ಷೆ ವಿಧಿಸಬೇಕು’ ಎಂದು ಆಗ್ರಹಿಸಿದರು.

ರೈತ ಸಂಘ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಎ.ನಳಿನಿ, ಸದಸ್ಯೆ ಉಮಾ, ವಿವಿಧ ಸಂಘಟನೆಗಳ ಸದಸ್ಯರಾದ ಟಿ.ವಿಜಯ್‌ಕುಮಾರ್‌, ವೆಂಕಟೇಶ್, ಸಿ.ನಾಗೇಶ್‌ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.