ADVERTISEMENT

ಜನನಿ ಸುರಕ್ಷಾ: ಸಾಧನೆ ಉತ್ತಮಪಡಿಸಿ– ಜಿಲ್ಲಾಧಿಕಾರಿ ಮಂಜುನಾಥ್‌ ಸೂಚನೆ

​ಪ್ರಜಾವಾಣಿ ವಾರ್ತೆ
Published 18 ಸೆಪ್ಟೆಂಬರ್ 2019, 13:12 IST
Last Updated 18 ಸೆಪ್ಟೆಂಬರ್ 2019, 13:12 IST

ಕೋಲಾರ: ‘ಜಿಲ್ಲೆಯಲ್ಲಿ ಜನನಿ ಸುರಕ್ಷಾ ಯೋಜನೆಯಲ್ಲಿ ಶೇ 66ರಷ್ಟು ಸಾಧನೆಯಾಗಿದ್ದು, ಇದನ್ನು ಉತ್ತಮಪಡಿಸಲು ತಾಯಿಯ ಕಾರ್ಡ್‌ನಲ್ಲಿ ಫಲಾನುಭವಿಯ ಬ್ಯಾಂಕ್ ಖಾತೆ ವಿವರ ಕಡ್ಡಾಯವಾಗಿ ನಮೂದಿಸಲು ಅವಕಾಶ ಕಲ್ಪಿಸುವಂತೆ ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಿ’ ಎಂದು ಜಿಲ್ಲಾಧಿಕಾರಿ ಜೆ.ಮಂಜುನಾಥ್ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಇಲ್ಲಿ ಬುಧವಾರ ನಡೆದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ವಿವಿಧ ಯೋಜನೆಗಳ ಸಮನ್ವಯ ಸಮಿತಿ ಸಭೆಯಲ್ಲಿ ಮಾತನಾಡಿ, ‘ಗರ್ಭಿಣಿಯರ ತಪಾಸಣೆ ಹಾಗೂ ಆಸ್ಪತ್ರೆಗಳಲ್ಲಿ ಹೆರಿಗೆ ಆಗಿರುವ ಪ್ರಮಾಣ ಶೇ 99ರಷ್ಟಿದೆ. ಜನನಿ ಸುರಕ್ಷಾ ಯೋಜನೆ ಪ್ರಗತಿ ಶೇ 60 ಇರುವುದರಿಂದ ಫಲಾನುಭವಿಗಳ ಪ್ರಮಾಣ ಹೆಚ್ಚಿಸಲು ಕ್ರಮ ಕೈಗೊಳ್ಳಿ’ ಎಂದು ತಿಳಿಸಿದರು.

‘ಜನನಿ ಸುರಕ್ಷಾ, ಮಾತೃವಂದನಾ, ಮಾತೃಪೂರ್ಣ ಸೇರಿದಂತೆ ಸರ್ಕಾರಿ ಯೋಜನೆಗಳ ಸಮರ್ಪಕ ಅನುಷ್ಠಾನಕ್ಕೆ ಅವುಗಳ ಮೌಲ್ಯಮಾಪನ ನಡೆಸಬೇಕು. 6 ವರ್ಷದ ಮಕ್ಕಳು, ಗರ್ಭಿಣಿಯರು ಮತ್ತು ಬಾಣಂತಿಯರ ಪೌಷ್ಟಿಕ ಸ್ಥಿತಿ ಸುಧಾರಿಸಲು ಸರ್ಕಾರ ರೂಪಿಸಿರುವ ಕಾರ್ಯಕ್ರಮಗಳ ಬಗ್ಗೆ ಅರಿವು ಮೂಡಿಸಿ’ ಎಂದು ಹೇಳಿದರು.

ADVERTISEMENT

‘ಪೋಷಣ್ ಅಭಿಯಾನ ಸಮರ್ಪಕವಾಗಿ ಜಾರಿಗೊಳಿಸಬೇಕು. ಅಭಿಯಾನದ ಭಾಗವಾಗಿ ಪ್ರತಿ ಪ್ರಾಥಮಿಕ ಆರೋಗ್ಯ ಕೇಂದ್ರದ ಮಟ್ಟದಲ್ಲಿ ಕಾರ್ಯ ಚಟುವಟಿಕೆಗಳ ವಿಶ್ಲೇಷಣೆ ನಡೆಸಿ, ಸಮಸ್ಯೆ ಪರಿಹರಿಸಬೇಕು. ಜಿಲ್ಲೆಯಲ್ಲಿ 2,061 ಅಂಗನವಾಡಿ ಕೇಂದ್ರಗಳಿದ್ದು, ಈ ಪೈಕಿ 900 ಕೇಂದ್ರಗಳಲ್ಲಿ ಶೌಚಾಲಯ ಇಲ್ಲದಿರುವುದು ದುರಂತ. 900 ಅಂಗನವಾಡಿಗಳ ಪೈಕಿ ಎಷ್ಟರಲ್ಲಿ ಶೌಚಾಲಯಗಳು ನಿರ್ಮಾಣ ಹಂತದಲ್ಲಿವೆ ಎಂಬ ವಿವರ ನೀಡಿ. ಶಾಸಕರಿಂದ ಅನುದಾನ ಪಡೆದು ಅಂಗನವಾಡಿ ಕಟ್ಟಡ ನಿರ್ಮಿಸಿ’ ಎಂದರು.

‘ಜಿಲ್ಲೆಯ 1,316 ಅಂಗನವಾಡಿ ಕೇಂದ್ರಗಳಲ್ಲಿ ಪ್ರತಿ ತಿಂಗಳ ಮೂರನೇ ಶನಿವಾರ ಪೋಷಣಾ ದಿನದ ಕಾರ್ಯಕ್ರಮ ನಡೆಸಬೇಕು. ತಿಂಗಳವಾರು ಪ್ರಗತಿಯಲ್ಲಿ ಏರುಪೇರು ಕಂಡುಬರುತ್ತಿದೆ. ಶೇ 100ರಷ್ಟು ಕಾರ್ಯಕ್ರಮ ಅನುಷ್ಠಾನಗೊಳ್ಳದಿದ್ದರೆ ಅದಕ್ಕೆ ಅಧಿಕಾರಿಗಳೇ ಜವಾಬ್ದಾರಿ’ ಎಂದು ಎಚ್ಚರಿಕೆ ನೀಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್‌.ಎನ್‌.ವಿಜಯ್‌ಕುಮಾರ್‌, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಪಾಲಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕಿ ಎಚ್.ಎಸ್.ಸಿಂಧೂ, ತಾಯಿ ಮತ್ತು ಮಕ್ಕಳ ಆರೋಗ್ಯ ಯೋಜನಾಧಿಕಾರಿ (ಆರ್‌ಸಿಎಚ್‌) ಡಾ.ಚಂದನ್‌ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.