ADVERTISEMENT

ಜನಹಿತ ಮರೆತ ರಾಜ್ಯ ಸರ್ಕಾರ

ಮುಳಬಾಗಿಲು: ಜೆಡಿಎಸ್‌ ಅಭ್ಯರ್ಥಿ ರಾಮು ಪರ ಕುಮಾರಸ್ವಾಮಿ ಪ್ರಚಾರ

​ಪ್ರಜಾವಾಣಿ ವಾರ್ತೆ
Published 4 ಡಿಸೆಂಬರ್ 2021, 2:25 IST
Last Updated 4 ಡಿಸೆಂಬರ್ 2021, 2:25 IST
ಕೋಲಾರ-ಚಿಕ್ಕಬಳ್ಳಾಪುರ ವಿಧಾನ ಪರಿಷತ್ ಕ್ಷೇತ್ರದ ಚುನಾವಣೆಗೆ ಸ್ಪರ್ಧಿಸಿರುವ ಜೆಡಿಎಸ್ ಅಭ್ಯರ್ಥಿ ರಾಮು ಪರವಾಗಿ ಮುಳಬಾಗಿಲು ಹೊರವಲಯದ ಸೊನವಾಡಿ ಗ್ರಾಮದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಮಾತನಾಡಿದರು. ಸಮೃದ್ಧಿ ಮಂಜುನಾಥ್, ಕಾಡೇನಹಳ್ಳಿ ನಾಗರಾಜ್, ಜಿ.ಕೆ. ವೆಂಕಟಶಿವರೆಡ್ಡಿ ಹಾಜರಿದ್ದರು
ಕೋಲಾರ-ಚಿಕ್ಕಬಳ್ಳಾಪುರ ವಿಧಾನ ಪರಿಷತ್ ಕ್ಷೇತ್ರದ ಚುನಾವಣೆಗೆ ಸ್ಪರ್ಧಿಸಿರುವ ಜೆಡಿಎಸ್ ಅಭ್ಯರ್ಥಿ ರಾಮು ಪರವಾಗಿ ಮುಳಬಾಗಿಲು ಹೊರವಲಯದ ಸೊನವಾಡಿ ಗ್ರಾಮದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಮಾತನಾಡಿದರು. ಸಮೃದ್ಧಿ ಮಂಜುನಾಥ್, ಕಾಡೇನಹಳ್ಳಿ ನಾಗರಾಜ್, ಜಿ.ಕೆ. ವೆಂಕಟಶಿವರೆಡ್ಡಿ ಹಾಜರಿದ್ದರು   

ಮುಳಬಾಗಿಲು: ‘ರಾಜ್ಯದಲ್ಲಿ ಅಕಾಲಿಕ ಮಳೆಯಿಂದ ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ರಾಜ್ಯ ಸರ್ಕಾರದಿಂದ ಸೂಕ್ತ ಪರಿಹಾರ ದೊರೆತಿಲ್ಲ. ರೈತರ ಬಗ್ಗೆ ಸರ್ಕಾರ ನಿರ್ಲಕ್ಷ್ಯವಹಿಸಿದೆ. ಕೋವಿಡ್‌ನಿಂದ ಸಾವಿರಾರು ಕುಟುಂಬಗಳು ಬೀದಿ ಪಾಲಾಗಿವೆ. ಸಂತ್ರಸ್ತರಿಗೆ ನೆರವು ಕಲ್ಪಿಸುವ ಹೃದಯ ವೈಶಾಲ್ಯತೆ ಸರ್ಕಾರಕ್ಕಿಲ್ಲ’ ಎಂದುಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಟೀಕಿಸಿದರು.‌

ನಗರ ಹೊರವಲಯದ ಸೊನವಾಡಿ ಗ್ರಾಮದಲ್ಲಿ ಶುಕ್ರವಾರ ಕೋಲಾರ-ಚಿಕ್ಕಬಳ್ಳಾಪುರ ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಿರುವ ಜೆಡಿಎಸ್ ಅಭ್ಯರ್ಥಿ ರಾಮು ಪರ ನಡೆದ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.

ಈ ಚುನಾವಣೆಯಲ್ಲಿ ಜೆಡಿಎಸ್ ಆರು ಸ್ಥಾನ ಗೆಲ್ಲುವುದು ಅನಿವಾರ್ಯವಾಗಿದೆ. ಈ ಚುನಾವಣೆಯು ಮುಂಬರುವ ವಿಧಾನಸಭಾ ಚುನಾವಣೆಗೆ ಜೆಡಿಎಸ್ ರಾಜಕೀಯ ಭವಿಷ್ಯಕ್ಕೆ ಬುನಾದಿಯಾಗಲಿದೆ ಎಂದು ಆಶಿಸಿದರು.

ADVERTISEMENT

ರಾಜ್ಯದಲ್ಲಿ 2018ರಿಂದಲೂ ಪೂರ್ಣ ಬಹುಮತದ ಸರ್ಕಾರ ರಚನೆಯಾಗಿಲ್ಲ. ಹೀಗಾಗಿ, ಮೈತ್ರಿ ಸರ್ಕಾರ ರಚಿಸುವ ಅನಿವಾರ್ಯತೆ ಸೃಷ್ಟಿಯಾಗಿತ್ತು. ಕಾಂಗ್ರೆಸ್, ಬಿಜೆಪಿ ಆಡಳಿತದ ಬಗ್ಗೆ ಜನರಿಗೆ ಅಸಮಾಧಾನವಿದೆ. 2023ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್‌ ಅನ್ನು ಅಧಿಕಾರಕ್ಕೆ ತರಲು ಮುಖಂಡರು ಮತ್ತು ಕಾರ್ಯಕರ್ತರು ಶ್ರಮಿಸಬೇಕು ಎಂದು ಸಲಹೆ ನೀಡಿದರು.

ಜೆಡಿಎಸ್‌ ಅಧಿಕಾರಕ್ಕೆ ಬಂದರೆ ಪ್ರತಿ ಕುಟುಂಬಕ್ಕೂ ಆರೋಗ್ಯ ಸೇವೆ ಕಲ್ಪಿಸಲಾಗುವುದು. ರೈತರಿಗೆ ಶಾಶ್ವತ ನೆರವು ನೀಡುವ ನೂತನ ಯೋಜನೆ ರೂಪಿಸಲಾಗುವುದು ಎಂದು ಹೇಳಿದರು.

ಮಾಜಿ ಶಾಸಕರಾದ ದಿವಂಗತ ಆಲಂಗೂರು ಶ್ರೀನಿವಾಸ್ ಅವರು ಪಕ್ಷವನ್ನು ಸದೃಢವಾಗಿ ಕಟ್ಟಿ ಬೆಳೆಸಿದ್ದರು. ಪ್ರಸ್ತುತ ಅವರ ಸಹೋದರ ಪಕ್ಷಕ್ಕೆ ದ್ರೋಹ ಬಗೆಯುತ್ತಿರುವುದು ವಿಷಾದನೀಯ ಎಂದು ಅವರ ಹೆಸರು ಪ್ರಸ್ತಾಪಿಸಿದೆ ಟೀಕಿಸಿದರು.

ತಾಲ್ಲೂಕು ಜೆಡಿಎಸ್ ಅಧ್ಯಕ್ಷ ಕಾಡೇನಹಳ್ಳಿ ನಾಗರಾಜ್ ಮಾತನಾಡಿ, ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಿರುವ ವಕ್ಕಲೇರಿ ರಾಮು ಪಕ್ಷದ ನಿಷ್ಠಾವಂತ ಕಾರ್ಯಕರ್ತರಾಗಿದ್ದಾರೆ ಎಂದು ಹೇಳಿದರು.

ಮುಖಂಡ ಜಿ.ಕೆ. ವೆಂಕಟಶಿವರೆಡ್ಡಿ, ಎಂಎಲ್‌ಸಿ ಇಂಚರ ಗೋವಿಂದರಾಜು, ಜಿ.ಪಂ. ಮಾಜಿ ಸದಸ್ಯ ಶ್ಯಾಮೇಗೌಡ ಮಾತನಾಡಿದರು. ವಿಧಾನ ಪರಿಷತ್‌ ಮಾಜಿ ಸದಸ್ಯ ಚೌಡರೆಡ್ಡಿ, ಜೆಡಿಎಸ್ ನಗರ ಘಟಕದ ಅಧ್ಯಕ್ಷ ತೇಜೋರಮಣ, ತಾ.ಪಂ. ಮಾಜಿ ಅಧ್ಯಕ್ಷ ಎಂ.ಎಸ್. ಶ್ರೀನಿವಾಸರೆಡ್ಡಿ, ಕವತನಹಳ್ಳಿ ಮುನಿಶಾಮಿಗೌಡ, ನಂಗಲಿ ಕಿಶೋರ್, ಡಾ.ಪ್ರಕಾಶ್, ನಗರಸಭೆ ಅಧ್ಯಕ್ಷ ರಿಯಾಜ್‌ ಅಹಮದ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.