ADVERTISEMENT

ಮಾಲೂರು: ಸರ್ಕಾರಿ ಆಸ್ಪತ್ರೆಗೆ ನ್ಯಾಯಮೂರ್ತಿ ಬಿ. ವೀರಪ್ಪ ಭೇಟಿ

ಸ್ವಚ್ಛತೆ ಕಣ್ಮರೆಗೆ ಹೈಕೋರ್ಟ್‌ ನ್ಯಾಯಮೂರ್ತಿ ಬಿ. ವೀರಪ್ಪ ಅಸಮಾಧಾನ

​ಪ್ರಜಾವಾಣಿ ವಾರ್ತೆ
Published 26 ಫೆಬ್ರುವರಿ 2023, 6:37 IST
Last Updated 26 ಫೆಬ್ರುವರಿ 2023, 6:37 IST
ಮಾಲೂರು ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ಹಾಗೂ ಹೈಕೋರ್ಟ್‌ ನ್ಯಾಯಮೂರ್ತಿ ಬಿ. ವೀರಪ್ಪ ಶನಿವಾರ ದಿಢೀರ್‌ ಭೇಟಿ ನೀಡಿ ಪರಿಶೀಲಿಸಿದರು. ಸರ್ಕಾರಿ ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ವಸಂತ್ ಇದ್ದರು
ಮಾಲೂರು ಪಟ್ಟಣದ ಸರ್ಕಾರಿ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ಹಾಗೂ ಹೈಕೋರ್ಟ್‌ ನ್ಯಾಯಮೂರ್ತಿ ಬಿ. ವೀರಪ್ಪ ಶನಿವಾರ ದಿಢೀರ್‌ ಭೇಟಿ ನೀಡಿ ಪರಿಶೀಲಿಸಿದರು. ಸರ್ಕಾರಿ ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ವಸಂತ್ ಇದ್ದರು   

ಮಾಲೂರು: ಪಟ್ಟಣದ ಸರ್ಕಾರಿ ಆಸ್ಪತ್ರೆಗೆ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ಹಾಗೂ ಹೈಕೋರ್ಟ್‌ ನ್ಯಾಯಮೂರ್ತಿ ಬಿ. ವೀರಪ್ಪ ಶನಿವಾರ ದಿಢೀರ್‌ ಭೇಟಿ ನೀಡಿ ಪರಿಶೀಲಿಸಿದರು.

ಪ್ರತಿ ವಾರ್ಡ್‌ಗೆ ಭೇಟಿ ನೀಡಿದ ಅವರು ರೋಗಿಗಳ ಆರೋಗ್ಯ ವಿಚಾರಿಸಿದರು. ಬಳಿಕ ಅವರಿಂದಲೇ ಆಸ್ಪತ್ರೆಯಲ್ಲಿನ ಸಮಸ್ಯೆಗಳ ಬಗ್ಗೆ ತಿಳಿದುಕೊಂಡರು. ಆಸ್ಪತ್ರೆಯಲ್ಲಿನ ಸ್ವಚ್ಛತೆ ಕೊರತೆ ಕಂಡು ಆಕ್ರೋಶ ವ್ಯಕ್ತಪಡಿಸಿದರು. ಆಸ್ಪತ್ರೆಯಲ್ಲಿನ ಔಷಧಿ ವಿತರಣಾ ಕೇಂದ್ರ ಮುಚ್ಚಿರುವುದನ್ನು ಕಂಡು ಹೌಹಾರಿದರು. ಈ ಬಗ್ಗೆ ಸರ್ಕಾರಿ ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ವಸಂತ್ ಅವರನ್ನು ಪ್ರಶ್ನಿಸಿದರು.

ಆಸ್ಪತ್ರೆಯಲ್ಲಿ ಸ್ವಚ್ಛತೆ ಸೇರಿದಂತೆ ಮೂಲ ಸೌಕರ್ಯದ ಕೊರತೆಯಿಂದ ರೋಗಿಗಳು ತುಂಬಾ ತೊಂದರೆಪಡುವಂತಾಗಿದೆ. ಹೆಚ್ಚಿನ ರೀತಿಯಲ್ಲಿ ಬಡವರು ಮತ್ತು ಮಧ್ಯಮ ವರ್ಗದ ರೋಗಿಗಳು ಸರ್ಕಾರಿ ಆಸ್ಪತ್ರೆಗಳಿಗೆ ಚಿಕಿತ್ಸೆಗೆ ಭೇಟಿ ನೀಡುತ್ತಾರೆ. ಸರ್ಕಾರಿ ಆಸ್ಪತ್ರೆಗಳ ಅಭಿವೃದ್ಧಿಗೆ ಸರ್ಕಾರ ಬೇಕಾದಷ್ಟು ಅನುದಾನವನ್ನು ಬಿಡುಗಡೆ ಮಾಡುತ್ತಿದೆ. ವೈದ್ಯರು ಸಮರ್ಪಕವಾಗಿ ಚಿಕಿತ್ಸೆ ನೀಡಬೇಕು ಎಂದು ತಾಕೀತು ಮಾಡಿದರು.

ADVERTISEMENT

ಡಾ.ವಸಂತ್ ಮಾತನಾಡಿ, ಪಟ್ಟಣ ಸೇರಿದಂತೆ ತಾಲ್ಲೂಕಿನಿಂದ ಪ್ರತಿದಿನ 1,400 ಹೊರ ರೋಗಿಗಳು ಭೇಟಿ ನೀಡಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಲ್ಲಿನ ವೈದ್ಯರು ಮತ್ತು ಸಿಬ್ಬಂದಿ ಹಗಲು, ರಾತ್ರಿ ಎನ್ನದೇ ಉತ್ತಮ ಸೇವೆ ಸಲ್ಲಿಸುತ್ತಿದ್ದಾರೆ. ಆಸ್ಪತ್ರೆಯ ಕಟ್ಟಡ ಬಹಳ ಹಳೆಯದಾಗಿದೆ. ರೋಗಿಗಳಿಗೆ ಅನುಗುಣವಾಗಿ ಕಟ್ಟಡದ ಕೊರತೆ ಇದೆ. ಸರ್ಕಾರಕ್ಕೆ ಹಲವು ಬಾರಿ ಮನವಿ ಮಾಡಲಾಗಿದೆ.
ಇರುವುದರಲ್ಲಿ ರೋಗಿಗಳಿಗೆ ಉತ್ತಮ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.

ಸದಸ್ಯ ಕಾರ್ಯದರ್ಶಿ ಶಶಿಧರ್‌ ಶೆಟ್ಟಿ, ಜಿಲ್ಲಾ ಸದಸ್ಯ ಸುನಿಲ್ ಹೊಸಮನಿ, ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ನಾರಾಯಣ, ಸರ್ಕಲ್ ಇನ್‌ಸ್ಪೆಕ್ಟರ್‌ ಚಂದ್ರಾಧರ್‌ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.