
ಬಂಗಾರಪೇಟೆ: ಗ್ರಾಮೀಣ ಭಾಗದ ಅಭಿವೃದ್ಧಿಗೆ ಮೂಲಭೂತ ಸೌಲಭ್ಯ ಕಲ್ಪಿಸುವುದು ಅಗತ್ಯ. ಇದನ್ನು ಆದ್ಯತೆ ಮೇರೆಗೆ ಹಂತ ಹಂತವಾಗಿ ಪೂರ್ಣಗೊಳಿಸಲಾಗುವುದು ಎಂದು ಶಾಸಕ ಎಸ್.ಎನ್.ನಾರಾಯಣಸ್ವಾಮಿ ತಿಳಿಸಿದರು.
ತಾಲ್ಲೂಕಿನ ಕಳವಂಚಿ ವೃತ್ತದಲ್ಲಿ ಸಿಸಿ ರಸ್ತೆ ನಿರ್ಮಾಣ ಕಾಮಗಾರಿ ಗುಣಮಟ್ಟವನ್ನು ಭಾನುವಾರ ಪರಿಶೀಲಿಸಿ ಮಾತನಾಡಿದ ಅವರು, ಅಭಿವೃದ್ಧಿ ಕೇವಲ ನಗರ ಪ್ರದೇಶಕ್ಕೆ ಸೀಮಿತವಾಗದೆ, ಗಡಿ ಭಾಗದಲ್ಲಿರುವ ಪ್ರತಿಯೊಂದು ಗ್ರಾಮದಲ್ಲಿ ಯಾವ ಸೌಲಭ್ಯದ ಅಗತ್ಯವಿದೆಯೋ ಅದನ್ನು ಪರಿಶೀಲಿಸಿ ಹಂತ ಹಂತವಾಗಿ ಸೌಲಭ್ಯ ಕಲ್ಪಿಸಲಾಗುವುದು ಎಂದು ಭರವಸೆ ನೀಡಿದರು.
ಕಾಮಸಮುದ್ರ ಹೋಬಳಿ ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲಿ ಮೂಲಭೂತ ಸೌಲಭ್ಯವನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲು ₹200 ಕೋಟಿ ಅನುದಾನ ಮಂಜೂರು ಮಾಡಲಾಗಿದೆ. ಕುಡಿಯುವ ನೀರು, ಚರಂಡಿ ನಿರ್ಮಾಣ, ರಸ್ತೆ ಅಭಿವೃದ್ಧಿ, ಸಿಸಿ ರಸ್ತೆ ನಿರ್ಮಾಣ, ಹೈಮಾಸ್ಟ್ ದೀಪಗಳ ಅಳವಡಿಕೆ ಹಾಗೂ ಇತರೆ ಕಾಮಗಾರಿಗಳಿಗೆ ಆದ್ಯತೆ ನೀಡಲಾಗುವುದು ಎಂದರು.
ತೊಪ್ಪನಹಳ್ಳಿ ಗ್ರಾ.ಪಂ.ಅಧ್ಯಕ್ಷ. ಪ್ರಭಾಕರ್ ರೆಡ್ಡಿ, ಕಾಮಸಮುದ್ರ ಗ್ರಾ.ಪಂ.ಅಧ್ಯಕ್ಷ ಆದಿ ನಾರಾಯಣ ಕುಟ್ಟಿ, ಡಿಸಿಸಿ ಬ್ಯಾಂಕ್ ನಿರ್ದೇಶಕ ರಂಗನಾಥಾಚಾರಿ, ಉಪಾಧ್ಯಕ್ಷೆ ಲಾವಣ್ಯ ಹಂಸಾನಂದ, ಗ್ರಾ.ಪಂ. ಮಾಜಿ ಅಧ್ಯಕ್ಷ ಲಕ್ಷ್ಮಿ ನಾರಾಯಣ ಪ್ರಸಾದ್, ರಾಮಣ್ಣ, ಆರಿಮಾನಹಳ್ಳಿ ಮಂಜುನಾಥ, ಮುನೀರ್, ವರದರಾಜ, ಶಿವ ಕುಮಾರ್, ರಾಜೇಂದ್ರ ಭಾರತಿ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.