ADVERTISEMENT

ಕೋಲಾರ: ‘ಕನ್ನಡ ಭಾಷೆಗೆ ಆದ್ಯತೆ ಸಿಗಲಿ’: ಜಿ.ಕೆ. ವೆಂಕಟಶಿವಾರೆಡ್ಡಿ

ಶ್ರೀನಿವಾಸಪುರ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಪ್ರತಿಪಾದನೆ

​ಪ್ರಜಾವಾಣಿ ವಾರ್ತೆ
Published 21 ಜನವರಿ 2023, 5:37 IST
Last Updated 21 ಜನವರಿ 2023, 5:37 IST
ಶ್ರೀನಿವಾಸಪುರ ತಾಲ್ಲೂಕಿನ ಯಲ್ದೂರಿನ ನ್ಯಾಷನಲ್ ಪ್ರೌಢಶಾಲೆಯಲ್ಲಿ ಗುರುವಾರ ಏರ್ಪಡಿಸಿದ್ದ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಸಾಧಕರನ್ನು ಸನ್ಮಾನಿಸಲಾಯಿತು
ಶ್ರೀನಿವಾಸಪುರ ತಾಲ್ಲೂಕಿನ ಯಲ್ದೂರಿನ ನ್ಯಾಷನಲ್ ಪ್ರೌಢಶಾಲೆಯಲ್ಲಿ ಗುರುವಾರ ಏರ್ಪಡಿಸಿದ್ದ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭದಲ್ಲಿ ಸಾಧಕರನ್ನು ಸನ್ಮಾನಿಸಲಾಯಿತು   

ಶ್ರೀನಿವಾಸಪುರ: ತಾಲ್ಲೂಕಿನ ಯಲ್ದೂರಿನ ನ್ಯಾಷನಲ್ ಪ್ರೌಢಶಾಲೆ ಆವರಣದಲ್ಲಿ ಗುರುವಾರ ತಾಲ್ಲೂಕು ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ ಸಮಾರಂಭ ನಡೆಯಿತು.

ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಜಿ.ಕೆ. ವೆಂಕಟಶಿವಾರೆಡ್ಡಿ ಮಾತನಾಡಿ, ‘ಗಡಿ ಭಾಗದಲ್ಲಿ ಕನ್ನಡ ಸಾಹಿತ್ಯ ಸಂಭ್ರಮ ಜೀವಂತವಾಗಿರುವಂತೆ ನೋಡಿಕೊಳ್ಳಬೇಕು. ಯುವ ಸಮುದಾಯ ಸಾಹಿತ್ಯ ಕೃತಿಗಳ ಓದಿನತ್ತ ಹಿಂದಿರುಗಬೇಕು’ ಎಂದು ಸಲಹೆ ನೀಡಿದರು.

ತಾಲ್ಲೂಕಿನಲ್ಲಿ ಕನ್ನಡ ಪ್ರೀತಿಗೆ ಕೊರತೆಯಿಲ್ಲ. ಆದರೆ ಜನರು ತಮ್ಮ ದೈನಂದಿನ ವ್ಯವಹಾರದಲ್ಲಿ ಕನ್ನಡ ಬಳಕೆ ಮಾಡದಿರುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟರು.

ADVERTISEMENT

ಗಡಿ ಪ್ರದೇಶದ ಕನ್ನಡ ಶಾಲೆಗಳ ಅಭಿವೃದ್ಧಿಗೆ ಸರ್ಕಾರ ವಿಶೇಷ ಗಮನ ನೀಡಬೇಕು. ಕನ್ನಡ ಶಾಲೆಗಳಲ್ಲಿ ಅಭ್ಯಾಸ ಮಾಡುವ ವಿದ್ಯಾರ್ಥಿಗಳಿಗೆ ವಿಶೇಷ ಸೌಲಭ್ಯ ಒದಗಿಸಬೇಕು. ಉನ್ನತ ಶಿಕ್ಷಣದಲ್ಲಿ ಆದ್ಯತೆ ನೀಡಬೇಕು. ಕನ್ನಡ ಮಾಧ್ಯಮದಲ್ಲಿ ಓದಿದ ವಿದ್ಯಾರ್ಥಿಗಳಿಗೆ ಸರ್ಕಾರಿ ಉದ್ಯೋಗದಲ್ಲಿ ವಿಶೇಷ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎನ್.ಬಿ. ಗೋಪಾಲಗೌಡ, ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷೆ ಪಿ.ಎಸ್. ಮಂಜುಳ, ಪದಾಧಿಕಾರಿಗಳಾದ ಎಂ. ಬೈರೇಗೌಡ, ಲಕ್ಷ್ಮಣರೆಡ್ಡಿ, ಶಂಕರೇಗೌಡ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ತೂಪಲ್ಲಿ ಆರ್. ನಾರಾಯಣಸ್ವಾಮಿ, ಮುಖಂಡ ಮಣಿ, ಮುಖ್ಯ ಶಿಕ್ಷಕ ಎಚ್.ಸಿ. ಮೋಕ್ಷಗುರು ಲಿಂಗಾರಾಧ್ಯ ಇದ್ದರು.

ಕನ್ನಡ ಬಳಕೆ ಹೆಚ್ಚಿದೆ

ಸಾಹಿತಿ ಪನಸಮಾಕನಹಳ್ಳಿ ಆರ್.ಚೌಡರೆಡ್ಡಿ ಸಮಾರೋಪ ಭಾಷಣ ಮಾಡಿ, ತಾಲ್ಲೂಕಿನಲ್ಲಿ ಕನ್ನಡ ಭಾಷೆ ಅರಳುತ್ತಿದೆ. ಹಿಂದಿನ ಪರಿಸ್ಥಿತಿ ಈಗಿಲ್ಲ. ಗ್ರಾಮೀಣ ಪ್ರದೇಶದಲ್ಲಿ ಕನ್ನಡ ಮಾತನಾಡುವುದು ಪ್ಯಾಷನ್ ಆಗುತ್ತಿದೆ. ಮಕ್ಕಳು ತಮ್ಮ ಅಜ್ಜ , ಅಜ್ಜಿಯೊಂದಿಗೆ ಕನ್ನಡದಲ್ಲಿ ಮಾತನಾಡುತ್ತಿದ್ದಾರೆ. ಇದರಿಂದಾಗಿ ಹಿರಿಯರಿಗೂ ಕನ್ನಡ ಭಾಷೆ ಆಪ್ತವಾಗುತ್ತಿದೆ ಎಂದು ಹೇಳಿದರು.

ಜನಪ್ರತಿನಿಧಿಗಳು ಸಾರ್ವಜನಿಕ ಸಮಾರಂಭಗಳು ಹಾಗೂ ಕಚೇರಿ ಸಭೆಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಕನ್ನಡ ಭಾಷೆ ಬಳಸಬೇಕು. ಅನಗತ್ಯವಾಗಿ ಅನ್ಯಭಾಷೆ ಬಳಸುವುದನ್ನು ಬಿಡಬೇಕು ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.