ADVERTISEMENT

ಕನ್ನಡಿಗರು ಒಪ್ಪುವಂತೆ ನಾಡು ನುಡಿ ಸೇವೆ: ಎನ್.ಬಿ.ಗೋಪಾಲಗೌಡ

​ಪ್ರಜಾವಾಣಿ ವಾರ್ತೆ
Published 9 ಡಿಸೆಂಬರ್ 2021, 13:52 IST
Last Updated 9 ಡಿಸೆಂಬರ್ 2021, 13:52 IST
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ನೂತನ ಅಧ್ಯಕ್ಷ ಎನ್.ಬಿ.ಗೋಪಾಲಗೌಡ ಕೋಲಾರದಲ್ಲಿ ಗುರುವಾರ ಪರಿಷತ್ತಿನ ನಿರ್ಗಮಿತ ಅಧ್ಯಕ್ಷ ನಾಗಾನಂದ ಕೆಂಪರಾಜ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಕುಮಾರ್‌ ಅವರಿಂದ ಕಸಾಪ ಧ್ವಜ ಪಡೆಯುವ ಮೂಲಕ ಅಧಿಕಾರ ಸ್ವೀಕರಿಸಿದರು
ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ನೂತನ ಅಧ್ಯಕ್ಷ ಎನ್.ಬಿ.ಗೋಪಾಲಗೌಡ ಕೋಲಾರದಲ್ಲಿ ಗುರುವಾರ ಪರಿಷತ್ತಿನ ನಿರ್ಗಮಿತ ಅಧ್ಯಕ್ಷ ನಾಗಾನಂದ ಕೆಂಪರಾಜ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ರವಿಕುಮಾರ್‌ ಅವರಿಂದ ಕಸಾಪ ಧ್ವಜ ಪಡೆಯುವ ಮೂಲಕ ಅಧಿಕಾರ ಸ್ವೀಕರಿಸಿದರು   

ಕೋಲಾರ: ‘ಗಡಿ ಜಿಲ್ಲೆಯ ಸಮಸ್ತ ಕನ್ನಡಿಗರು ಒಪ್ಪುವಂತೆ ನಾಡು ನುಡಿ ಸೇವೆಗೆ ಮುಂದಿನ 5 ವರ್ಷಗಳನ್ನು ಪರಿಣಾಮಕಾರಿಯಾಗಿ ಬಳಸುತ್ತೇನೆ’ ಎಂದು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ನೂತನ ಅಧ್ಯಕ್ಷ ಎನ್.ಬಿ.ಗೋಪಾಲಗೌಡ ಘೋಷಿಸಿದರು.

ಇಲ್ಲಿ ಗುರುವಾರ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಕಚೇರಿಯಲ್ಲಿ ಅಧಿಕಾರ ಸ್ವೀಕರಿಸಿ ಮಾತನಾಡಿ, ‘ಕೇವಲ ಅಧಿಕಾರ ಅಥವಾ ಸ್ಥಾನಮಾನಕ್ಕಾಗಿ ನಾನು ಪರಿಷತ್ತಿನ ಅಧ್ಯಕ್ಷನಾಗಿಲ್ಲ. ವೈಯಕ್ತಿಕ ಕೆಲಸ ಕಾರ್ಯಗಳಿಗೆ ನೀಡುವ ಸಮಯವನ್ನು ಮುಂದೆ ಕನ್ನಡ ನಾಡು ನುಡಿ ಸೇವೆಗೆ ಮುಡಿಪಾಗಿಡುತ್ತೇನೆ. ಎಲ್ಲರೂ ಒಪ್ಪುವಂತೆ ಕನ್ನಡ ಸೇವೆ ಹಾಗೂ ಕಾರ್ಯಕ್ರಮಗಳನ್ನು ಮಾಡುತ್ತೇನೆ’ ಎಂದರು.

‘ಗಡಿ ಜಿಲ್ಲಾ ಕೇಂದ್ರದಲ್ಲಿ ಕನ್ನಡ ಭವನ ನಿರ್ಮಾಣ, ಯುವ ಬರಹಗಾರರಿಗೆ ಪ್ರೋತ್ಸಾಹಿಸುವ ಕಾರ್ಯಕ್ರಮ ಮತ್ತು ಕನ್ನಡ ಬೆಳೆಸುವ ಕಾರ್ಯಕ್ರಮಗಳಿಗೆ ಹೆಚ್ಚು ಒತ್ತು ಕೊಡುತ್ತೇನೆ. ಈ ಸಂಬಂಧ ಜಿಲ್ಲೆಯ ಸಮಸ್ತ ಕನ್ನಡಿಗರು, ಸಾಹಿತಿಗಳು ಸೂಕ್ತ ಸಲಹೆ ಮಾರ್ಗದರ್ಶನ ನೀಡಬೇಕು’ ಎಂದು ಮನವಿ ಮಾಡಿದರು.

ADVERTISEMENT

‘ಇಂದು ಸಾಂಕೇತಿಕವಾಗಿ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದೇನೆ. ಮುಂದೆ ಕೇಂದ್ರ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಮಹೇಶ್ ಜೋಷಿ ಅವರಿಗೆ ಅಭಿನಂದನಾ ಕಾರ್ಯಕ್ರಮ ಹಾಗೂ ನನ್ನ ಆಯ್ಕೆಗೆ ಸಹಕರಿಸಿದ ಪರಿಷತ್ತಿನ ಎಲ್ಲಾ ಸದಸ್ಯರಿಗೆ ಧನ್ಯವಾದ ಅರ್ಪಣೆ ಕಾರ್ಯಕ್ರಮವನ್ನು ಟಿ.ಚನ್ನಯ್ಯ ರಂಗಮಂದಿರದಲ್ಲಿ ಆಯೋಜಿಸಲಾಗುವುದು’ ಎಂದು ಹೇಳಿದರು.

ಸಹಕರಿಸುತ್ತೇನೆ: ‘ನಾಡು ನುಡಿಯ ಅಭಿವೃದ್ಧಿಗಾಗಿ ನೂತನ ಅಧ್ಯಕ್ಷರು ರೂಪಿಸುವ ಎಲ್ಲಾ ಕಾರ್ಯಕ್ರಮಗಳಿಗೆ ಸಂಪೂರ್ಣ ಸಹಕರಿಸುತ್ತೇನೆ’ ಎಂದು ಪರಿಷತ್ತಿನ ನಿರ್ಗಮಿತ ಅಧ್ಯಕ್ಷ ನಾಗಾನಂದ ಕೆಂಪರಾಜ್‌ ಭರವಸೆ ನೀಡಿದರು.

‘ಜಿಲ್ಲೆಯಲ್ಲಿ ಪರಿಷತ್ತಿನ ನನ್ನ ಅವಧಿಯಲ್ಲಿ ಆರಂಭಿಸಿರುವ ಉತ್ತಮ ಕನ್ನಡ ಕಾರ್ಯಕ್ರಮಗಳನ್ನು ಮುಂದುವರಿಸಿಕೊಂಡು ಹೋಗಬೇಕು’ ಎಂದು ಮನವಿ ಮಾಡಿದರು.

ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಮಾಜಿ ಅಧ್ಯಕ್ಷ ಜೆ.ಜಿ.ನಾಗರಾಜ್, ಉಪನ್ಯಾಸಕರಾದ ಮುರಳೀಧರ, ಆರ್.ಶಂಕರಪ್ಪ, ನಿವೃತ್ತ ಪ್ರಾಂಶುಪಾಲ ಎ.ವಿ.ರೆಡ್ಡಿ, ಕಸಾಪ ಮುಖಂಡರು, ಹಿಂದಿನ ಅವಧಿಯ ಪದಾಧಿಕಾರಿಗಳು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.