
ಕೋಲಾರ: ನಗರದಲ್ಲಿ ಭಾನುವಾರ (ಡಿ.7) ಬೆಳಿಗ್ಗೆ ಹಾಗೂ ಮಧ್ಯಾಹ್ನ ಕರ್ನಾಟಕ ರಾಜ್ಯ ಶಿಕ್ಷಕರ ಅರ್ಹತಾ ಪರೀಕ್ಷೆಗಳು (ಟಿಇಟಿ) ನಡೆಯಲಿದ್ದು, ಒಟ್ಟು 7,309 ಅಭ್ಯರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ.
ಬೆಳಿಗ್ಗೆ 9.30ರಿಂದ 12 ಗಂಟೆವರೆಗೆ ನಡೆಯುವ ಮೊದಲ ಅಧಿವೇಶನದಲ್ಲಿ (ಪತ್ರಿಕೆ–1; 1ರಿಂದ 5ನೇ ತರಗತಿ ಬೋಧಿಸುವ ಶಿಕ್ಷಕರು) 9 ಕೇಂದ್ರಗಳಲ್ಲಿ 2,016 ಅಭ್ಯರ್ಥಿಗಳು ಹಾಗೂ ಮಧ್ಯಾಹ್ನ 2ರಿಂದ 4.30ರವರೆಗೆ ನಡೆಯುವ ದ್ವಿತೀಯ ಅಧಿವೇಶನದಲ್ಲಿ (ಪತ್ರಿಕೆ–2; 6ರಿಂದ 8ನೇ ತರಗತಿ ಬೋಧಿಸುವ ಶಿಕ್ಷಕರು) 22 ಕೇಂದ್ರಗಳಲ್ಲಿ 5,293 ಅಭ್ಯರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.
ಪರೀಕ್ಷೆಯನ್ನು ಸುಗಮವಾಗಿ ನಡೆಸಲು ಗ್ರೂಪ್-ಬಿ ಹಾಗೂ ಪ್ರೌಢಶಾಲಾ ಮುಖ್ಯ ಶಿಕ್ಷಕರು ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರು ಹಾಗೂ ಸ್ಥಾನಿಕ ಜಾಗೃತದಳದ ಅಧಿಕಾರಿಗಳನ್ನಾಗಿ ಕೆಲಸ ಮಾಡಲಿದ್ದಾರೆ. ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆ ಪತ್ರಿಕೆ ನೀಡಲು ಒಟ್ಟು 7 ಮಾರ್ಗಗಳಲ್ಲಿ 7 ಮಾರ್ಗಾಧಿಕಾರಿಗಳು, ವೀಕ್ಷಕರು, 22 ಮುಖ್ಯ ಅಧೀಕ್ಷಕರು ಹಾಗೂ 22 ಸ್ಥಾನಿಕ ಜಾಗೃತದಳ ಸದಸ್ಯರನ್ನು ನೇಮಿಸಲಾಗಿದೆ.
ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶದಲ್ಲಿ ಪರೀಕ್ಷಾ ದಿನದಂದು 144 ಸೆಕ್ಷನ್ ಅನ್ವಯ ನಿಷೇಧಾಜ್ಞೆ ಜಾರಿಗೊಳಿಸಲಾಗುವುದು. ಸುತ್ತಮುತ್ತಲಿನ ಜೆರಾಕ್ಸ್ ಅಂಗಡಿಗಳನ್ನು ಪರೀಕ್ಷಾ ಅವಧಿಯಲ್ಲಿ ಮುಚ್ಚಿಸಬೇಕು ಎಂದು ಸೂಚಿಸಲಾಗಿದೆ.
ಈ ಸಂಬಂಧ ಜಿಲ್ಲಾಧಿಕಾರಿ ಎಂ.ಆರ್.ರವಿ ಈಚೆಗೆ ಪೂರ್ವ ಸಿದ್ಧತಾ ಸಭೆ ನಡೆಸಿ ಸೂಚನೆ ಹಾಗೂ ಸಲಹೆ ನೀಡಿದ್ದಾರೆ.
ಪರೀಕ್ಷಾ ಕೇಂದ್ರದಲ್ಲಿ ಯಾವುದೇ ಗೊಂದಲಗಳಿಗೂ ಅವಕಾಶ ಇರಬಾರದು. ಅಧಿಕಾರಿಗಳು ಅಡಚಣೆ ಇಲ್ಲದೆ ಪಾರದರ್ಶಕವಾಗಿ ಪರೀಕ್ಷೆ ನಡೆಸಬೇಕು. ಅದಕ್ಕೆ ಪೂರಕವಾಗಿ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು ಎಂದು ನಿರ್ದೇಶನ ನೀಡಿದ್ದಾರೆ.
ಅಧಿಕಾರಿಗಳು ಸಂಬಂಧಿಸಿದ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿ ಪರೀಕ್ಷಾ ಕೇಂದ್ರದಲ್ಲಿನ ಮೂಲಸೌಕರ್ಯಗಳನ್ನು ಪರಿಶೀಲಿಸಿ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಸೂಚನೆ ನೀಡಿದ್ದಾರೆ.
ಎಲ್ಲಾ ಪರೀಕ್ಷಾ ಕೇಂದ್ರಗಳಿಗೆ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಿ ಗೋಪ್ಯ ಸಾಮಗ್ರಿಗಳನ್ನು ಖಜಾನೆಯಲ್ಲಿ ಸಂರಕ್ಷಿಸಲು ಮೂರು ಸದಸ್ಯರ ಸಮಿತಿ ರಚಿಸಲು ಹೇಳಿದ್ದಾರೆ.
ಖಜಾನೆಯಿಂದ ಪಡೆದು ಸಾಮಗ್ರಿಗಳನ್ನು ಮಾರ್ಗಾಧಿಕಾರಿಗಳಿಗೆ ವಿತರಿಸಲು ಮತ್ತು ಸಂರಕ್ಷಿಸಲು ಸೂಕ್ತ ನಿರ್ದೇಶನ ನೀಡಿ ಪ್ರಶ್ನೆಪತ್ರಿಕೆಗಳ ಬಂಡಲ್‍ಗಳನ್ನು ಪರೀಕ್ಷಾ ಕೇಂದ್ರಗಳಿಗೆ ಹಾಗೂ ಉತ್ತರಪತ್ರಿಕೆಗಳ ಬಂಡಲ್‍ಗಳನ್ನು ಜಿಲ್ಲಾ ಖಜಾನೆಗೆ ಸಾಗಿಸುವ ಮಾರ್ಗಾಧಿಕಾರಿಗಳ ವಾಹನಗಳಿಗೆ ಭದ್ರತೆ ಒದಗಿಸುವ ಬಗ್ಗೆ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ. ಅವರಿಗೆ ಸೂಚನೆ ನೀಡಿದ್ದಾರೆ.
ಪ್ರತಿ ಪರೀಕ್ಷಾ ಕೇಂದ್ರದಲ್ಲಿ ಆ್ಯಂಬುಲೆನ್ಸ್, ಅಶಾ ಕಾರ್ಯಕರ್ತೆಯರು, ಬೆಸ್ಕಾಂ ಅಧಿಕಾರಿಗಳನ್ನು ಸಹ ನಿಯೋಜಿಸಲು ತಿಳಿಸಿದ್ದಾರೆ. ಪರೀಕ್ಷಾ ಸಂದರ್ಭದಲ್ಲಿ ಸೂಕ್ತ ವಿದ್ಯುತ್ ವ್ಯವಸ್ಥೆ ನೋಡಿಕೊಳ್ಳಬೇಕು ಎಂದಿದ್ದಾರೆ.
ಪೂರ್ವಭಾವಿ ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ., ಹೆಚ್ಚುವರಿ ಜಿಲ್ಲಾಧಿಕಾರಿ ಮಂಗಳಾ, ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕಿ ಅಲ್ಮಾಸ್ ಪರ್ವೀನ್ ತಾಜ್ ಹಾಗೂ ಇಲಾಖೆಯ ಅಧಿಕಾರಿಗಳು ಇದ್ದರು.
ಕೋಲಾರ ನಗರದಲ್ಲಿ 22 ಪರೀಕ್ಷಾ ಕೇಂದ್ರಗಳು ಬೆಳಿಗ್ಗೆ, ಮಧ್ಯಾಹ್ನ ಪರೀಕ್ಷೆ ಸರ್ಕಾರಿ ಶಾಲಾ ಶಿಕ್ಷಕರ ಅರ್ಹತಾ ಪರೀಕ್ಷೆ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.