ADVERTISEMENT

ಕೋಲಾರ: ಕಸಾಪ- ಹೆಚ್ಚಿನ ಅನುದಾನಕ್ಕೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 20 ಡಿಸೆಂಬರ್ 2021, 13:30 IST
Last Updated 20 ಡಿಸೆಂಬರ್ 2021, 13:30 IST

ಕೋಲಾರ: ಬೆಳಗಾವಿಯಲ್ಲಿ ನಡೆಯುತ್ತಿರುವ ವಿಧಾನ ಮಂಡಲದ ಅಧಿವೇಶನದಲ್ಲಿ ವಿಧಾನ ಪರಿಷತ್‌ ಸದಸ್ಯ ಗೋವಿಂದರಾಜು ಅವರು ಕನ್ನಡ ಸಾಹಿತ್ಯ ಪರಿಷತ್ತಿಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ ಹಾಗೂ ಸದಸ್ಯತ್ವ ಹೆಚ್ಚಿಸಲು ಸರ್ಕಾರದ ಸೂಕ್ತ ನಿರ್ದೇಶನ ನೀಡುವಂತೆ ಕನ್ನಡ ಮತ್ತು ಸಂಸ್ಕೃತಿ ಸಚಿವರನ್ನು ಒತ್ತಾಯಿಸಿದರು.

ಇದಕ್ಕೆ ಉತ್ತರಿಸಿದ ಕನ್ನಡ ಮತ್ತು ಸಂಸ್ಕೃತಿ ಸಚಿವ ಬಿ.ಸುನೀಲ್‌ಕುಮಾರ್‌, ‘ಕನ್ನಡ ಸಾಹಿತ್ಯ ಪರಿಷತ್ತಿಗೆ ಕಳೆದ ಮೂರು ವರ್ಷಗಳಲ್ಲಿ ಸರ್ಕಾರದಿಂದ ₹ 17 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ’ ಎಂದು ಮಾಹಿತಿ ನೀಡಿದರು.

‘ಸರ್ಕಾರದ ಅನುದಾನವನ್ನು ಕನ್ನಡ ಭಾಷೆ, ಸಾಹಿತ್ಯ, ಕಲೆ, ಸಂಸ್ಕೃತಿ ರಕ್ಷಣೆ, ಪ್ರಸಾರ ಮತ್ತು ಅಭಿವೃದ್ಧಿಗೆ, ರಾಜ್ಯ, ಜಿಲ್ಲಾ ಹಾಗೂ ತಾಲ್ಲೂಕುಗಳಲ್ಲಿ ನಡೆಯುವ ಸಾಹಿತ್ಯ ಸಮ್ಮೇಳನ, ಸಿಬ್ಬಂದಿ ವೇತನ, ಪರಿಷತ್ತಿನ ಪ್ರಕಟಣೆ, ದಲಿತ ಸಂಪುಟಗಳು, ಮಹಿಳಾ ಸಂಪುಟಗಳು ಹಾಗೂ ಪರಿಷತ್ತಿನ ಆಡಳಿತಾತ್ಮಕ ಕಾರ್ಯ ಚಟುವಟಿಕೆಗಳಿಗೆ ಬಳಸಲಾಗಿದೆ. ಪ್ರಸ್ತುತ ಕನ್ನಡ ಸಾಹಿತ್ಯ ಪರಿಷತ್‌ 3.40 ಲಕ್ಷ ಅಜೀವ ಸದಸ್ಯರನ್ನು ಹೊಂದಿದೆ’ ಎಂದು ವಿವರಿಸಿದರು.

ADVERTISEMENT

ಸಚಿವರ ಹೇಳಿಕೆಗೆ ಸಮಾಧಾನಗೊಳ್ಳದ ಗೋವಿಂದರಾಜು, ‘ಕನ್ನಡ ಸಾಹಿತ್ಯ ಪರಿಷತ್ತಿಗೆ ನೀಡುತ್ತಿರುವ ಅನುದಾನವನ್ನು ಸಿಬ್ಬಂದಿ ಸಂಬಳಕ್ಕೆ ಹಾಗೂ ಕೆಲ ಕಾರ್ಯಕ್ರಮಗಳಿಗೆ ಮಾತ್ರ ಉಪಯೋಗಿಸಲು ಸಾಧ್ಯವಾಗುತ್ತಿದೆ. ಸರ್ಕಾರ ಕೂಡಲೇ ಹೆಚ್ಚಿನ ಅನುದಾನ ಬಿಡುಗಡೆ ಮಾಡಬೇಕು’ ಎಂದು ಆಗ್ರಹಿಸಿದರು.

‘ರಾಜ್ಯದಲ್ಲಿ 6 ಕೋಟಿಗೂ ಹೆಚ್ಚು ಕನ್ನಡಿಗರಿದ್ದು, ಕನಿಷ್ಠ 3 ಕೋಟಿ ಜನರನ್ನು ಕನ್ನಡ ಸಾಹಿತ್ಯ ಪರಿಷತ್ತಿಗೆ ಅಜೀವ ಸದಸ್ಯರಾಗಿ ಮಾಡಲು ಸರ್ಕಾರದಿಂದ ನಿರ್ದೇಶನ ನೀಡಬೇಕು’ ಎಂದು ಮನವಿ ಮಾಡಿದರು.

ಇದಕ್ಕೆ ಸ್ಪಂದಿಸಿದ ಸಚಿವರು, ‘ಸದಸ್ಯರ ಸಲಹೆಯಂತೆ ಮುಂದಿನ ದಿನಗಳಲ್ಲಿ ಹೆಚ್ಚಿನ ಅನುದಾನ ಬಿಡುಗಡೆ ಮಾಡುತ್ತೇವೆ ಹಾಗೂ ಸದಸ್ಯತ್ವ ಹೆಚ್ಚಿಸಲು ಪರಿಷತ್ತಿಗೆ ಸಲಹೆ ಕೊಡುತ್ತೇವೆ’ ಎಂದು ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.