ಕೆಜಿಎಫ್: ಗೋಪೇನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಕಾಯಂ ಶಿಕ್ಷಕರ ಕೊರತೆ ವಿರೋಧಿಸಿ, ಹಾಗೂ ಕಾಯಂ ಶಿಕ್ಷಕರನ್ನು ನೇಮಕ ಮಾಡುವಂತೆ ಒತ್ತಾಯಿಸಿ ವಿದ್ಯಾರ್ಥಿಗಳ ಪೋಷಕರು ಶಾಲೆಗೆ ಬೀಗ ಹಾಕಿ ಶುಕ್ರವಾರ ಪ್ರತಿಭಟನೆ ನಡೆಸಿದರು.
ಒಂದರಿಂದ ಏಳನೇ ತರಗತಿವರೆಗಿನ ಗೋಪೇನಹಳ್ಳಿ ಶಾಲೆಯಲ್ಲಿ ಎಪ್ಪತ್ತು ವಿದ್ಯಾರ್ಥಿಗಳು ವಿದ್ಯಾಭ್ಯಾಸ ಮಾಡುತ್ತಿದ್ದಾರೆ. ಆದರೆ, ಎರಡು ವರ್ಷದಿಂದ ಕಾಯಂ ಶಿಕ್ಷಕರನ್ನು ನಿಯೋಜನೆ ಮಾಡಿಲ್ಲ. ಇಬ್ಬರು ಗುತ್ತಿಗೆ ಶಿಕ್ಷಕರು ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರು ಮನಸ್ಸಿಗೆ ಬಂದರೆ ಪಾಠ ಮಾಡುತ್ತಾರೆ. ಇಲ್ಲವಾದರೆ ಮಕ್ಕಳನ್ನು ಆಟದಲ್ಲಿ ತೊಡಗಿಸುತ್ತಾರೆ. ಇದರಿಂದಾಗಿ ವಿದ್ಯಾರ್ಥಿಗಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ ಎಂದು ಪೋಷಕರು ಆರೋಪಿಸಿದರು.
ಶಾಲೆಗೆ ಕಾಯಂ ಶಿಕ್ಷಕರನ್ನು ನಿಯೋಜಿಸಬೇಕು ಎಂದು ಕೋರಿ ಎರಡು ವರ್ಷಗಳಿಂದ ಜಿಲ್ಲಾಧಿಕಾರಿ, ಶಾಸಕರು ಮತ್ತು ಶಾಲಾ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಮನವಿ ಮಾಡುತ್ತಲೇ ಇದ್ದೇವೆ. ಆದರೆ, ನಮ್ಮ ಅಹವಾಲಿಗೆ ಸ್ಪಂದಿಸಲು ಯಾರೂ ಮುಂದಾಗುತ್ತಿಲ್ಲ. ಮಕ್ಕಳು ಶಾಲೆಗೆ ಬರುವುದು, ಮಧ್ಯಾಹ್ನ ಊಟ ನಂತರ ಆಟ ಆಡುವುದು ಸಾಮಾನ್ಯ ಎಂಬಂತಾಗಿದೆ. ಇದರಿಂದಾಗಿ ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ತಮ್ಮ ಮಕ್ಕಳು ಶಿಕ್ಷಣದಿಂದ ವಂಚಿರಾಗುತ್ತಿದ್ದಾರೆ ಎನ್ನುತ್ತಾರೆ ಗ್ರಾಮಸ್ಥರು.
‘ಖಾಸಗಿ ಶಾಲೆಗಳಿಗೆ ಕಳುಹಿಸುವ ಸಾಮರ್ಥ್ಯ ನಮಗೆ ಇಲ್ಲ. ಸರ್ಕಾರಿ ಶಾಲೆಗೆ ಕಳುಹಿಸಿದರೆ, ಪಾಠ ಮಾಡಲು ಶಿಕ್ಷಕರೇ ಇಲ್ಲ. ಶಾಲೆಯ ಗೋಡೆ ಬಿರುಕು ಬಿಟ್ಟಿದೆ’ ಎಂದು ಗ್ರಾಮಸ್ಥರು ಹೇಳುತ್ತಾರೆ.
‘ಇಷ್ಟೇ ಅಲ್ಲದೆ, ಶಾಲೆಯಲ್ಲಿ ಇನ್ನೂ ಅನೇಕ ಸಮಸ್ಯೆಗಳಿವೆ. ಶುದ್ಧ ಕುಡಿಯುವ ನೀರಿನ ಘಟಕ ತಟಸ್ಥವಾಗಿರುವುದು, ಈ ಸಂಬಂಧ ಇತ್ತೀಚೆಗೆ ಶಾಲೆಗೆ ಭೇಟಿ ನೀಡಿದ ಶಾಸಕಿ ರೂಪಕಲಾ ಶಶಿಧರ್ ಅವರ ಗಮನಕ್ಕೆ ತರಲಾಗಿತ್ತು. ಆದರೆ, ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ, ಕಾಯಂ ಶಿಕ್ಷಕರನ್ನು ನೀಡುವವರೆಗೆ ಮಕ್ಕಳನ್ನು ಶಾಲೆಗೆ ಕಳಿಸುವುದಿಲ್ಲ. ಎರಡು ದಿನ ಕಾದು ನಂತರ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸುತ್ತೇವೆ’ ಎಂದು ವಿದ್ಯಾರ್ಥಿಯೊಬ್ಬರ ಪೋಷಕ ಮುನಿಯಪ್ಪ ಎಚ್ಚರಿಕೆ ನೀಡಿದರು.
ಶಾಲಾ ಶಿಕ್ಷಣ ಇಲಾಖೆಯ ಅಧಿಕಾರಿಗಳು ಖಾಸಗಿ ಶಾಲೆಗಳೊಂದಿಗೆ ಹೊಂದಾಣಿಕೆ ಮಾಡಿಕೊಂಡಿದ್ದಾರೆ. ಇದೇ ಕಾರಣಕ್ಕೆ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ ಸೃಷ್ಟಿಸಲಾಗುತ್ತಿದೆ. ಈಗಾಗಲೇ ಸರ್ಕಾರಿ ಶಾಲೆಯಲ್ಲಿ ಓದುತ್ತಿದ್ದ ಹತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು ಖಾಸಗಿ ಶಾಲೆಗೆ ಸೇರಿದ್ದಾರೆ. ಜಾತಿ ಸಮೀಕ್ಷೆ ಎಂದು ಗುತ್ತಿಗೆ ಶಿಕ್ಷಕರು ಕೂಡ ಸರಿಯಾಗಿ ಬರುತ್ತಿಲ್ಲ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ನಂತರ ಪ್ರತಿಭಟನಾ ಸ್ಥಳಕ್ಕೆ ಬಂದ ಕ್ಷೇತ್ರ ಶಿಕ್ಷಣಾಧಿಕಾರಿ ಅನಿತಾ, ಪ್ರತಿಭಟನಕಾರರೊಂದಿಗೆ ಮಾತನಾಡಿದರು. ಮುಂದಿನ ತಿಂಗಳು ವರ್ಗಾವಣೆ ಪ್ರಕ್ರಿಯೆ ನಡೆಯುತ್ತದೆ. ಆಗ ಶಾಲೆಗೆ ಕಾಯಂ ಶಿಕ್ಷಕರನ್ನು ನಿಯೋಜಿಸಲಾಗುವುದು. ಅಲ್ಲಿಯವರೆಗೆ ಗುತ್ತಿಗೆ ಶಿಕ್ಷಕರು ಕೆಲಸ ಮಾಡುತ್ತಾರೆ. ಸಹಕರಿಸಬೇಕು ಎಂದು ಜನರಲ್ಲಿ ಮನವಿ ಮಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.