
ಕೋಲಾರ: ಮೈಸೂರು ಜಿಲ್ಲೆ ನಂತರ ಮುಖ್ಯಮಂತ್ರಿಯು ಕೋಲಾರ ಜಿಲ್ಲೆಯ ಅಭಿವೃದ್ಧಿಗೆ ಭರಪೂರ ಅನುದಾನ ಒದಗಿಸಿದ್ದಾರೆ. ಕೋಲಾರದಲ್ಲಿ ಒಟ್ಟು ₹103 ಕೋಟಿ ಅನುದಾನದಲ್ಲಿ ವಿವಿಧ ಕಾಲೇಜು, ವಿಶ್ವವಿದ್ಯಾಲಯಗಳ ಕಟ್ಟಡ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ತಿಳಿಸಿದರು.
ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಉನ್ನತ ಶಿಕ್ಷಣ ಇಲಾಖೆ, ನಗರದ ಮಹಿಳಾ ಸರ್ಕಾರಿ ಕಾಲೇಜು ಹಾಗೂ ಸರ್ಕಾರಿ ಪ್ರಥಮದರ್ಜೆ ಕಾಲೇಜು ಆಶ್ರಯದಲ್ಲಿ ಬುಧವಾರ ಹಮ್ಮಿಕೊಂಡಿದ್ದ ನೂತನ ಕಟ್ಟಡಗಳ ಕಾಮಗಾರಿಗಳಿಗೆ ಶಂಕುಸ್ಥಾಪನಾ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಮಹಿಳಾ ಸರ್ಕಾರಿ ಕಾಲೇಜು ಅಭಿವೃದ್ಧಿಗೆ ₹43.67 ಕೋಟಿ ಅನುದಾನ ಒದಗಿಸಲಾಗಿದೆ. ಇದರಲ್ಲಿ ಮೊದಲ ಹಂತದ ಕಾಮಗಾರಿಗೆ ₹21.17 ಕೋಟಿ, ಎರಡನೇ ಹಂತದ ಕಾಮಗಾರಿಗೆ ₹20 ಕೋಟಿ ಮತ್ತು ಮೂರನೇ ಹಂತದಲ್ಲಿ ಪಿ.ಜಿ ಬ್ಲಾಕ್ ಹಾಗೂ ಸೈನ್ಸ್ ಬ್ಲಾಕ್‍ನ ಮೊದಲ ಮತ್ತು ಎರಡನೇ ಮಹಡಿಗಳ ನಿರ್ಮಾಣಕ್ಕಾಗಿ ₹2.50 ಕೋಟಿ ಅನುದಾನ ಮೀಸಲಿಡಲಾಗಿದೆ. ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ನೂತನ ಕಟ್ಟಡ ಕಾಮಗಾರಿಗೆ (₹40 ಕೋಟಿ) ಶಂಕುಸ್ಥಾಪನೆ ನೆರವೇರಿಸಲಾಗಿದೆ ಎಂದರು.
ಅರಹಳ್ಳಿ ಸರ್ಕಾರಿ ಕಾನೂನು ಕಾಲೇಜು ಆವರಣದಲ್ಲಿ ನೂತನ ಕಟ್ಟಡ ನಿರ್ಮಾಣಕ್ಕೆ ₹6.82 ಕೋಟಿ ವೆಚ್ಚದ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಗಿದೆ. ಈ ಕಾಲೇಜಿನ ವಿದ್ಯಾರ್ಥಿನಿಯರು ಸರ್ಕಾರದ ದೀಪಿಕಾ ಯೋಜನೆಯನ್ನು ಸದುಪಯೋಗ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಪಿ.ಎಂ.ಉಷಾ ಯೋಜನೆ ಅಡಿಯಲ್ಲಿ ₹10 ಕೋಟಿ ವೆಚ್ಚದಲ್ಲಿ ಮಹಿಳಾ ವಸತಿ ನಿಲಯದ ಕಾಮಗಾರಿಗೆ ಶಂಕುಸ್ಥಾಪನೆ ನೇರವೇರಲಿದೆ. ಇದೇ ಸಂದರ್ಭದಲ್ಲಿ ₹2.5 ಕೋಟಿ ವೆಚ್ಚದಲ್ಲಿ ಸ್ನಾತಕೋತ್ತರ ಕೇಂದ್ರದ ಮೊದಲ ಮಹಡಿ ಉದ್ಘಾಟನೆಯೂ ನಡೆದಿದೆ. ಈ ವಿಶ್ವವಿದ್ಯಾಲಯಕ್ಕೆ ಸುವರ್ಣ ಗಂಗೆ ಎಂದು ನಾಮಕರಣ ಮಾಡಲಾಗಿದೆ ಎಂದರು.
ತಾವು ಕೈಗೊಳ್ಳುವ ಕಾಮಗಾರಿಗಳು ಕೇವಲ ಇಂದಿನ ಅಗತ್ಯ ಪೂರೈಸುವುದಲ್ಲ; ಬದಲಾಗಿ ಮುಂದಿನ ಪೀಳಿಗೆಯ ವಿದ್ಯಾರ್ಥಿಗಳಿಗೆ ಅನುಕೂಲವಾಗುವ ರೀತಿಯಲ್ಲಿ ದೂರದೃಷ್ಟಿಯಿಂದ ನಿರ್ಮಾಣವಾಗಬೇಕು. ಸರ್ಕಾರಿ ಸಂಸ್ಥೆಗಳ ಕಟ್ಟಡಗಳು ಮತ್ತು ಸೌಲಭ್ಯಗಳು ಯಾವುದೇ ಖಾಸಗಿ ವಿದ್ಯಾಸಂಸ್ಥೆಗಳಿಗಿಂತ ಕಡಿಮೆ ಇಲ್ಲದಂತೆ ಇರಬೇಕು ಎಂದು ಹೇಳಿದರು.
ಜಿಲ್ಲೆಯಲ್ಲಿ ವೈದ್ಯಕೀಯ ಕಾಲೇಜು ನಿರ್ಮಾಣ, ಅಂತರಗಂಗೆಯಿಂದ ಕೋಲಾರಮ್ಮ ಕೆರೆವರೆಗೆ ₹100 ಕೋಟಿ ವೆಚ್ಚದಲ್ಲಿ ಕಾಲುವೆ ನಿರ್ಮಾಣ ಹಾಗೂ ಕೋಲಾರ ನಗರಕ್ಕೆ ರಿಂಗ್ ರಸ್ತೆ ನಿರ್ಮಾಣಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ಮುಖ್ಯಮಂತ್ರಿ ವಿಶೇಷ ಅನುದಾನ ನೀಡಲಿದ್ದಾರೆ ಎಂದು ತಿಳಿಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಮಾತನಾಡಿ, ‘ಕೋಲಾರದ ವಿವಿಧ ಕಾಲೇಜುಗಳ ಕಟ್ಟಡ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದ್ದೇವೆ. ಕೋಲಾರವನ್ನು ಇನ್ನೂ ಹೆಚ್ಚಿನ ರೀತಿಯಲ್ಲಿ ಅಭಿವೃದ್ಧಿಪಡಿಸುವುದು ನಮ್ಮ ಗುರಿಯಾಗಿದೆ. ಈ ಜಿಲ್ಲೆ ವಿದ್ಯೆಯಲ್ಲಿ ಮುಂಚೂಣಿಯಲ್ಲಿದ್ದು, ಇಲ್ಲಿನ ಸರ್ಕಾರಿ ಕಾನೂನು ಕಾಲೇಜಿನಲ್ಲಿ ಕಲಿತ ವಿದ್ಯಾರ್ಥಿಗಳಲ್ಲಿ 40ಕ್ಕೂ ಹೆಚ್ಚು ವಿದ್ಯಾರ್ಥಿಗಳು ನ್ಯಾಯಾಧೀಶರ ಹುದ್ದೆ ಅಲಂಕರಿಸಿದ್ದಾರೆ. ವಿದ್ಯಾರ್ಥಿಗಳು ಓದಿನಲ್ಲಿ ಆಸಕ್ತಿ ವಹಿಸಿ ಉತ್ತಮ ಅಂಕ ಗಳಿಸಿ ಜೀವನದಲ್ಲಿ ಯಶಸ್ಸು ಸಾಧಿಸಬೇಕು. ಅಲ್ಲದೆ, ಓದಿಗೆ ಪ್ರೋತ್ಸಾಹ ನೀಡುತ್ತಿರುವ ಪೋಷಕರು ಹಾಗೂ ಶಿಕ್ಷಕರನ್ನು ವಿದ್ಯಾರ್ಥಿಗಳು ನೆನೆಯಬೇಕು’ ಎಂದರು.
ವಿಧಾನ ಪರಿಷತ್ ಸದಸ್ಯ ಎಂ.ಎಲ್.ಅನಿಲ್ ಕುಮಾರ್ ಮಾತನಾಡಿ, ‘ಉನ್ನತ ಶಿಕ್ಷಣ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರ ಪರಿಶ್ರಮದಿಂದ ಇದೀಗ ₹103 ಕೋಟಿಗೂ ಅಧಿಕ ಅನುದಾನ ವಿವಿಧ ಕಾಲೇಜು, ವಿಶ್ವವಿದ್ಯಾಲಯಗಳ ಕಟ್ಟಡದ ಕಾಮಗಾರಿಗಳಿಗೆ ದೊರೆತಿರುವುದು ಸಂತಸದ ಸಂಗತಿ’ ಎಂದು ಹೇಳಿದರು.
ಶಾಸಕ ಕೊತ್ತೂರು ಜಿ.ಮಂಜುನಾಥ್ ಮಾತನಾಡಿ, ‘ನಗರದ ಹೃದಯ ಭಾಗದಲ್ಲಿರುವ ಕಾಲೇಜುಗಳಿಗೆ ಹೆಚ್ಚಿನ ಅನುದಾನ ನೀಡಲಾಗಿದೆ. ಇನ್ನೂ ನೂರು ಕೋಟಿಗೂ ಹೆಚ್ಚಿನ ಅನುದಾನ ತಂದು ಜಿಲ್ಲೆಯ ಎಲ್ಲಾ ಸರ್ಕಾರಿ ಕಾಲೇಜುಗಳನ್ನು ಅಭಿವೃದ್ಧಿ ಪಡಿಸಿ ಉತ್ತಮ ವಿದ್ಯಾವಂತರನ್ನು ನಿರ್ಮಿಸಲಿದ್ದೇವೆ’ ಎಂದರು.
ಜಿಲ್ಲೆಯು ಈಗಾಗಲೇ ಅನೇಕ ವಕೀಲರನ್ನು ಮತ್ತು ನ್ಯಾಯಾಧೀಶರನ್ನು ಸೃಷ್ಟಿಸಿದೆ. ಮುಂದಿನ ದಿನಗಳಲ್ಲಿ ಜಿಲ್ಲೆಯು ಸಂಪೂರ್ಣ ವಿದ್ಯಾವಂತ ಜಿಲ್ಲೆಯಾಗಲಿದೆ ಎಂದು ಹೇಳಿದರು.
ಸಮಾರಂಭದಲ್ಲಿ ನಗರಸಭೆ ಅಧ್ಯಕ್ಷೆ ಲಕ್ಷ್ಮಿದೇವಮ್ಮ, ಕೋಲಾರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಹಮ್ಮದ್ ಹನೀಫ್, ಗ್ಯಾರಂಟಿ ಯೋಜನೆಗಳ ಜಿಲ್ಲಾಧ್ಯಕ್ಷ ಶಿವಕುಮಾರ್, ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಎಲ್ಲಾ ಸಿಂಡಿಕೇಟ್ ಸದಸ್ಯರು, ಜಿಲ್ಲಾಧಿಕಾರಿ ಎಂ.ಆರ್.ರವಿ, ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ನಿರಂಜನ ವಾನಳ್ಳಿ, ಕುಲಸಚಿವರಾದ ಸಿ.ಎನ್.ಶ್ರೀಧರ್, ಪ್ರೊ.ಲೋಕನಾಥ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ., ಉನ್ನತ ಶಿಕ್ಷಣ ಇಲಾಖೆಯ ಪ್ರಾದೇಶಿಕ ಜಂಟಿ ನಿರ್ದೇಶಕ ರಾಮಕೃಷ್ಣ ರೆಡ್ಡಿ, ಉಪ ವಿಭಾಗಾಧಿಕಾರಿ ಡಾ.ಮೈತ್ರಿ, ತಹಶೀಲ್ದಾರ್ ಡಾ.ನಯನಾ, ಮಹಿಳಾ ಕಾಲೇಜಿನ ಪ್ರಾಂಶುಪಾಲ ಗಂಗಾಧರ್ ರಾವ್, ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಮುನಿಶಾಮಪ್ಪ, ಸರ್ಕಾರಿ ಕಾನೂನು ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಶಕರು, ಬೋಧಕ ವರ್ಗ ಹಾಗೂ ವಿದ್ಯಾರ್ಥಿಗಳು ಇದ್ದರು.
ರಾಜ್ಯ ಸರ್ಕಾರ ಕೋಲಾರ ಜಿಲ್ಲೆಗೆ ಈವರೆಗೆ ಸಾವಿರ ಕೋಟಿ ಅನುದಾನ ನೀಡಿದೆ. ಇದೀಗ ₹ 100 ಕೋಟಿ ವೆಚ್ಚದಲ್ಲಿ ಅಂತರಗಂಗೆ-ಕೋಲಾರಮ್ಮ ಕೆರೆ ಮಧ್ಯೆ ಕಾಲುವೆ ಅಭಿವೃದ್ಧಿಪಡಿಸಲಾಗುತ್ತಿದೆಬೈರತಿ ಸುರೇಶ್ ಜಿಲ್ಲಾ ಉಸ್ತುವಾರಿ ಸಚಿವ
ರೈತರಿಗೆ ಉತ್ತಮ ಬೆಲೆ ಆರೋಗ್ಯ ಶಿಕ್ಷಣ ಹಾಗೂ ಉದ್ಯೋಗಕ್ಕೆ ಒತ್ತು ನೀಡಿದರೆ ಯಾರೊಬ್ಬರೂ ಜನಪ್ರತಿನಿಧಿಗಳ ಬಳಿ ನೆರವಿಗೆ ಬರವುದಿಲ್ಲಕೊತ್ತೂರು ಮಂಜುನಾಥ್ ಶಾಸಕ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.