ADVERTISEMENT

ಕೋಲಾರ: ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ಬೇಡವೆಂದು ಮನವಿ

​ಪ್ರಜಾವಾಣಿ ವಾರ್ತೆ
Published 12 ಜೂನ್ 2020, 16:31 IST
Last Updated 12 ಜೂನ್ 2020, 16:31 IST
ಸರ್ಕಾರ ಕರ್ನಾಟಕ ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ನಿರ್ಧಾರ ಕೈಬಿಡಬೇಕೆಂದು ಒತ್ತಾಯಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸದಸ್ಯರು ಕೋಲಾರದಲ್ಲಿ ಶುಕ್ರವಾರ ಉಪ ವಿಭಾಗಾಧಿಕಾರಿ ಸೋಮಶೇಖರ್‌ ಅವರಿಗೆ ಮನವಿ ಸಲ್ಲಿಸಿದರು.
ಸರ್ಕಾರ ಕರ್ನಾಟಕ ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ನಿರ್ಧಾರ ಕೈಬಿಡಬೇಕೆಂದು ಒತ್ತಾಯಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸದಸ್ಯರು ಕೋಲಾರದಲ್ಲಿ ಶುಕ್ರವಾರ ಉಪ ವಿಭಾಗಾಧಿಕಾರಿ ಸೋಮಶೇಖರ್‌ ಅವರಿಗೆ ಮನವಿ ಸಲ್ಲಿಸಿದರು.   

ಕೋಲಾರ: ಕರ್ನಾಟಕ ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ನಿರ್ಧಾರದಿಂದ ಸರ್ಕಾರ ಹಿಂದೆ ಸರಿಯಬೇಕೆಂದು ಒತ್ತಾಯಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸದಸ್ಯರು ಇಲ್ಲಿ ಶುಕ್ರವಾರ ಉಪ ವಿಭಾಗಾಧಿಕಾರಿ ಸೋಮಶೇಖರ್‌ ಅವರಿಗೆ ಮನವಿ ಸಲ್ಲಿಸಿದರು.

ಸರ್ಕಾರ ರಿಯಲ್‌ ಎಸ್ಟೇಟ್‌ ದಂಧೆಕೋರರು, ಬಂಡವಾಳಶಾಹಿಗಳು ಹಾಗೂ ಬಹುರಾಷ್ಟ್ರೀಯ ಕಂಪನಿಗಳ ಒತ್ತಡಕ್ಕೆ ಮಣಿದು 1961ರ ಕರ್ನಾಟಕ ಭೂ ಸುಧಾರಣೆ ಕಾಯ್ದೆಗೆ ತಿದ್ದುಪಡಿ ತರಲು ಮುಂದಾಗಿದೆ. ಸರ್ಕಾರದ ಈ ನಡೆ ಖಂಡನೀಯ ಎಂದು ಸಂಘಟನೆ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದರು.

‘ಸದ್ಯ ಕೃಷಿಕರಿಗೆ ಮಾತ್ರ ಕೃಷಿ ಭೂಮಿ ಖರೀದಿಗೆ ಅವಕಾಶವಿದೆ. ಕಾಯ್ದೆ ತಿದ್ದುಪಡಿಯಾದರೆ ಕೃಷಿಕರಲ್ಲದವರಿಗೂ ಕೃಷಿ ಭೂಮಿ ಖರೀದಿಸಲು ಅವಕಾಶ ಸಿಗುತ್ತದೆ. ಇದು ಕೃಷಿ ಕ್ಷೇತ್ರದ ಮೇಲೆ ಪ್ರತಿಗಾಮಿ ಪರಿಣಾಮ ಬೀರುತ್ತದೆ’ ಎಂದು ಸಂಘಟನೆಯ ರಾಜ್ಯ ಘಟಕದ ಉಪಾಧ್ಯಕ್ಷ ಕೆ.ನಾರಾಯಣಗೌಡ ಆತಂಕ ವ್ಯಕ್ತಪಡಿಸಿದರು.

ADVERTISEMENT

‘ಸರ್ಕಾರ ರೈತರನ್ನು ಬೀದಿಗೆ ತಳ್ಳಿ, ರಿಯಲ್‌ ಎಸ್ಟೇಟ್‌ ಉದ್ಯಮಿಗಳ ಹಿತ ಕಾಯಲು ಹೊರಟಿದೆ. ರಿಯಲ್‌ ಎಸ್ಟೇಟ್‌ ಉದ್ಯಮಿಗಳ ಕೈಗೊಂಬೆಯಾಗಿರುವ ಸರ್ಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿದೆ. ಎಪಿಎಂಸಿ ಹಾಗೂ ವಿದ್ಯುತ್‌ ಕಾಯ್ದೆಗೆ ತಿದ್ದುಪಡಿ ತಂದಿದ್ದ ಸರ್ಕಾರ ಇದೀಗ ರೈತರಿಗೆ ಮತ್ತೊಂದು ಆಘಾತ ನೀಡಿದೆ’ ಎಂದು ಕಿಡಿಕಾರಿದರು.

ಹೋರಾಟದ ಎಚ್ಚರಿಕೆ: ‘ದೇಶದಲ್ಲಿ ಶೇ 80ರಷ್ಟು ಸಣ್ಣ ಮತ್ತು ಅತಿ ಸಣ್ಣ ರೈತರಿದ್ದಾರೆ. ಇವರು ಹಣದಾಸೆಗೆ ಭೂಮಿ ಮಾರಾಟ ಮಾಡಿದರೆ ಭವಿಷ್ಯದಲ್ಲಿ ಎಂದಿಗೂ ಜಮೀನು ಖರೀದಿಸಲು ಸಾಧ್ಯವಾಗುವುದಿಲ್ಲ. ರೈತ ಕುಲಕ್ಕೆ ಮಾರಕವಾಗಿರುವ ಕರ್ನಾಟಕ ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ನಿರ್ಧಾರವನ್ನು ಸರ್ಕಾರ ಕೈಬಿಡಬೇಕು. ಇಲ್ಲದಿದ್ದರೆ ರಾಜ್ಯದೆಲ್ಲೆಡೆ ಹೋರಾಟ ನಡೆಸುತ್ತೇವೆ’ ಎಂದು ಸದಸ್ಯರು ಎಚ್ಚರಿಕೆ ನೀಡಿದರು.

ಸಂಘಟನೆಯ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಎ.ನಳಿನಿಗೌಡ, ರೈತ ಸಂಘ ಜಿಲ್ಲಾ ಘಟಕದ ಅಧ್ಯಕ್ಷ ಶ್ರೀನಿವಾಸ್, ಸದಸ್ಯರಾದ ತಿಮ್ಮಣ್ಣ, ಭಾರ್ಗವ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.