ADVERTISEMENT

ಕೋಲಾರ: ಗ್ಯಾರಂಟಿ ಯೋಜನೆ ಪ್ರಗತಿ ಪರಿಶೀಲನೆ

ವಿದ್ಯಾರ್ಥಿಗಳಿಗೆ ನೆರವಾಗಲು ಬಸ್‌ ಮಾರ್ಗ ಹೊಂದಾಣಿಕೆಗೆ ಪ್ರಯತ್ನ

​ಪ್ರಜಾವಾಣಿ ವಾರ್ತೆ
Published 10 ಆಗಸ್ಟ್ 2025, 3:00 IST
Last Updated 10 ಆಗಸ್ಟ್ 2025, 3:00 IST
ಕೋಲಾರದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ವೈ.ಶಿವಕುಮಾರ್ ನೇತೃತ್ವದಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಯುವನಿಧಿ ಪೋಸ್ಟರ್‌ ಬಿಡುಗಡೆ ಮಾಡಲಾಯಿತು
ಕೋಲಾರದಲ್ಲಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ವೈ.ಶಿವಕುಮಾರ್ ನೇತೃತ್ವದಲ್ಲಿ ನಡೆದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಯುವನಿಧಿ ಪೋಸ್ಟರ್‌ ಬಿಡುಗಡೆ ಮಾಡಲಾಯಿತು    

ಕೋಲಾರ: ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ವೈ.ಶಿವಕುಮಾರ್ ನೇತೃತ್ವದಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆಯಿತು.

ಗೃಹಲಕ್ಷ್ಮಿ, ಅನ್ನಭಾಗ್ಯ, ಶಕ್ತಿ, ಗೃಹಜ್ಯೋತಿ ಹಾಗೂ ಯುವನಿಧಿ ಗ್ಯಾರಂಟಿ ಯೋಜನೆಗಳು ಸಮರ್ಪಕವಾಗಿ ತಲುಪುತ್ತಿವೆಯೇ ಎಂಬುದನ್ನು ಪರಿಶೀಲಿಸಿದರು. ಅಧಿಕಾರಿಗಳು ಅಂಕಿ ಅಂಶಗಳ ಮಾಹಿತಿ ನೀಡಿದರು.

ಜಿಲ್ಲೆಯಲ್ಲಿ ಹೆಚ್ಚಿನ ಸೇವೆ ನೀಡಲು ಬಸ್‍ಗಳ ಅವಶ್ಯವಿದೆ ಎಂದು ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ADVERTISEMENT

ಶಾಲಾ ಕಾಲೇಜುಗಳಿಗೆ ಹೋಗುವ ವಿದ್ಯಾರ್ಥಿಗಳಿಗೆ ಅನುಕೂಲವಾಗಲು, ಸಾರ್ವಜನಿಕರ ಬೇಡಿಕೆಗೆ ಅನುಗುಣವಾಗಿ ಮಾರ್ಗಗಳನ್ನು ಹೊಂದಾಣಿಕೆ ಮಾಡಲು ಪ್ರಯತ್ನ ನಡೆಯುತ್ತಿದೆ ಎಂದರು,

ಗೃಹಜ್ಯೋತಿ ಯೋಜನೆ ಕುರಿತು ಚರ್ಚಿಸಿ ಪಿ.ಎಂ ಸೂರ್ಯಘರ್ ಯೋಜನೆ, ಸೋಲಾರ ಬಳಕೆ ಕುರಿತು ಸಾರ್ವಜನಿಕರಲ್ಲಿ ತಿಳಿವಳಿಕೆ ಮೂಡಿಸಲು ವ್ಯಾಪಕ ಪ್ರಚಾರ ಮಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಗೃಹಲಕ್ಷ್ಮಿ ಯೋಜನೆ ಕುರಿತು ಪರಿಶೀಲನೆ ನಡೆಸಿ, ಇತ್ತೀಚಿನ ದಿನಗಳಲ್ಲಿ ಕೆಲವರಿಗೆ ₹ 2ಸಾವಿರ ಜಮೆ ಮಾಡಲು ಜಿಎಸ್‍ಟಿ ಸಮಸ್ಯೆಯಿಂದ ಸಾಧ್ಯವಾಗುತ್ತಿಲ್ಲ. ಇದು ಸರ್ಕಾರ ಮಟ್ಟದ ಸಮಸ್ಯೆಯಾಗಿದ್ದು, ಸರಿಪಡಿಸಲು ಹಂತಹಂತವಾಗಿ ಕ್ರಮ ಕೈಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಯುವನಿಧಿಯಡಿ ವಿದ್ಯಾರ್ಥಿಗಳ ನೋಂದಣಿಗಾಗಿ ಅಭಿಯಾನ ಕೈಕೊಂಡು ನೋಂದಣಿ ಮಾಡಲಾಗುತ್ತಿದೆ. ಕಾಲೇಜು ಮತ್ತು ವಿಶ್ವವಿದ್ಯಾಲಯಗಳಲ್ಲಿ ಈ ಯೋಜನೆ ಕುರಿತು ಪ್ರಚಾರ ಕೈಕೊಳ್ಳಲು ಸೂಚಿಸಲಾಯಿತು.

ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡಲು ಸಮಿತಿಯ ಎಲ್ಲಾ ಸದಸ್ಯರು ತಮ್ಮ ಹಂತದಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಬೇಕು. ಈ ಯೋಜನೆಗಳ ಅನುಷ್ಠಾನದಿಂದ ಸಾರ್ವಜನಿಕರಿಗೆ ಅನುಕೂಲವಾದ ಬಗ್ಗೆ ಯಶೋಗಾಥೆ ಮೂಲಕ ಸರ್ಕಾರದ ಗಮನ ಸೆಳೆಯಬೇಕು ಎಂದರು.

ಜಿಲ್ಲಾ ಪಂಚಾಯಿತಿ ಸಿಇಒ ಪ್ರವೀಣ ಪಿ.ಬಾಗೇವಾಡಿ ಕೆಲ ಸಲಹೆ ಸೂಚನೆ ನೀಡಿದರು. ಯುವ ನಿಧಿ ಯೋಜನೆಯ ಪೋಸ್ಟರ್ ಹಾಗೂ ಬ್ಯಾನರ್‌ ಬಿಡುಗಡೆಗೊಳಿಸಲಾಯಿತು.

ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಟಿ.ಕೆ.ರಮೇಶ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಅಶ್ವಥ್‌ ರೆಡ್ಡಿ, ನಾಗೇಶ್ವರಿ, ಉಮಾದೇವಿ, ಅಂಜನಪ್ಪ, ಮನೋಹರ, ಮಂಗಳಮ್ಮ, ಇನಾಯತ್, ರಾಧಾಕೃಷ್ಣರೆಡ್ಡಿ, ಪಾರ್ಥಸಾರಥಿ, ಮಮತಾರೆಡ್ಡಿ, ಆಹಾರ ಇಲಾಖೆ ಸಹಾಯಕ ನಿರ್ದೇಶಕ ಪ್ರಕಾಶ್, ಜಿಲ್ಲಾ ಸಾರಿಗೆ ಅಧಿಕಾರಿ ಮಂಜುನಾಥ್, ಇಂಧನ ಇಲಾಖೆಯ ಶೋಭಾ, ಕೈಗಾರಿಕ ತರಬೇತಿ ಮತ್ತು ಉದ್ಯೋಗ ಅಧಿಕಾರಿ ಶ್ರೀನಿವಾಸ್, ಎಲ್ಲಾ ಸಿಡಿಪಿಓ ಅಧಿಕಾರಿಗಳು ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.