
ಕೋಲಾರ: ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಜನರ ಸಮಸ್ಯೆಗಳನ್ನು ಆಲಿಸಿ, ಅವುಗಳಿಗೆ ಶೀಘ್ರವಾಗಿ ಪರಿಹಾರ ಒದಗಿಸುವುದು ಅಧಿಕಾರಿಗಳ ಕರ್ತವ್ಯ. ಇದರಲ್ಲಿ ಯಾವುದೇ ಲೋಪ ಕಂಡುಬಂದಲ್ಲಿ ಅಂತಹ ಅಧಿಕಾರಿಗಳ ವಿರುದ್ಧ ಆಯೋಗವು ನಿರ್ದಾಕ್ಷಿಣ್ಯವಾಗಿ ಶಿಸ್ತುಕ್ರಮ ಜರುಗಿಸಲಿದೆ ಎಂದು ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಆಯೋಗದ ಅಧ್ಯಕ್ಷ ಮೂರ್ತಿ ಎಲ್. ಎಚ್ಚರಿಕೆ ನೀಡಿದರು.
ಜಿಲ್ಲಾಡಳಿತ ಭವನದ ಕಚೇರಿಯಲ್ಲಿ ಬುಧವಾರ ಜಿಲ್ಲೆಯಲ್ಲಿ ದಲಿತ ಮುಖಂಡರು ಮತ್ತು ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ನಡೆಸಿದ ಮಹತ್ವದ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.
ಮೂರು ತಿಂಗಳಲ್ಲಿ ಆಯೋಗವು ವಿವಿಧ ಜಿಲ್ಲೆಗಳಲ್ಲಿ ಸಂಚರಿಸಿ 12 ಕೋರ್ಟ್ ಕಲಾಪಗಳನ್ನು ನಡೆಸಿದೆ. ಈ ಮೂಲಕ 185 ಹಳೆಯ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದೆ. ಬಾಕಿ ಇರುವ ಸುಮಾರು 3,650 ಪ್ರಕರಣಗಳನ್ನು ಆದಷ್ಟು ಬೇಗ ವಿಲೇವಾರಿ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ಕೋಲಾರದಲ್ಲಿ ಸುಸಜ್ಜಿತವಾದ ಬೃಹತ್ ಅಂಬೇಡ್ಕರ್ ಭವನದ ಅವಶ್ಯವಿದ್ದು, ಸದ್ಯದ ಕಟ್ಟಡವು ಕೇವಲ ಅಧಿಕಾರಿಗಳ ಕಚೇರಿಯಾಗಿ ಬಳಕೆಯಾಗುತ್ತಿದೆ. ಇದನ್ನು ಸರಿಪಡಿಸಿ ಸಮುದಾಯಕ್ಕೆ ಅನುಕೂಲವಾಗುವಂತೆ ಮಾಡುವ ಬಗ್ಗೆ ಸರ್ಕಾರದ ಗಮನ ಸೆಳೆಯಲಾಗುವುದು ಎಂದು ಹೇಳಿದರು.
ಎಸ್‌ಸಿಪಿ ಮತ್ತು ಟಿಎಸ್‌ಪಿ ಯೋಜನೆಯಡಿ ಮೀಸಲಿಟ್ಟ ಹಣವು ಸರಿಯಾಗಿ ಬಳಕೆಯಾಗಬೇಕು. ಅಧಿಕಾರಿಗಳ ನಿರ್ಲಕ್ಷ್ಯದಿಂದ ಈ ಅನುದಾನವು ಸರ್ಕಾರಕ್ಕೆ ವಾಪಸ್ ಹೋದರೆ ಸಂಬಂಧಪಟ್ಟ ಅಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದರು.
ಮುಂದಿನ ಮೂರ್ನಾಲ್ಕು ತಿಂಗಳಲ್ಲಿ ಆಯೋಗವು ಸಂಪೂರ್ಣ ಡಿಜಿಟಲೀಕರಣಗೊಳ್ಳಲಿದ್ದು, ಸಂತ್ರಸ್ತರು ಆನ್‍ಲೈನ್ ಮೂಲಕವೇ ದೂರು ದಾಖಲಿಸಲು ಅವಕಾಶ ಕಲ್ಪಿಸಲಾಗುವುದು ಎಂದು ತಿಳಿಸಿದರು.
ಸಭೆ ಹಾಗೂ ಪತ್ರಿಕಾಗೋಷ್ಠಿಯಲ್ಲಿ ರಾಜ್ಯ ಎಸ್‌ಸಿ, ಎಸ್‌ಟಿ ಆಯೋಗದ ಸದಸ್ಯರಾದ ಕುಂಬಯ್ಯ, ಸುನೀಲ್ ಉಕ್ಕಲಿ, ಕಾರ್ಯದರ್ಶಿ ಶಿವರಾಮ್, ಜಿಲ್ಲಾಧಿಕಾರಿ ಎಂ.ಆರ್.ರವಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕನ್ನಿಕಾ ಸಿಕ್ರಿವಾಲ್, ಕೆಜಿಎಫ್ ಪೊಲೀಸ್ ವರಿಷ್ಠಾಧಿಕಾರಿ ಶಿವಾಂಶು ರಜಪೂತ್, ಜಿಲ್ಲಾ ಪಂಚಾಯತ್ ಸಿಇಒ ಡಾ.ಪ್ರವೀಣ್ ಪಿ.ಬಾಗೇವಾಡಿ, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಎಂ.ಶ್ರೀನಿವಾಸನ್, ವಿವಿಧ ಇಲಾಖೆಯ ಅಧಿಕಾರಿಗಳು ಮತ್ತು ಸಮುದಾಯದ ಮುಖಂಡರು ಪಾಲ್ಗೊಂಡಿದ್ದರು.
ದೌರ್ಜನ್ಯ ನಡೆದಾಗ ಎಫ್‌ಐಆರ್ ದಾಖಲಿಸಿ
ದಲಿತರ ಮೇಲೆ ದೌರ್ಜನ್ಯ ನಡೆದಾಗ ಎಫ್‌ಐಆರ್ ದಾಖಲಾದ ತಕ್ಷಣವೇ ಆರೋಪಿಗಳನ್ನು ಬಂಧಿಸಬೇಕು ಮತ್ತು ನಿಗದಿತ ಸಮಯದಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಬೇಕು. ಸಾಕ್ಷಿಗಳ ಮೇಲೆ ಪ್ರಭಾವ ಬೀರದಂತೆ ಪೊಲೀಸ್ ಇಲಾಖೆ ಎಚ್ಚರಿಕೆ ವಹಿಸಬೇಕು ಎಂದು ಮೂರ್ತಿ ಎಲ್. ಅಧಿಕಾರಿಗಳಿಗೆ ಸೂಚಿಸಿದರು. ಜಿಲ್ಲೆಯಲ್ಲಿ ನಕಲಿ ಜಾತಿ ಪ್ರಮಾಣಪತ್ರ ಪಡೆದು ಸೌಲಭ್ಯ ಪಡೆಯುತ್ತಿರುವ ದೂರುಗಳು ಬಂದಿದ್ದು ಇದನ್ನು ತಡೆಯಲು ವಿಶೇಷ ಸಮಿತಿ ರಚಿಸಿ ತನಿಖೆ ನಡೆಸಲಾಗುವುದು ಎಂದರು.
ಅರಣ್ಯ ಒಕ್ಕಲೆಬ್ಬಿಸದಂತೆ ಕ್ರಮ
ಅರಣ್ಯ ಭೂಮಿಯಲ್ಲಿ ವಾಸವಾಗಿರುವ ಸಮುದಾಯದ ಜನರನ್ನು ಒಕ್ಕಲೆಬ್ಬಿಸದಂತೆ ಸರ್ಕಾರಕ್ಕೆ ಸುತ್ತೋಲೆ ಹೊರಡಿಸಲು ಆಯೋಗವು ಶಿಫಾರಸು ಮಾಡಲಿದೆ. ಜಿಲ್ಲೆಯ ಪ್ರತಿ ಗ್ರಾಮದಲ್ಲೂ ದಲಿತರಿಗಾಗಿ ಸ್ಮಶಾನ ಭೂಮಿ ಗುರುತಿಸುವುದು ಕಡ್ಡಾಯ ಎಂದು ಮೂರ್ತಿ ಎಲ್. ಹೇಳಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.