ADVERTISEMENT

ಕೋಲಾರ: ಎಸ್ಸೆಸ್ಸೆಲ್ಸಿ ಪರೀಕ್ಷೆ ಸುಸೂತ್ರವಾಗಿ ನಡೆಸಿ

ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸತ್ಯಭಾಮ ಸೂಚನೆ

​ಪ್ರಜಾವಾಣಿ ವಾರ್ತೆ
Published 12 ಜೂನ್ 2020, 13:45 IST
Last Updated 12 ಜೂನ್ 2020, 13:45 IST
ಎಸ್ಸೆಸ್ಸೆಲ್ಸಿ ಪರೀಕ್ಷೆ ಸಿದ್ಧತೆ ಸಂಬಂಧ ಜಿಲ್ಲಾಧಿಕಾರಿ ಸಿ.ಸತ್ಯಭಾಮ ಕೋಲಾರದಲ್ಲಿ ಶುಕ್ರವಾರ ಶಿಕ್ಷಣ ಇಲಾಖೆ ಅಧಿಕಾರಿಗಳ ಸಭೆ ನಡೆಸಿದರು.
ಎಸ್ಸೆಸ್ಸೆಲ್ಸಿ ಪರೀಕ್ಷೆ ಸಿದ್ಧತೆ ಸಂಬಂಧ ಜಿಲ್ಲಾಧಿಕಾರಿ ಸಿ.ಸತ್ಯಭಾಮ ಕೋಲಾರದಲ್ಲಿ ಶುಕ್ರವಾರ ಶಿಕ್ಷಣ ಇಲಾಖೆ ಅಧಿಕಾರಿಗಳ ಸಭೆ ನಡೆಸಿದರು.   

ಕೋಲಾರ: ‘ಎಸ್ಸೆಸ್ಸೆಲ್ಸಿ ಪರೀಕ್ಷೆ ಸುಸೂತ್ರವಾಗಿ ನಡೆಸಲು ಅಗತ್ಯ ಸಿದ್ಧತೆ ಮಾಡಿಕೊಳ್ಳಿ’ ಎಂದು ಜಿಲ್ಲಾಧಿಕಾರಿ ಸಿ.ಸತ್ಯಭಾಮ ಶಿಕ್ಷಣ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಎಸ್ಸೆಸ್ಸೆಲ್ಸಿ ಪರೀಕ್ಷೆ ಸಿದ್ಧತೆ ಸಂಬಂಧ ಇಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ‘ಜೂನ್‌ 25ರಿಂದ ಜುಲೈ 4ರವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿದ್ದು, ಪರೀಕ್ಷಾ ಪ್ರಕ್ರಿಯೆಯಲ್ಲಿ ಯಾವುದೇ ಲೋಪವಾಗಬಾರದು’ ಎಂದು ತಿಳಿಸಿದರು.

‘ಜಿಲ್ಲೆಯಲ್ಲಿ 20,907 ವಿದ್ಯಾರ್ಥಿಗಳು 70 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯುತ್ತಿದ್ದಾರೆ. ಹಿಂದಿನ ವರ್ಷಗಳಲ್ಲಿ ಒಂದು ಕೊಠಡಿಗೆ 24 ವಿದ್ಯಾರ್ಥಿಗಳನ್ನು ಕೂರಿಸಲಾಗುತ್ತಿತ್ತು. ಆದರೆ, ಈ ವರ್ಷ ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ನಡುವೆ ಅಂತರ ಕಾಯ್ದುಕೊಳ್ಳುವುದು ಮುಖ್ಯ. ಹೀಗಾಗಿ ಒಂದು ಕೊಠಡಿಗೆ 18ರಿಂದ 20 ವಿದ್ಯಾರ್ಥಿಗಳನ್ನು ಮಾತ್ರ ಕೂರಿಸಬೇಕು’ ಎಂದು ಹೇಳಿದರು.

ADVERTISEMENT

‘ಪ್ರತಿ ಪರೀಕ್ಷಾ ಕೇಂದ್ರ ಸ್ಯಾನಿಟೈಸ್‌ ಮಾಡಿಸಿ. ರೋಟರಿ, ಸ್ಕೌಟ್ಸ್‌ ಮತ್ತು ಗೈಡ್ಸ್‌ ಸಂಸ್ಥೆಗಳು ಉಚಿತವಾಗಿ ಮಾಸ್ಕ್‌ ನೀಡಿವೆ. ಪರೀಕ್ಷೆ ಬರೆಯುವ ಪ್ರತಿ ವಿದ್ಯಾರ್ಥಿಗೂ ಮಾಸ್ಕ್ ಕೊಡಿ. ಪರೀಕ್ಷೆ ಆರಂಭಕ್ಕೂ ಮುನ್ನ ಕೇಂದ್ರದ ಪ್ರವೇಶ ಭಾಗದಲ್ಲೇ ವಿದ್ಯಾರ್ಥಿಗಳು ಹಾಗೂ ಪರೀಕ್ಷಾ ಕಾರ್ಯಕ್ಕೆ ನಿಯೋಜನೆಗೊಂಡ ಸಿಬ್ಬಂದಿಯ ಥರ್ಮಲ್ ಸ್ಕ್ಯಾನಿಂಗ್‌ ಮಾಡಿ. ಜತೆಗೆ ಕೈ ಸ್ವಚ್ಛಗೊಳಿಸಿಕೊಳ್ಳಲು ಸ್ಯಾನಿಟೈಸರ್‌ ನೀಡಿ’ ಎಂದರು.

ಬಸ್‌ ಸೌಲಭ್ಯ: ‘ಪರೀಕ್ಷಾ ದಿನದಂದು ವಿದ್ಯಾರ್ಥಿಗಳಿಗೆ ಸಾರಿಗೆ ಸಮಸ್ಯೆ ಆಗದಂತೆ ಕ್ರಮ ಕೈಗೊಳ್ಳಿ. ವಿದ್ಯಾರ್ಥಿಗಳು ಬರುವ ಮಾರ್ಗಗಳಲ್ಲಿ ಹೆಚ್ಚುವರಿಯಾಗಿ ಕೆಎಸ್‌ಆರ್‌ಟಿಸಿ ಬಸ್‌ ಸೌಲಭ್ಯ ಕಲ್ಪಿಸಿ. ಬಿಇಒಗಳು ಯಾವ ಹಳ್ಳಿಗಳಿಂದ ಮಕ್ಕಳು ಪರೀಕ್ಷೆಗೆ ಬರುತ್ತಾರೆ ಎಂಬ ಮಾಹಿತಿಯನ್ನು ಕೆಎಸ್‌ಆರ್‌ಟಿಸಿ ಅಧಿಕಾರಿಗಳಿಗೆ ನೀಡಿ’ ಎಂದು ತಿಳಿಸಿದರು.

‘ಪರೀಕ್ಷೆ ಪಾರದರ್ಶಕವಾಗಿ ನಡೆಸಬೇಕು. ಜಿಲ್ಲೆಯು ಗಡಿ ಭಾಗದಲ್ಲಿದ್ದು, ಹೊರ ರಾಜ್ಯದಿಂದ 9 ವಿದ್ಯಾರ್ಥಿಗಳು ಜಿಲ್ಲೆಯಲ್ಲಿ ಪರೀಕ್ಷೆ ಬರೆಯಲು ಬರುತ್ತಾರೆ. ಅವರಿಗೆ ಆರೋಗ್ಯ ಪ್ರಮಾಣಪತ್ರ ಕಡ್ಡಾಯವಾಗಿರುತ್ತದೆ. ಪರೀಕ್ಷಾ ದಿನಗಳಂದು ಬೆಸ್ಕಾಂ ಅಧಿಕಾರಿಗಳು ನಿರಂತರ ವಿದ್ಯುತ್ ಸೇವೆ ನೀಡಬೇಕು’ ಎಂದು ಸೂಚಿಸಿದರು.

‘ಈ ಬಾರಿ ವಿದ್ಯಾರ್ಥಿಗಳಿಗೆ ಹೆಚ್ಚಿನ ಕಾಲಾವಕಾಶ ದೊರೆತಿರುವುದರಿಂದ ಉತ್ತಮವಾಗಿ ಅಭ್ಯಾಸ ಮಾಡಿದ್ದು, ಪರೀಕ್ಷೆ ಬರೆಯಲು ಉತ್ಸುಕರಾಗಿದ್ದಾರೆ. ಪರೀಕ್ಷಾ ಕೇಂದ್ರದಲ್ಲಿ ಯಾವುದಾದರೂ ವಿದ್ಯಾರ್ಥಿಗೆ ಕೊರೊನಾ ಸೋಂಕಿನ ಲಕ್ಷಣ ಕಂಡುಬಂದರೆ ಅವರನ್ನು ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಿ ಪರೀಕ್ಷೆ ಬರೆಸಿ’ ಎಂದು ಸಲಹೆ ನೀಡಿದರು.

‘ಪರೀಕ್ಷೆಗೂ ಮುನ್ನ ಯಾವುದೇ ವಿದ್ಯಾರ್ಥಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟರೆ ಅವರಿಗೆ ಪೂರಕ ಪರೀಕ್ಷೆಯಲ್ಲಿ ಅವಕಾಶ ನೀಡಲಾಗುವುದು. ಅಂತಹ ವಿದ್ಯಾರ್ಥಿಗಳನ್ನು ಹೊಸ ವಿದ್ಯಾರ್ಥಿಗಳೆಂದೇ (ಫ್ರೆಶರ್ಸ್‌) ಪರಿಗಣಿಸಲಾಗುವುದು’ ಎಂದು ಸ್ಪಷ್ಟಪಡಿಸಿದರು.

ಬದ್ಧತೆಯಿಂದ ನಡೆಸಿ: ‘ದ್ವಿತೀಯ ಪಿಯುಸಿಯ ಇಂಗ್ಲೀಷ್ ಪರೀಕ್ಷೆ ಜೂನ್‌ 18ರಂದು ನಡೆಯಲಿದೆ. ದ್ವಿತೀಯ ಪಿಯುಸಿ ಪರೀಕ್ಷೆಗೆ ಹೊರ ರಾಜ್ಯದಿಂದ 60 ವಿದ್ಯಾರ್ಥಿಗಳು ಬರುತ್ತಿದ್ದು, ಇವರನ್ನು ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಿ ಪರೀಕ್ಷೆ ಬರೆಸಲಾಗುತ್ತದೆ. ಒಟ್ಟಾರೆ ಪರೀಕ್ಷೆಯನ್ನು ಚುನಾವಣೆ ರೀತಿಯಲ್ಲಿ ಬದ್ಧತೆಯಿಂದ ನಡೆಸಲು ಅಧಿಕಾರಿಗಳು ಸಜ್ಜಾಗಬೇಕು’ ಎಂದು ಕಿವಿಮಾತು ಹೇಳಿದರು.

‘ಮಾರ್ಚ್ ಮತ್ತು ಏಪ್ರಿಲ್ ತಿಂಗಳಲ್ಲಿ ನಡೆಯಬೇಕಿದ್ದ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಕೊರೊನಾ ಸೋಂಕಿನ ಕಾರಣಕ್ಕೆ ಮುಂದೂಡಲಾಯಿತು. ಯಾವುದೇ ಲೋಪ ಆಗದಂತೆ ಪರೀಕ್ಷೆ ನಡೆಸುತ್ತೇವೆ. ವಿದ್ಯಾರ್ಥಿಗಳು ಗೊಂದಲಕ್ಕೆ ಒಳಗಾಗದೆ ಪರೀಕ್ಷಾ ಕೇಂದ್ರಕ್ಕೆ ಬಂದು ಪರೀಕ್ಷೆ ಬರೆಯಬಹುದು’ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೆ.ರತ್ನಯ್ಯ ಹೇಳಿದರು.

ಸ್ಕೌಟ್ಸ್ ಮತ್ತು ಗೈಡ್ಸ್‌ ಸಂಸ್ಥೆ ಜಿಲ್ಲಾ ಉಪಾಧ್ಯಕ್ಷ ಚಂದ್ರಶೇಖರ್, ಪರೀಕ್ಷಾ ನೋಡಲ್‌ ಅಧಿಕಾರಿಗಳಾದ ಎ.ಎನ್‌.ನಾಗೇಂದ್ರಪ್ರಸಾದ್, ಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಚಂದ್ರಶೇಖರ್, ವಿವಿಧ ತಾಲ್ಲೂಕು ತಹಶೀಲ್ದಾರ್‌ಗಳು ಹಾಗೂ ಬಿಇಒಗಳು ಹಾಜರಿದ್ದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.