
ಹೆಲಿಕಾಪ್ಟರ್
(ಪ್ರಾತಿನಿಧಿಕ ಚಿತ್ರ)
ಕೋಲಾರ: ತಾಲ್ಲೂಕಿನ ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ಟಾಟಾ ಅಡ್ವಾನ್ಸ್ಡ್ ಸಿಸ್ಟಮ್ಸ್ ಲಿಮಿಟೆಡ್ (ಟಿಎಎಸ್‌ಎಲ್) ನಿರ್ಮಿಸಿರುವ ಏರ್‌ಬಸ್ ಎಚ್ 125 ಲಘು ಹೆಲಿಕಾಪ್ಟರ್ ಅಂತಿಮ ಜೋಡಣಾ ಘಟಕಕ್ಕೆ ಮಂಗಳವಾರ ಸಂಜೆ ಚಾಲನೆ ಸಿಗಲಿದೆ.
ಈ ಘಟಕಕ್ಕೆ ಮುಂಬೈನಿಂದ ಪ್ರಧಾನಿ ನರೇಂದ್ರ ಮೋದಿ ಹಾಗೂ ಫ್ರಾನ್ಸ್ ಅಧ್ಯಕ್ಷ ಇಮಾನ್ಯುಯೆಲ್ ಮ್ಯಾಕ್ರಾನ್ ಅವರು ವರ್ಚುವಲ್ ವೇದಿಕೆ ಮೂಲಕ ಚಾಲನೆ ನೀಡಲಿದ್ದಾರೆ.
ವೇಮಗಲ್‌ನಲ್ಲಿ ನಡೆಯುವ ಉದ್ಘಾಟನಾ ಕಾರ್ಯಕ್ರಮದಲ್ಲಿ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹಾಗೂ ಫ್ರಾನ್ಸ್ ರಕ್ಷಣಾ ಸಚಿವೆ ಕ್ಯಾಥರಿನ್ ವಾಟ್ರಿನ್, ರಕ್ಷಣಾ ಕಾರ್ಯದರ್ಶಿ ರಾಜೇಶ್ ಕುಮಾರ್ ಸಿಂಗ್ ಪಾಲ್ಗೊಳ್ಳಲಿದ್ದಾರೆ. ಇದಕ್ಕೂ ಮೊದಲು ಉಭಯ ದೇಶಗಳ ನಡುವಿನ ರಕ್ಷಣಾ ಒಪ್ಪಂದ ಕುರಿತು ಬೆಂಗಳೂರಿನಲ್ಲಿ ಸಭೆ ನಡೆಯಲಿದೆ.
ಖಾಸಗಿ ವಲಯದ ಮೊದಲ ಘಟಕ:
ಖಾಸಗಿ ವಲಯದಲ್ಲಿ ದೇಶದ ಮೊದಲ ಹೆಲಿಕಾಪ್ಟರ್ ತಯಾರಿಕಾ ಘಟಕ ಇದಾಗಿದೆ. ಸ್ಥಳೀಯವಾಗಿ ಮತ್ತಷ್ಟು ಉದ್ಯೋಗಾವಕಾಶ ಸೃಷ್ಟಿಯಾಗುವ ನಿರೀಕ್ಷೆಯನ್ನು ಈ ಭಾಗದ ಜನರು ಹೊಂದಿದ್ದಾರೆ.
ರಕ್ಷಣಾ ಸಚಿವರ ಭೇಟಿ ಹಿನ್ನೆಲೆಯಲ್ಲಿ ವೇಮಗಲ್ ಕೈಗಾರಿಕಾ ಪ್ರದೇಶದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಜಿಲ್ಲಾಧಿಕಾರಿ ಎಂ.ಆರ್.ರವಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕನ್ನಿಕಾ ಸಿಕ್ರಿವಾಲ್ ಸಿದ್ಧತೆ ಪರಿಶೀಲಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.