ADVERTISEMENT

ಕೋವಿಡ್‌–19: ಸಾಮಾಜಿಕ ಅಂತರ ಕಾಯ್ದುಕೊಳ್ಳಿ

ಸಭೆಯಲ್ಲಿ ಜಿಲ್ಲೆಯ ಜನರಿಗೆ ಜಿಲ್ಲಾ ಉಸ್ತುವಾರಿ ಸಚಿವ ನಾಗೇಶ್‌ ಮನವಿ

​ಪ್ರಜಾವಾಣಿ ವಾರ್ತೆ
Published 27 ಮಾರ್ಚ್ 2020, 14:01 IST
Last Updated 27 ಮಾರ್ಚ್ 2020, 14:01 IST
ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ನಾಗೇಶ್‌ ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ತಡೆಗೆ ಕೈಗೊಂಡಿರುವ ಕ್ರಮಗಳ ಕುರಿತು ಕೋಲಾರದಲ್ಲಿ ಶುಕ್ರವಾರ ಆರೋಗ್ಯ ಇಲಾಖೆ ಅಧಿಕಾರಿಗಳ ಸಭೆ ನಡೆಸಿದರು.
ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ನಾಗೇಶ್‌ ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ತಡೆಗೆ ಕೈಗೊಂಡಿರುವ ಕ್ರಮಗಳ ಕುರಿತು ಕೋಲಾರದಲ್ಲಿ ಶುಕ್ರವಾರ ಆರೋಗ್ಯ ಇಲಾಖೆ ಅಧಿಕಾರಿಗಳ ಸಭೆ ನಡೆಸಿದರು.   

ಕೋಲಾರ: ‘ದೇಶ ಹಾಗೂ ರಾಜ್ಯದೆಲ್ಲೆಡೆ ಕೊರೊನಾ ಸೋಂಕಿನ ಭೀತಿ ಹೆಚ್ಚಿದೆ. ಜಿಲ್ಲೆಯಲ್ಲಿ ಈವರೆಗೆ ಕೊರೊನಾ ಸೋಂಕಿನ ಪ್ರಕರಣ ಪತ್ತೆಯಾಗಿಲ್ಲ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ನಾಗೇಶ್‌ ಹೇಳಿದರು.

ಕೊರೊನಾ ಸೋಂಕಿನ ತಡೆಗೆ ಜಿಲ್ಲೆಯಲ್ಲಿ ಕೈಗೊಂಡಿರುವ ಕ್ರಮಗಳ ಕುರಿತು ಇಲ್ಲಿ ಶುಕ್ರವಾರ ಆರೋಗ್ಯ ಇಲಾಖೆ ಅಧಿಕಾರಿಗಳ ಸಭೆ ನಡೆಸಿದ ಸಚಿವರು, ‘ಅಕ್ಕಪಕ್ಕದ ಜಿಲ್ಲೆಗಳಲ್ಲಿ ಕೊರೊನಾ ಸೋಂಕು ಪ್ರಕರಣ ದೃಢಪಟ್ಟಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲೂ ಆತಂಕದ ಪರಿಸ್ಥಿತಿಯಿದೆ. ಸೋಂಕು ತಡೆಗೆ ಜನರು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು’ ಎಂದು ಮನವಿ ಮಾಡಿದರು.

‘ಕೇಂದ್ರ ಸರ್ಕಾರವು ಕೋವಿಡ್‌–19 ನಿಯಂತ್ರಣಕ್ಕಾಗಿ ದೇಶದೆಲ್ಲೆಡೆ ದಿಗ್ಬಂಧನ ಘೋಷಿಸಿದೆ. ಕೊರೊನಾ ದೇಶದಲ್ಲಿ ಹುಟ್ಟಿದ ವೈರಾಣುವಲ್ಲ. ಬದಲಿಗೆ ಇದು ಚೀನಾದಿಂದ ಬಂದದ್ದು. ಈ ವೈರಾಣು ತಡೆಗೆ ಜನರು ಕಡ್ಡಾಯವಾಗಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರವು ಕೊರೊನಾ ಸೋಂಕು ತಡೆಗೆ ಕ್ರಮ ಕೈಗೊಂಡಿವೆ. ಸರ್ಕಾರಗಳ ಜತೆ ಜನರು ಕೈಜೋಡಿಸಬೇಕು’ ಎಂದು ಕೋರಿದರು.

ADVERTISEMENT

‘ಸರ್ಕಾರಗಳ ಮಾರ್ಗಸೂಚಿಯನ್ನು ಜನರು ಪಾಲಿಸಬೇಕು. ಯಾರೂ ಅನಗತ್ಯವಾಗಿ ಮನೆಯಿಂದ ಹೊರ ಬರಬಾರದು. ದಿನಬಳಕೆ ವಸ್ತುಗಳಾದ ಹಾಲು, ತರಕಾರಿ ಹಾಗೂ ದಿನಸಿ ಪದಾರ್ಥಗಳನ್ನು ಜನರ ಮನೆ ಬಾಗಿಲಿಗೆ ತಲುಪಿಸುವ ವ್ಯವಸ್ಥೆ ಮಾಡುತ್ತೇವೆ. ದಿನಸಿ ಅಂಗಡಿಗಳನ್ನು ನಿಗದಿತ ಅವಧಿಯಲ್ಲಿ ಮಾತ್ರ ತೆರೆಯುವಂತೆ ಸಮಯ ನಿಗದಿಪಡಿಸುತ್ತೇವೆ’ ಎಂದು ವಿವರಿಸಿದರು.

ತರಕಾರಿಗೆ ವ್ಯವಸ್ಥೆ: ‘ಅನಿವಾರ್ಯ ಸಂದರ್ಭದಲ್ಲಿ ಮನೆಯಿಂದ ಹೊರಗೆ ಬರಬೇಕಾದವರು ಕಡ್ಡಾಯವಾಗಿ ಮುಖಗವಸು ಧರಿಸಬೇಕು. ಪ್ರತಿ 2 ತಾಸಿಗೊಮ್ಮೆ ಸ್ಯಾನಿಟೈಸರ್‌ ಅಥವಾ ಸೋಪ್‌ನಿಂದ ಕೈ ತೊಳೆಯಬೇಕು. ಜನಜಂಗುಳಿ ಕಡಿಮೆ ಮಾಡಲು ಆಟದ ಮೈದಾನಗಳಲ್ಲಿ ತರಕಾರಿ ವಹಿವಾಟಿಗೆ ವ್ಯವಸ್ಥೆ ಮಾಡುತ್ತೇವೆ. ತರಕಾರಿ ವಹಿವಾಟಿನ ಹಾಗೂ ದಿನಸಿ ಅಂಗಡಿಗಳಲ್ಲಿ ಜನರು ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು’ ಎಂದು ಸಲಹೆ ನೀಡಿದರು.

‘ಜಿಲ್ಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ 450 ಐಸೋಲೇಷನ್ ಬೆಡ್‌ ಮತ್ತು ತೀವ್ರ ನಿಗಾ ಘಟಕದಲ್ಲಿ 94 ಬೆಡ್‌ ಮೀಸಲಿರಿಸಲಾಗಿದೆ. ರಾಜ್ಯ ಸರ್ಕಾರವು ಕೊರೊನಾ ಸೋಂಕಿನ ನಿಯಂತ್ರಣಕ್ಕೆ ಅನುದಾನ ಮೀಸಲಿಟ್ಟಿದೆ. ಕೇಂದ್ರ ಸರ್ಕಾರವು ಹಲವು ಪ್ರೋತ್ಸಾಹದಾಯಕ ಯೋಜನೆಗಳ ಮೂಲಕ ಜನರಿಗೆ ಸೌಲಭ್ಯ ಕಲ್ಪಿಸಲಿದೆ.

ರಾಷ್ಟ್ರೀಯ ವಿಪತ್ತು ನಿಧಿ (ಎನ್‌ಡಿಆರ್‌ಎಫ್‌) ಅನುದಾನದಲ್ಲಿ ಜಿಲ್ಲೆಗೆ ಥರ್ಮಲ್‌ ಸ್ಕ್ಯಾನರ್ ಗನ್‌, ವೆಂಟಿಲೇಟರ್ ಹಾಗೂ ಮುಖಗವಸುಗಳನ್ನು ಖರೀದಿಸಲಾಗುತ್ತಿದೆ’ ಎಂದು ಮಾಹಿತಿ ನೀಡಿದರು.

ಪ್ರಯಾಣ ಮೊಟಕುಗೊಳಿಸಿ: ‘ಕೊರೊನಾ ಸೋಂಕಿನ ಕಾರಣಕ್ಕೆ ಜಿಲ್ಲೆ ಸೇರಿದಂತೆ ಎಲ್ಲೆಡೆ ಜನ ಭಯಭೀತರಾಗಿದ್ದಾರೆ. ಈ ಸೋಂಕಿನ ವಿಚಾರದಲ್ಲಿ ಜನ ಅನಗತ್ಯವಾಗಿ ಆತಂಕಪಡುವ ಬದಲು ವಿವೇಕಯುತವಾಗಿ ಆಲೋಚಿಸಬೇಕು. ಸರ್ಕಾರ ನೀಡುವ ಸಲಹೆ ಸೂಚನೆಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಸಾಧ್ಯವಾದಷ್ಟು ದೂರದ ಪ್ರಯಾಣ ಮೊಟಕುಗೊಳಿಸಬೇಕು’ ಎಂದು ಕಿವಿಮಾತು ಹೇಳಿದರು.

‘ಸಾರ್ವಜನಿಕರು ಕೊರೊನಾ ಸೋಂಕಿನ ತಡೆಗೆ ಸೋಂಕುಪೀಡಿತ ವ್ಯಕ್ತಿಗಳ ಸಂಪರ್ಕದಿಂದ ದೂರವಿರಬೇಕು. ಶಂಕಿತ ರೋಗಿಯು ಮನೆಯಲ್ಲಿಯೇ ಪ್ರತ್ಯೇಕವಾಗಿರಬೇಕು. ವಿದೇಶದಿಂದ ಬಂದ ವ್ಯಕ್ತಿಗಳ ಬಗ್ಗೆ ಸಾರ್ವಜನಿಕರು ಆರೋಗ್ಯ ಇಲಾಖೆಗೆ ಅಥವಾ ಸಮೀಪದ ಪೊಲೀಸ್‌ ಠಾಣೆಗೆ ಮಾಹಿತಿ ನೀಡಬೇಕು’ ಎಂದು ಹೇಳಿದರು.

ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಾಹ್ನವಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್‌.ಎನ್‌.ವಿಜಯ್‌ಕುಮಾರ್‌, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ.ನಾರಾಯಣಸ್ವಾಮಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.