ADVERTISEMENT

ಕೆಆರ್‌ಐಡಿಎಲ್‌ ಅಕ್ರಮ: ತನಿಖೆಗೆ ಆದೇಶಿಸುತ್ತೇವೆ

​ಪ್ರಜಾವಾಣಿ ವಾರ್ತೆ
Published 2 ಸೆಪ್ಟೆಂಬರ್ 2020, 16:14 IST
Last Updated 2 ಸೆಪ್ಟೆಂಬರ್ 2020, 16:14 IST

ಕೋಲಾರ: ‘ಜಿಲ್ಲೆಯಲ್ಲಿ ಇಲಾಖೆಯಿಂದ ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮಕ್ಕೆ (ಕೆಆರ್‌ಐಡಿಎಲ್‌) ವಹಿಸಿರುವ ಅಭಿವೃದ್ಧಿ ಕಾಮಗಾರಿಗಳಲ್ಲಿ ಅಕ್ರಮ ನಡೆದಿರುವ ಬಗ್ಗೆ ದೂರು ಬಂದಿದ್ದು, ಸಮಗ್ರ ತನಿಖೆ ನಡೆಸಲು ಆದೇಶಿಸುತ್ತೇವೆ’ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸಚಿವ ಶ್ರೀಮಂತ ಬಾಳಾಸಾಹೇಬ ಪಾಟೀಲ ತಿಳಿಸಿದರು.

ಇಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಕೆಆರ್‌ಐಡಿಎಲ್‌ ಅಧಿಕಾರಿಗಳು ಜಿಲ್ಲೆ ಸೇರಿದಂತೆ ರಾಜ್ಯದೆಲ್ಲೆಡೆ ಅಭಿವೃದ್ಧಿ ಕಾಮಗಾರಿಗಳಲ್ಲಿ ಸಾಕಷ್ಟು ಅಕ್ರಮ ನಡೆಸಿದ್ದಾರೆ. ಈ ಸಂಗತಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಗಮನಕ್ಕೆ ಬಂದಿದೆ’ ಎಂದು ಹೇಳಿದರು.

‘ಜಿಲ್ಲೆಯಲ್ಲಿ ಇಲಾಖೆಯಿಂದ ಅಭಿವೃದ್ಧಿ ಕಾಮಗಾರಿಗಳಿಗಾಗಿ ಮೂರ್ನಾಲ್ಕು ವರ್ಷಗಳಲ್ಲಿ ಕೆಆರ್‌ಐಡಿಎಲ್‌ಗೆ ಬಿಡುಗಡೆಯಾದ ಅನುದಾನ, ಕಾಮಗಾರಿಗಳ ಸ್ಥಿತಿಗತಿ ಮತ್ತು ಗುಣಮಟ್ಟ, ಅನುದಾನ ಬಳಕೆ ಸಂಬಂಧ ದಾಖಲೆಪತ್ರ ಸಮೇತ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಇದೇ ರೀತಿ ರಾಜ್ಯದ ಎಲ್ಲಾ ಜಿಲ್ಲೆಗಳಿಂದ ವರದಿ ತರಿಸಿಕೊಂಡು ಪರಿಶೀಲನೆ ಮಾಡುತ್ತೇವೆ’ ಎಂದು ಸ್ಪಷ್ಟಪಡಿಸಿದರು.

ADVERTISEMENT

‘ಜಿಲ್ಲೆಯಲ್ಲಿ ಕಾಮಗಾರಿ ಪೂರ್ಣಗೊಳಿಸದೆ ಕೆಆರ್‌ಐಡಿಎಲ್‌ ಅಧಿಕಾರಿಗಳು ಗುತ್ತಿಗೆದಾರರಿಗೆ ಬಿಲ್‌ ಮಂಜೂರು ಮಾಡಿ ಅಕ್ರಮ ಎಸಗಿರುವ ಬಗ್ಗೆ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಖಂಡಿತ ಶಿಸ್ತುಕ್ರಮ ಜರುಗಿಸುತ್ತೇವೆ’ ಎಂದು ಭರವಸೆ ನೀಡಿದರು.

ಬಹಿರಂಗಪಡಿಸಲಿ: ಡ್ರಗ್ಸ್ ದಂಧೆ ಹಣದಿಂದ ಕಾಂಗ್ರೆಸ್‌–ಜೆಡಿಎಸ್‌ ಮೈತ್ರಿ ಸರ್ಕಾರ ಪತನವಾಯಿತೆಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವರು, ‘ಕುಮಾರಸ್ವಾಮಿ ಅವರು ವಿರೋಧ ಪಕ್ಷದವರು. ಹೀಗಾಗಿ ಆರೋಪಿಸುವುದೇ ಅವರ ಕೆಲಸ. ಅವರ ಬಳಿ ಸಾಕ್ಷಿಯಿದ್ದರೆ ಬಹಿರಂಗಪಡಿಸಲಿ’ ಎಂದು ಸವಾಲು ಹಾಕಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.