ADVERTISEMENT

ಗುಜರಾತ್‌ನಲ್ಲಿ ಅ.2ಕ್ಕೆ ಕುರುಬರ ಸಮಾವೇಶ

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2021, 15:21 IST
Last Updated 16 ಸೆಪ್ಟೆಂಬರ್ 2021, 15:21 IST
ಕೋಲಾರದಲ್ಲಿ ಗುರುವಾರ ಶೆಫರ್ಡ್ ಇಂಡಿಯಾ ಇಂಟರ್ ನ್ಯಾಷನಲ್ ಜಿಲ್ಲಾ ಸಮಿತಿಯ ಪದಾಧಿಕಾರಿಗಳ ಸಭೆ ನಡೆಯಿತು
ಕೋಲಾರದಲ್ಲಿ ಗುರುವಾರ ಶೆಫರ್ಡ್ ಇಂಡಿಯಾ ಇಂಟರ್ ನ್ಯಾಷನಲ್ ಜಿಲ್ಲಾ ಸಮಿತಿಯ ಪದಾಧಿಕಾರಿಗಳ ಸಭೆ ನಡೆಯಿತು   

ಕೋಲಾರ: ‘ಕುರುಬ ಸಮುದಾಯಕ್ಕೆ ಸೇರಿದವರು ದೇಶದಲ್ಲಿ ಹಂಚಿ ಹೋಗಿದ್ದು, ಸಮುದಾಯದ ಎಲ್ಲರನ್ನೂ ಒಂದೇ ಹೆಸರಿನಲ್ಲಿ ಗುರುತಿಸುವ ಉದ್ದೇಶದೊಂದಿಗೆ ಗುಜರಾತ್‌ನ ಅಹಮದಾಬಾದ್‌ನಲ್ಲಿ ಅ.2ರಂದು ಕುರುಬರ ಸಮಾವೇಶ ಹಮ್ಮಿಕೊಳ್ಳಲಾಗಿದೆ’ ಎಂದು ಶೆಫರ್ಡ್ ಇಂಡಿಯಾ ಇಂಟರ್ ನ್ಯಾಷನಲ್ ಜಿಲ್ಲಾ ಘಟಕದ ಅಧ್ಯಕ್ಷ ಸಿ.ಸೋಮಶೇಖರ್ ತಿಳಿಸಿದರು.

ಇಲ್ಲಿ ಗುರುವಾರ ನಡೆದ ಶೆಫರ್ಡ್ ಇಂಡಿಯಾ ಇಂಟರ್ ನ್ಯಾಷನಲ್ ಜಿಲ್ಲಾ ಸಮಿತಿಯ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿ, ‘ಕುರುಬ ಸಮುದಾಯವನ್ನು ಸಂಘಟಿಸುವ ನಿಟ್ಟಿನಲ್ಲಿ ಅ.2ರಂದು 6ನೇ ಸಂಸ್ಥಾಪನಾ ದಿನ ಸಹ ಆಯೋಜಿಸಲಾಗಿದೆ’ ಎಂದು ವಿವರಿಸಿದರು.

‘ಕುರುಬರು ಎನ್ನುವುದು ಒಂದು ಜಾತಿಯಲ್ಲ. ಬದಲಿಗೆ ಸಮುದಾಯವೆಂಬ ಸತ್ಯ ಕುರುಬ ಜನಾಂಗಕ್ಕೆ ಅರ್ಥವಾಗಿದೆ. ದೇಶದೆಲ್ಲೆಡೆ ಧನಗರ್, ಕುರುಮನ್, ಗಡಾರಿಯಾ, ಪಾಲಕ್ಷತ್ರೀಯ, ಗದ್ವಿ. ದಿವಾಸಿ ಹಾಗೂ ಇತರೆ ಹೆಸರುಗಳಿಂದ ಗುರುತಿಸಿಕೊಂಡಿರುವ ಕುರುಬ ಸಮುದಾಯವನ್ನು ಒಂದೇ ಹೆಸರಿನಡಿ ತರಲು ಪ್ರಯತ್ನ ನಡೆಸಲಾಗುತ್ತಿದೆ’ ಎಂದು ಹೇಳಿದರು.

ADVERTISEMENT

‘ತಮಿಳುನಾಡಿನಲ್ಲಿ ಕುರುಬರನ್ನು ಪರಿಶಿಷ್ಟ ಪಂಗಡಕ್ಕೆ ಸೇರಿಸುವ ಪ್ರಯತ್ನ ನಡೆದಿದೆ. ರಾಜಸ್ಥಾನದಲ್ಲಿ ವಿಭಿನ್ನ ಹೆಸರಿನಿಂದ ಗುರುತಿಸಿಕೊಂಡಿರುವ ಕುರುಬ ಸಮುದಾಯದವರು ಈಗಾಗಲೇ ಪರಿಶಿಷ್ಟ ಪಂಗಡಕ್ಕೆ ಸೇರಿದ್ದಾರೆ. ಕರ್ನಾಟಕದಲ್ಲಿ ಜೇನು ಕುರುಬರು, ಕಾಡು ಕುರುಬರು, ಗೊಂಡಾ ಮತ್ತು ರಾಜಗೊಂಡಾ ಎಂಬ ಹೆಸರಿನಲ್ಲಿ ಗುರುತಿಸಿಕೊಂಡಿರುವ ಕುರುಬರು ಪರಿಶಿಷ್ಟ ಪಂಗಡಕ್ಕೆ ಸೇರಿದ್ದಾರೆ. ಎಲ್ಲಾ ಕುರುಬರನ್ನೂ ಪರಿಶಿಷ್ಟ ಪಂಗಡಕ್ಕೆ ಸೇರಿಸುವಂತೆ ಕೇಂದ್ರದ ಮೇಲೆ ಒತ್ತಡ ಹೇರಲು ನಿರ್ಧರಿಸಲಾಗಿದೆ’ ಎಂದು ಮಾಹಿತಿ ನೀಡಿದರು.

ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ವಿ.ಮಂಜುನಾಥ್, ರಾಜ್ಯ ಪ್ರದೇಶ ಕುರುಬರ ಸಂಘದ ನಿರ್ದೇಶಕಿ ಕೆ.ಎನ್.ಸರಸ್ವತಿ, ಶೆಫರ್ಡ್ ಇಂಡಿಯಾ ಇಂಟರ್ ನ್ಯಾಷನಲ್ ಕೋಲಾರ ತಾಲ್ಲೂಕು ಘಟಕದ ಅಧ್ಯಕ್ಷ ವಿ.ಶ್ರೀನಿವಾಸ್, ಶ್ರೀನಿವಾಸಪುರ ತಾಲ್ಲೂಕು ಘಟಕದ ಅಧ್ಯಕ್ಷ ಎಂ.ರೆಡ್ಡಪ್ಪ, ಬಂಗಾರಪೇಟೆ ತಾಲ್ಲೂಕು ಘಟಕದ ಅಧ್ಯಕ್ಷ ಕೆ.ಎಂ.ಮಂಜುನಾಥ್, ಮುಳಬಾಗಿಲು ತಾಲ್ಲೂಕು ಘಟಕದ ಅಧ್ಯಕ್ಷ ಶಿವಣ್ಣ, ಕೆಜಿಎಫ್‌ ತಾಲ್ಲೂಕು ಘಟಕದ ಅಧ್ಯಕ್ಷ ಬಾಬು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.