ADVERTISEMENT

ಜಿಲ್ಲೆ ತ್ರಿಭಾಷಾ ಸಂಗಮ: ಡಿ.ಸಿ

​ಪ್ರಜಾವಾಣಿ ವಾರ್ತೆ
Published 30 ನವೆಂಬರ್ 2020, 16:03 IST
Last Updated 30 ನವೆಂಬರ್ 2020, 16:03 IST
ಕೋಲಾರದಲ್ಲಿ ಸೋಮವಾರ ನಡೆದ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಿ ಪುರಸ್ಕರಿಸಲಾಯಿತು.
ಕೋಲಾರದಲ್ಲಿ ಸೋಮವಾರ ನಡೆದ ಸಮಾರಂಭದಲ್ಲಿ ವಿವಿಧ ಕ್ಷೇತ್ರಗಳ ಸಾಧಕರಿಗೆ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಮಾಡಿ ಪುರಸ್ಕರಿಸಲಾಯಿತು.   

ಕೋಲಾರ: ‘ಮಾತೃ ಭಾಷೆಯಲ್ಲಿ ಮಾತ್ರ ಭಾವನೆಗಳು ನೈಜವಾಗಿ ವ್ಯಕ್ತವಾಗುತ್ತವೆ. ಇತರೆ ಭಾಷೆಗಳಲ್ಲಿ ಮಾತನಾಡುವುದು ಕೃತಕವಾಗಿರುತ್ತದೆ’ ಎಂದು ಜಿಲ್ಲಾಧಿಕಾರಿ ಸಿ.ಸತ್ಯಭಾಮ ಅಭಿಪ್ರಾಯಪಟ್ಟರು.

ಇಲ್ಲಿ ಸೋಮವಾರ ನಡೆದ ಜಿಲ್ಲಾ ಮಟ್ಟದ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಮಾತನಾಡಿ, ‘ಗಡಿ ಜಿಲ್ಲೆ ಕೋಲಾರದಲ್ಲಿ ಕನ್ನಡ, ತೆಲುಗು, ತಮಿಳು ಭಾಷೆ ಮಾತನಾಡುವವರಿದ್ದಾರೆ. ಜಿಲ್ಲೆಯು ತ್ರಿಭಾಷಾ ಸಂಗಮವಾಗಿದೆ. ಆದರೆ, ಭಾಷೆ ವಿಚಾರದಲ್ಲಿ ಬೇಧ ಭಾವವಿಲ್ಲ. ಎಲ್ಲಾ ಭಾಷಿಕರು ಅನ್ಯೋನ್ಯತೆಯಿಂದ ಬಾಳುತ್ತಿದ್ದಾರೆ’ ಎಂದು ಹೇಳಿದರು.

‘ದೇಶದ ಇತರೆ ಭಾಷೆಗಳಂತೆ ಕನ್ನಡ ಭಾಷೆಯು ಭವ್ಯ ಇತಿಹಾಸ ಮತ್ತು ಶ್ರೀಮಂತ ಸಾಹಿತ್ಯ ಹೊಂದಿದೆ. ಕನ್ನಡ ಸಾಹಿತ್ಯಕ್ಕೆ 8 ಜ್ಞಾನಪೀಠ ಪ್ರಶಸ್ತಿ ಬಂದಿರುವುದು ಹೆಮ್ಮೆಯ ವಿಚಾರ. ಜನರ ಆಡು ಭಾಷೆ ಯಾವುದೇ ಆಗಿರಲಿ, ಕನ್ನಡ ಕಲಿಕೆ ಕಡ್ಡಾಯವಾಗಬೇಕು. ಕನ್ನಡವೇ ಉಸಿರು, ಕನ್ನಡವೇ ಹಸಿರು. ಕನ್ನಡ ಭಾಷೆ ಬಗ್ಗೆ ಕೀಳರಿಮೆ ಬೇಡ’ ಎಂದು ಕಿವಿಮಾತು ಹೇಳಿದರು.

ADVERTISEMENT

‘ಕರ್ನಾಟಕವು ಸರ್ವ ಜನಾಂಗದ ಶಾಂತಿಯ ತೋಟ. ಕನ್ನಡಿಗರು ಸಹಬಾಳ್ವೆಯಿಂದ ಬದುಕು ಕಟ್ಟಿಕೊಳ್ಳಬೇಕು. ಶಾಂತಿ, ಸಹನೆ, ತಾಳ್ಮೆ, ಸಹೋದರತೆಯ ಜತೆಗೆ ಬದುಕಬೇಕು. ಸರ್ಕಾರಿ ಶಾಲೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಓದಿದ ಸಾಕಷ್ಟು ಮಂದಿ ಉನ್ನತ ಹುದ್ದೆಯಲ್ಲಿದ್ದಾರೆ. ಕನ್ನಡದಲ್ಲಿ ಓದಿದವರಿಗೆ ಹೆಚ್ಚು ಉದ್ಯೋಗಾವಕಾಶ ಸಹ ಸಿಗುತ್ತಿವೆ’ ಎಂದು ತಿಳಿಸಿದರು.

ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ 21 ಮಂದಿಗೆ ಪ್ರಶಸ್ತಿ ನೀಡಿ ಪುರಸ್ಕರಿಸಲಾಯಿತು. ಹೆಚ್ಚುವರಿ ಜಿಲ್ಲಾಧಿಕಾರಿ ಸ್ನೇಹಾ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ನಾಗನಾಂದ ಕೆಂಪರಾಜ್, ಜಿಲ್ಲಾ ಭುವನೇಶ್ವರಿ ಕನ್ನಡ ಸಂಘದ ಅಧ್ಯಕ್ಷ ಕೆ.ಆರ್‌.ತ್ಯಾಗರಾಜ್, ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ವಿ.ಮುನಿರಾಜು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಡಿ.ಎಂ.ರವಿಕುಮಾರ್, ನಗರಸಭೆ ಆಯುಕ್ತ ಶ್ರೀಕಾಂತ್ ಪಾಲ್ಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.