ADVERTISEMENT

ಮುಸ್ಲಿಂ ಸಮುದಾಯ ಮುಖ್ಯವಾಹಿನಿಗೆ ಬರಲಿ

ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ನಾಗೇಶ್‌ ಹೇಳಿಕೆ

​ಪ್ರಜಾವಾಣಿ ವಾರ್ತೆ
Published 29 ನವೆಂಬರ್ 2020, 15:18 IST
Last Updated 29 ನವೆಂಬರ್ 2020, 15:18 IST
ಕೋಲಾರದಲ್ಲಿ ಭಾನುವಾರ ನಡೆದ ಮೌಲಾನಾ ಆಜಾದ್ ಭವನದ ನೂತನ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ನಾಗೇಶ್‌ ಮಾತನಾಡಿದರು.
ಕೋಲಾರದಲ್ಲಿ ಭಾನುವಾರ ನಡೆದ ಮೌಲಾನಾ ಆಜಾದ್ ಭವನದ ನೂತನ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ನಾಗೇಶ್‌ ಮಾತನಾಡಿದರು.   

ಕೋಲಾರ: ‘ಅಲ್ಪಸಂಖ್ಯಾತ ಮುಸ್ಲಿಂ ಸಮುದಾಯವರು ಸರ್ಕಾರದ ಸವಲತ್ತುಗಳನ್ನು ಸದ್ಬಳಕೆ ಮಾಡಿಕೊಂಡು ಸಮಾಜದ ಮುಖ್ಯವಾಹಿನಿಗೆ ಬರಬೇಕು’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎಚ್‌.ನಾಗೇಶ್‌ ಆಶಿಸಿದರು.

ಇಲ್ಲಿ ಭಾನುವಾರ ಮೌಲಾನಾ ಆಜಾದ್ ಭವನದ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿ, ‘ಅಲ್ಪಸಂಖ್ಯಾತ ಸಮುದಾಯದಲ್ಲಿ ಹೆಚ್ಚಿನವರು ಆರ್ಥಿಕವಾಗಿ ಹಿಂದುಳಿದಿದ್ದಾರೆ. ಸಮುದಾಯದ ಅಭಿವೃದ್ಧಿಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹಲವು ಯೋಜನೆ ರೂಪಿಸಿವೆ’ ಎಂದು ಹೇಳಿದರು.

‘ಜಿಲ್ಲಾ ನಿರ್ಮಿತಿ ಕೇಂದ್ರವು ಸುಮಾರು ₹ 1 ಕೋಟಿ ವೆಚ್ಚದಲ್ಲಿ ಮೌಲಾನಾ ಆಜಾದ್‌ ಭವನ ನಿರ್ಮಿಸಿದೆ. ಕೋವಿಡ್‌ ಹಾಗೂ ಲಾಕ್‌ಡೌನ್‌ ಕಾರಣಕ್ಕೆ ಭವನದ ಉದ್ಘಾಟನೆ ಸ್ವಲ್ಪ ವಿಳಂಬವಾಯಿತು. ಮೊರಾರ್ಜಿ ದೇಸಾಯಿ, ಕಿತ್ತೂರು ರಾಣಿ ಚನ್ನಮ್ಮ ಮತ್ತು ಇತರೆ ವಸತಿ ಶಾಲೆಗಳಲ್ಲಿ ಊಟ, ಹಾಸಿಗೆ, ಮೈದಾನ ಸೇರಿದಂತೆ ಸಕಲ ಸೌಲಭ್ಯಗಳಿವೆ. ಗ್ರಾಮೀಣ ಭಾಗದ ಮಕ್ಕಳಿಗೆ ಈ ಶಾಲೆಗಳಲ್ಲಿ ಉತ್ತಮ ಶಿಕ್ಷಣ ಸಿಗುತ್ತಿದೆ’ ಎಂದರು.

ADVERTISEMENT

‘ಅಲ್ಪಸಂಖ್ಯಾತ ಸಮುದಾಯದವರು ಬಡತನದ ಕಾರಣಕ್ಕೆ ಮಕ್ಕಳನ್ನು ಶಾಲೆ ಬಿಡಿಸಿ ಕೆಲಸಕ್ಕೆ ಕಳುಹಿಸುತ್ತಾರೆ. ಹೀಗಾಗಿ ಸಮುದಾಯದ ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ’ ಎಂದು ಶಾಸಕ ಕೆ.ಶ್ರೀನಿವಾಸಗೌಡ ಕಳವಳ ವ್ಯಕ್ತಪಡಿಸಿದರು.

‘ಮುಸ್ಲಿಂ ಸಮುದಾಯವು ಶೈಕ್ಷಣಿಕವಾಗಿ ತುಂಬಾ ಹಿಂದುಳಿದಿದೆ. ಸಮುದಾಯದ ಅನಕ್ಷರತೆ ಪ್ರಮಾಣ ಹೆಚ್ಚಿದೆ. ಆದರೆ, ಬೇರೆ ಸಮುದಾಯಗಳ ಸಾಕ್ಷರತೆ ಪ್ರಮಾಣ ಹೆಚ್ಚಿದೆ. ಶಿಕ್ಷಣದಿಂದ ಮಾತ್ರ ಸಾಮಾಜಿಕ ಬದಲಾವಣೆ ಸಾಧ್ಯ. ಸಮುದಾಯದವರು ಈ ಸತ್ಯ ಅರಿತು ಮಕ್ಕಳನ್ನು ಸುಶಿಕ್ಷಿತರಾಗಿ ಮಾಡಬೇಕು’ ಎಂದು ಕಿವಿಮಾತು ಹೇಳಿದರು.

‘ಎಲ್ಲಾ ಜಾತಿ, ಸಮುದಾಯಗಳಲ್ಲೂ ಬಡತನವಿದೆ. ಹಣವಿಲ್ಲವೆಂಬ ಕಾರಣಕ್ಕೆ ಮಕ್ಕಳನ್ನು ಶಾಲೆ ಬಿಡಿಸಬಾರದು. ಸರ್ಕಾರವೇ ಮಕ್ಕಳಿಗೆ ಉಚಿತ ಶಿಕ್ಷಣ ನೀಡುತ್ತಿದೆ. ಸಮುದಾಯದವರು ಇದರ ಸದುಪಯೋಗ ಪಡೆಯಬೇಕು’ ಎಂದು ಸಲಹೆ ನೀಡಿದರು.

ಪೋಷಕರ ಕರ್ತವ್ಯ: ‘ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಿಂದ ವ್ಯವಸ್ಥಿತವಾಗಿ, ಶಿಸ್ತುಬದ್ಧವಾಗಿ ನಡೆಯುತ್ತಿರುವ ವಸತಿ ಶಾಲೆಗಳಿಗೆ ಮಕ್ಕಳನ್ನು ದಾಖಲು ಮಾಡಿಸಿ ಶಿಕ್ಷಣ ಕೊಡಿಸಬೇಕು. ಇದು ಮುಸ್ಲಿಂ ಸಮುದಾಯದ ಪೋಷಕರ ಕರ್ತವ್ಯವಾಗಬೇಕು’ ಎಂದು ವಿಧಾನ ಪರಿಷತ್ ಸದಸ್ಯ ಗೋವಿಂದರಾಜು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಸದಸ್ಯ ಶಾಹಿದ್, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಂ.ಆರ್.ರವಿಕುಮಾರ್, ಜಿಲ್ಲಾ ವಕ್ಫ್ ಬೋರ್ಡ್ ಅಧ್ಯಕ್ಷ ಜಮೀನ್ ಉಲ್ಲಾ, ಕೋಲಾರ ನಗರಾಭಿವೃದ್ಧಿ ಪಾಧಿಕಾರದ ಅಧ್ಯಕ್ಷ ಓಂಶಕ್ತಿ ಚಲಪತಿ, ಸದಸ್ಯರಾದ ನಾರಾಯಣಸ್ವಾಮಿ, ಮಮತಾ, ನಗರಸಭೆ ಸದಸ್ಯೆ ಶ್ವೇತಾ, ತಹಶೀಲ್ದಾರ್ ಶೋಭಿತಾ, ಜಿಲ್ಲಾ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ನಾರಾಯಣಗೌಡ ಪಾಲ್ಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.