ADVERTISEMENT

ಕುಟುಂಬ ರಕ್ಷಣೆಗೆ ಜೀವ ವಿಮೆ ಮುಖ್ಯ

​ಪ್ರಜಾವಾಣಿ ವಾರ್ತೆ
Published 5 ಮಾರ್ಚ್ 2019, 15:50 IST
Last Updated 5 ಮಾರ್ಚ್ 2019, 15:50 IST
ಕೋಲಾರದಲ್ಲಿ ಮಂಗಳವಾರ ನಡೆದ ಪ್ರಧಾನಮಂತ್ರಿ ಶ್ರಮಯೋಗಿ ಮಾನಧನ ಯೋಜನೆ ಉದ್ಘಾಟನಾ ಸಮಾರಂಭದಲ್ಲಿ ಸಂಸದ ಕೆ.ಎಚ್.ಮುನಿಯಪ್ಪ ಅಸಂಘಟಿತ ಕಾರ್ಮಿಕರಿಗೆ ಗುರುತಿನ ಚೀಟಿ ವಿತರಿಸಿದರು.
ಕೋಲಾರದಲ್ಲಿ ಮಂಗಳವಾರ ನಡೆದ ಪ್ರಧಾನಮಂತ್ರಿ ಶ್ರಮಯೋಗಿ ಮಾನಧನ ಯೋಜನೆ ಉದ್ಘಾಟನಾ ಸಮಾರಂಭದಲ್ಲಿ ಸಂಸದ ಕೆ.ಎಚ್.ಮುನಿಯಪ್ಪ ಅಸಂಘಟಿತ ಕಾರ್ಮಿಕರಿಗೆ ಗುರುತಿನ ಚೀಟಿ ವಿತರಿಸಿದರು.   

ಕೋಲಾರ: ‘ಕಾರ್ಮಿಕರು ನಿವೃತ್ತಿಯಾದ ನಂತರ ಜೀವನ ರೂಪಿಸಿಕೊಳ್ಳಲು ಸರ್ಕಾರ ಪಿಂಚಣಿ ಯೋಜನೆ ಜಾರಿಗೆ ತಂದಿದ್ದು, ಕಾರ್ಮಿಕರು ಇದರ ಪ್ರಯೋಜನ ಪಡೆಯಬೇಕು ಎಂದು ಸಂಸದ ಕೆ.ಎಚ್.ಮುನಿಯಪ್ಪ ಸಲಹೆ ನೀಡಿದರು.

ಕಾರ್ಮಿಕರ ಭವಿಷ್ಯನಿಧಿ ಸಂಘಟನೆಯು ಇಲ್ಲಿ ಮಂಗಳವಾರ ಆಯೋಜಿಸಿದ್ದ ಪ್ರಧಾನಮಂತ್ರಿ ಶ್ರಮಯೋಗಿ ಮಾನಧನ ಯೋಜನೆ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿ, ‘ದೇಶದ ಎಲ್ಲಾ ವರ್ಗದ ಜನರಿಗಾಗಿ ಈಗಾಗಲೇ ಜೀವ ವಿಮೆ ಸೇವೆ ಎಲ್‍ಐಸಿ ಆರಂಭಿಸಿ ವಿವಿಧ ಸೌಲಭ್ಯ ಕಲ್ಪಿಸಲಾಗಿದೆ’ ಎಂದು ತಿಳಿಸಿದರು.

‘ಯಾವುದೇ ವ್ಯಕ್ತಿಯ ಕುಟುಂಬದ ರಕ್ಷಣೆಗಾಗಿ ಜೀವ ವಿಮೆ ಬಹಳ ಮುಖ್ಯ. ಅಸಂಘಟಿತ ವಲಯದ ಕಾರ್ಮಿಕರು ನೆಮ್ಮದಿಯಾಗಿ ಜೀವನ ನಡೆಸಲು ಭವಿಷ್ಯ ನಿಧಿ ನೀಡಲು ಮುಂದಾಗಿರುವುದು ಶ್ಲಾಘನೀಯ. ಪ್ರತಿಯೊಬ್ಬ ಕಾರ್ಮಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು’ ಎಂದರು.

ADVERTISEMENT

‘ಕೇಂದ್ರದಲ್ಲಿ ಕಾಂಗ್ರೆಸ್‌ ನೇತೃತ್ವದ ಯುಪಿಎ ಸರ್ಕಾರ ಅಧಿಕಾರದಲ್ಲಿದ್ದಾಗ ಕಾರ್ಮಿಕ ಸಚಿವರಾಗಿದ್ದ ಮಲ್ಲಿಕಾರ್ಜುನ ಖರ್ಗೆ ಎಲ್ಲಾ ಕಾರ್ಮಿಕರಿಗೂ ಕಾನೂನುಬದ್ಧವಾಗಿ ನ್ಯಾಯ ಒದಗಿಸಿದರು. ಅಲ್ಲದೇ, ಕಾರ್ಮಿಕರನ್ನು ಸಮಾಜದ ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಹಲವು ಯೋಜನೆ ಜಾರಿಗೊಳಿಸಿದರು. ಆ ಯೋಜನೆಗಳನ್ನೇ ಈಗಿನ ಕೇಂದ್ರ ಸರ್ಕಾರ ಮುಂದುವರಿಸಿದೆ’ ಎಂದು ವಿವರಿಸಿದರು.

ವಿದ್ಯಾರ್ಥಿವೇತನ: ‘ಅಸಂಘಟಿತ ಕಾರ್ಮಿಕರು ಕಾರ್ಮಿಕ ಮಂಡಳಿಯಲ್ಲಿ ಹೆಸರು ನೋಂದಾಸಿದರೆ ಮಕ್ಕಳಿಗೆ ಶಿಕ್ಷಣ ಕೊಡಿಸಲು ವಿದ್ಯಾರ್ಥಿವೇತನ ನೀಡಲಾಗುತ್ತದೆ. ಜತೆಗೆ ವೃದ್ಧಾಪ್ಯ ಪಿಂಚಣಿ, ಆರೋಗ್ಯ ವಿಮೆ ಸೇರಿದಂತೆ ಅನೇಕ ಸೌಕರ್ಯ ಪಡೆಯಬಹುದು’ ಎಂದು ಮಾಹಿತಿ ನೀಡಿದರು.

ಅಸಂಘಟಿತ ಕಾರ್ಮಿಕರಿಗೆ ಸಂಬಂಧಿಸಿದ ವಿವಿಧ ಸೌಲಭ್ಯಗಳ ಬಗ್ಗೆ ಪ್ರಾತ್ಯಕ್ಷಿಕೆ ಮೂಲಕ ಮಾಹಿತಿ ನೀಡಲಾಯಿತು. ಭವಿಷ್ಯ ನಿಧಿ ಆಯುಕ್ತ ರಮಣ್ ಧನಶೇಖರ್, ಸಹಾಯಕ ಆಯುಕ್ತ ಸಂತೋಷ್ ಜೈಸ್ವಾಲ್, ನಿರೀಕ್ಷಣಾ ಅಧಿಕಾರಿ ಎಸ್.ಮಧುರನಾಥ್, ಅಂಘಟಿತ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಗೌರವಾಧ್ಯಕ್ಷ ಕೆ.ವಿ.ಸುರೇಶ್‌ಕುಮಾರ್ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.