ADVERTISEMENT

ಲಾಕ್‌ಡೌನ್‌: ಹಣಕಾಸು ನೆರವಿಗೆ ಒತ್ತಾಯ

ಕೆಲಸದ ಸ್ಥಳದಲ್ಲೇ ಕಟ್ಟಡ ಕಾರ್ಮಿಕರ ಶಾಂತಿಯುತ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 15 ಮೇ 2021, 16:31 IST
Last Updated 15 ಮೇ 2021, 16:31 IST
ಕೋವಿಡ್‌ ಮತ್ತು ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಸಿಲುಕಿರುವ ವಲಸೆ ಕಟ್ಟಡ ಕಾರ್ಮಿಕರ ಕುಟುಂಬಗಳಿಗೆ ಹಣಕಾಸು ನೆರವು ನೀಡುವಂತೆ ಒತ್ತಾಯಿಸಿ ಕಟ್ಟಡ ಕಾರ್ಮಿಕರ ಸಮನ್ವಯ ಸಮಿತಿ ಸದಸ್ಯರು ಕೋಲಾರದಲ್ಲಿ ಶನಿವಾರ ಪ್ರತಿಭಟನೆ ಮಾಡಿದರು.
ಕೋವಿಡ್‌ ಮತ್ತು ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಸಿಲುಕಿರುವ ವಲಸೆ ಕಟ್ಟಡ ಕಾರ್ಮಿಕರ ಕುಟುಂಬಗಳಿಗೆ ಹಣಕಾಸು ನೆರವು ನೀಡುವಂತೆ ಒತ್ತಾಯಿಸಿ ಕಟ್ಟಡ ಕಾರ್ಮಿಕರ ಸಮನ್ವಯ ಸಮಿತಿ ಸದಸ್ಯರು ಕೋಲಾರದಲ್ಲಿ ಶನಿವಾರ ಪ್ರತಿಭಟನೆ ಮಾಡಿದರು.   

ಕೋಲಾರ: ಕೋವಿಡ್‌ ಮತ್ತು ಲಾಕ್‌ಡೌನ್‌ನಿಂದ ಸಂಕಷ್ಟಕ್ಕೆ ಸಿಲುಕಿರುವ ನೋಂದಾಯಿತ ವಲಸೆ ಕಟ್ಟಡ ಕಾರ್ಮಿಕರ ಕುಟುಂಬಗಳಿಗೆ ಹಣಕಾಸು ನೆರವು ಘೋಷಿಸುವಂತೆ ಒತ್ತಾಯಿಸಿ ಕಟ್ಟಡ ಕಾರ್ಮಿಕರ ಸಮನ್ವಯ ಸಮಿತಿ ಸದಸ್ಯರು ಇಲ್ಲಿ ಶನಿವಾರ ಕೆಲಸದ ಸ್ಥಳದಲ್ಲಿ ಮತ್ತು ತಮ್ಮ ಮನೆಗಳ ಮುಂದೆ ಪ್ರತಿಭಟನೆ ಮಾಡಿದರು.

‘ಕೋವಿಡ್‌ 2ನೇ ಅಲೆ ಆತಂಕದ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಲಾಕ್‌ಡೌನ್‌ ಘೋಷಿಸಿದ. ಇದರಿಂದ ಕಟ್ಟಡ ಕಾರ್ಮಿಕರ ಜೀವನ ನಿರ್ವಹಣೆಗೆ ಸಮಸ್ಯೆಯಾಗಿದೆ. ಆದರೆ, ಸರ್ಕಾರ ಕಾರ್ಮಿಕರಿಗೆ ಯಾವುದೇ ನೆರವು ಘೋಷಿಸಿಲ್ಲ’ ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.

‘ಮೊದಲ ಲಾಕ್‌ಡೌನ್‌ನಿಂದ ಕಟ್ಟಡ ನಿರ್ಮಾಣ ಕ್ಷೇತ್ರವು ಚೇತರಿಕೆ ಕಾಣುತ್ತಿತ್ತು. ಇದೀಗ ಕೋವಿಡ್‌ ನಿಯಂತ್ರಣಕ್ಕಾಗಿ ಮತ್ತೊಮ್ಮೆ ಲಾಕ್‌ಡೌನ್‌ ಘೋಷಿಸಿರುವುದರಿಂದ ಕಟ್ಟಡ ನಿರ್ಮಾಣ ಕ್ಷೇತ್ರಕ್ಕೆ ದೊಡ್ಡ ಪೆಟ್ಟು ಬಿದ್ದಿದೆ. ಕಟ್ಟಡ ನಿರ್ಮಾಣ ಕಾಮಗಾರಿಗಳು ಸ್ಥಗಿತಗೊಂಡಿದ್ದು, ಈ ಕೆಲಸವನ್ನೇ ನಂಬಿಕೊಂಡಿದ್ದ ಕಾರ್ಮಿಕರು ನಿರುದ್ಯೋಗಿಗಳಾಗಿದ್ದಾರೆ’ ಎಂದು ಅಳಲು ತೋಡಿಕೊಂಡರು.

ADVERTISEMENT

‘ಕೆಲಸವಿಲ್ಲದೆ ಸಂಪಾದನೆ ಕುಂಠಿತಗೊಂಡಿರುವುದರಿಂದ ಜೀವನ ನಿರ್ವಹಣೆಗೆ ಕಷ್ಟವಾಗಿದೆ. ದುಡಿಮೆ ಇಲ್ಲದ ಕಾರಣ ಕಾರ್ಮಿಕರು ತಮ್ಮ ಊರುಗಳಿಗೆ ಹಿಂದಿರುಗುವ ಪರಿಸ್ಥಿತಿ ಸೃಷ್ಟಿಯಾಗಿದೆ. ಆದರೂ ಸರ್ಕಾರ ಕಟ್ಟಡ ಕಾರ್ಮಿಕರ ಹಿತರಕ್ಷಣೆಗೆ ಕ್ರಮ ಕೈಗೊಳ್ಳುತ್ತಿಲ್ಲ. ಸರ್ಕಾರಕ್ಕೆ ಕಾರ್ಮಿಕರ ಬಗ್ಗೆ ಕಿಂಚಿತ್ತೂ ಕಾಳಜಿಯಿಲ್ಲ’ ಎಂದು ಕಿಡಿಕಾರಿದರು.

ಮತ್ತಷ್ಟು ಕಷ್ಟಕರ: ‘ದೇಶದಲ್ಲಿ ಕೋವಿಡ್‌ 3ನೇ ಅಲೆ ಬರಲಿದೆ ಎಂದು ತಜ್ಞರು ಹೇಳಿದ್ದಾರೆ. ಹೀಗಾಗಿ ಭವಿಷ್ಯದ ದಿನಗಳು ಮತ್ತಷ್ಟು ಕಷ್ಟಕರವಾಗಿರುತ್ತವೆ. ಕಟ್ಟಡ ಕಾರ್ಮಿಕರ ಕಷ್ಟ ಅರಿತು ಮಾಸಿಕ ₹ 10 ಸಾವಿರದಂತೆ ಮೂರು ತಿಂಗಳು ಪರಿಹಾರಧನ ನೀಡಬೇಕು. ಮೊದಲ ಲಾಕ್‌ಡೌನ್‌ ಸಂದರ್ಭದಲ್ಲಿ ಪರಿಹಾರದಿಂದ ವಂಚಿತರಾಗಿರುವ 1 ಲಕ್ಷ ಕಾರ್ಮಿಕರಿಗೆ ಪರಿಹಾರ ನೀಡಬೇಕು’ ಎಂದು ಒತ್ತಾಯಿಸಿದರು.

‘ಕೋವಿಡ್‌ನಿಂದ ಮೃತಪಟ್ಟ ಕಟ್ಟಡ ಕಾರ್ಮಿಕರಿಗೆ ತಲಾ ₹ 10 ಲಕ್ಷ ಪರಿಹಾರ ಕೊಡಬೇಕು. ಕೊರೊನಾ ಸೋಂಕಿತ ಕಟ್ಟಡ ಕಾರ್ಮಿಕರಿಗೆ ಉಚಿತವಾಗಿ ಚಿಕಿತ್ಸೆ ನೀಡಬೇಕು. ಕಾರ್ಮಿಕರಿಗೆ ವಿತರಿಸುವ ಪಡಿತರ ಕಿಟ್‌ ಮತ್ತು ನಿರ್ಮಾಣ ಸಾಮಗ್ರಿಗಳ ಕಿಟ್ ಖರೀದಿಯಲ್ಲಿ ನಡೆದಿರುವ ಅಕ್ರಮದ ಬಗ್ಗೆ ತನಿಖೆ ನಡೆಸಬೇಕು’ ಎಂದು ಮನವಿ ಮಾಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.