ADVERTISEMENT

ಕೋಲಾರ ಜಿಲ್ಲೆಯ ಮಕ್ಕಳಲ್ಲಿ ಅಪೌಷ್ಟಿಕತೆ

​ಪ್ರಜಾವಾಣಿ ವಾರ್ತೆ
Published 14 ಜುಲೈ 2019, 12:34 IST
Last Updated 14 ಜುಲೈ 2019, 12:34 IST
ಕೋಲಾರದಲ್ಲಿ ಭಾನುವಾರ ನಡೆದ ತರಬೇತಿ ಕಾರ್ಯಾಗಾರದಲ್ಲಿ ಮಕ್ಕಳ ಸಂರಕ್ಷಣಾ ಸಂಸ್ಥೆಗಳ ಮುಖ್ಯಸ್ಥರು ಹಾಗೂ ಕ್ಯಾನ್‌ ಸಂಸ್ಥೆ ಪದಾಧಿಕಾರಿಗಳು ಪಾಲ್ಗೊಂಡರು.
ಕೋಲಾರದಲ್ಲಿ ಭಾನುವಾರ ನಡೆದ ತರಬೇತಿ ಕಾರ್ಯಾಗಾರದಲ್ಲಿ ಮಕ್ಕಳ ಸಂರಕ್ಷಣಾ ಸಂಸ್ಥೆಗಳ ಮುಖ್ಯಸ್ಥರು ಹಾಗೂ ಕ್ಯಾನ್‌ ಸಂಸ್ಥೆ ಪದಾಧಿಕಾರಿಗಳು ಪಾಲ್ಗೊಂಡರು.   

ಕೋಲಾರ: ‘ಜಿಲ್ಲೆಯ ಮಕ್ಕಳಲ್ಲಿ ಅಪೌಷ್ಟಿಕತೆ ಹೆಚ್ಚುತ್ತಿದ್ದು, ಈ ಸಮಸ್ಯೆ ನಿವಾರಿಸಬೇಕು’ ಎಂದು ಗ್ರಾಮ ವಿಕಾಸ ಸಂಸ್ಥೆ ನಿರ್ದೇಶಕ ಎಂವಿಎನ್ ರಾವ್ ಸಲಹೆ ನೀಡಿದರು.

ಕಲೆಕ್ಟೀವ್ ಆ್ಯಕ್ಷನ್ ನೆಟ್‍ವರ್ಕ್ (ಕ್ಯಾನ್) ಸಂಸ್ಥೆಯು ಮಕ್ಕಳ ಸಂರಕ್ಷಣಾ ಸಂಸ್ಥೆಗಳ ಮುಖ್ಯಸ್ಥರಿಗೆ ಇಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಕಾರ್ಯಾಗಾರದಲ್ಲಿ ಮಾತನಾಡಿ, ‘ಅಪೌಷ್ಟಿಕತೆ ಸಮಸ್ಯೆಯಿಂದ ಮಕ್ಕಳ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮವಾಗುತ್ತಿದೆ. ಮಕ್ಕಳ ದೈಹಿಕ ಮತ್ತು ಮಾನಸಿಕ ಬೆಳವಣಿಗೆ ಕುಂಠಿತಗೊಳ್ಳುತ್ತಿದೆ’ ಎಂದು ಕಳವಳ ವ್ಯಕ್ತಪಡಿಸಿದರು.

‘ರಾಜ್ಯ ಸರ್ಕಾರವು ಮಕ್ಕಳ ಆರೋಗ್ಯದ ಸಂಬಂಧ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸಬೇಕೆಂದು ಹೊಸ ಆದೇಶ ಹೊರಡಿಸಿದೆ. ಗ್ರಾಮ ಪಂಚಾಯಿತಿ ಅಧ್ಯಕ್ಷರು, ಅಭಿವೃದ್ಧಿ ಅಧಿಕಾರಿಗಳು (ಪಿಡಿಒ) ಮತ್ತು ಸ್ಥಾಯಿ ಸಮಿತಿ ಅಧ್ಯಕ್ಷರಿಗೆ ಜಿಲ್ಲಾ ಮಟ್ಟದಲ್ಲಿ ಕಾರ್ಯಾಗಾರದಲ್ಲಿ ಪಾಲ್ಗೊಂಡು ತರಬೇತಿ ಪಡೆಯಬೇಕು’ ಎಂದರು.

ADVERTISEMENT

‘ಮಕ್ಕಳಲ್ಲಿನ ಅಪೌಷ್ಟಿಕತೆ ಸಮಸ್ಯೆ ನಿವಾರಣೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು. ಮಕ್ಕಳ ಸ್ನೇಹಿ ಜಿಲ್ಲೆ ರೂಪಿಸಬೇಕು. ಮಕ್ಕಳ ಕಲಾಗ್ರಾಮ ನಿರ್ಮಾಣ ಮಾಡಬೇಕು. ಮಕ್ಕಳು ಮತ್ತು ರೈತರನ್ನು ಒಳಗೊಂಡ ಕಾರ್ಯಕ್ರಮವನ್ನು ಕ್ರಿಯಾ ಯೋಜನೆಯಲ್ಲಿ ಸೇರಿಸಬೇಕು’ ಎಂದು ಸಂಸ್ಥೆ ಮುಖ್ಯಸ್ಥ ರಾಮಕೃಷ್ಣೇಗೌಡ ಸೂಚಿಸಿದರು.

ಸಮಸ್ಯೆಯಾಗಿದೆ: ‘ಜಿಲ್ಲೆಯಲ್ಲಿ ಮಕ್ಕಳ ಸಂರಕ್ಷಣಾ ಕೇಂದ್ರಗಳು ಪರಿಣಾಮಕಾರಿಯಾಗಿ ಕಾರ್ಯ ನಿರ್ವಹಿಸುತ್ತಿದ್ದರೂ ಸಮರ್ಪಕ ದಾಖಲಾತಿ ನಿರ್ವಹಣೆ ಕೊರತೆಯಿಂದ ಸಮಸ್ಯೆಯಾಗಿದೆ. ಮಕ್ಕಳು ಮತ್ತು ಮಹಿಳೆಯರ ಮೇಲೆ ದೌರ್ಜನ್ಯ ನಡೆದಾಗ ಸ್ವಯಂ ಸೇವಾ ಸಂಸ್ಥೆಗಳು ಸಮಗ್ರ ಮಾಹಿತಿ ನೀಡಬೇಕು. ಮಕ್ಕಳ ಕಲ್ಯಾಣ ಸಮಿತಿ ಸೇವೆಯನ್ನು ಉಚಿತವಾಗಿ ಬಳಸಿಕೊಳ್ಳಲಿದೆ’ ಎಂದು ಹೇಳಿದರು.

ಸಭೆಯಲ್ಲಿ ಸಂಸ್ಥೆಯ ನೂತನ ಪದಾಧಿಕಾರಿಗಳನ್ನು ಮಾಡಲಾಯಿತು. ಅಧ್ಯಕ್ಷರಾಗಿ ಟಿ.ನಾರಾಯಣಸ್ವಾಮಿ, ಉಪಾಧ್ಯಕ್ಷರಾಗಿ ಮಲ್ಲಮ್ಮ, ಕಾರ್ಯದರ್ಶಿಯಾಗಿ ಚೌಡಪ್ಪ, ಖಜಾಂಚಿಯಾಗಿ ಶಿಲ್ಪಾ, ಆಡಳಿತ ಮಂಡಳಿ ಸದಸ್ಯರಾಗಿ ಮಹೇಶ್‌ರಾವ್ ಕದಂ, ಶಂಕರ್, ಆಶಾ, ರಾಜಣ್ಣ ಆಯ್ಕೆಯಾದರು. ಸಂಸ್ಥೆಯ ವಾರ್ಷಿಕ ವರದಿ ಮಂಡಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.