ಕೋಲಾರ: ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಬುಧವಾರ ಬೆಂಗಳೂರಿನ ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಾವಿಗೆ ಬೆಂಬಲ ಬೆಲೆ ವಿಚಾರ ಪ್ರಸ್ತಾಪವಾಯಿತಾದರೂ ಅಂತಿಮ ನಿರ್ಧಾರವಾಗಿಲ್ಲ.
ಮಾವು ಬೆಳೆಗಾರರಿಗೆ ಹೆಚ್ಚಿನ ಪರಿಹಾರ ಒದಗಿಸುವಂತೆ ಒತ್ತಾಯಿಸಲು ಕೇಂದ್ರ ಕೃಷಿ ಸಚಿವರನ್ನು ಭೇಟಿ ಮಾಡಲು ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಮತ್ತು ಸರ್ಕಾರದ ಮುಖ್ಯಕಾರ್ಯದರ್ಶಿ ಶಾಲಿನಿ ರಜನೀಶ್ ಅವರಿಗೆ ಸಿದ್ದರಾಮಯ್ಯ ಸೂಚಿಸಿದ್ದಾರೆ. ಕೆಲವೇ ದಿನಗಳಲ್ಲಿ ಬೆಂಬಲ ಬೆಲೆ ಘೋಷಣೆ ಆಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಮಾವು ಬೆಳೆಗಾರರ ಸಂಕಷ್ಟದ ಬಗ್ಗೆ ಚರ್ಚೆ ನಡೆದಿದ್ದು, ಆಂಧ್ರದ ಚಿತ್ತೂರು ಭಾಗದಲ್ಲಿ ರಾಜ್ಯದ ಮಾವಿನ ಹಣ್ಣುಗಳ ಪ್ರವೇಶಕ್ಕೆ ಅವಕಾಶ ನೀಡದ ವಿಚಾರವನ್ನು ಸಚಿವ ಕೆ.ಎಚ್.ಮುನಿಯಪ್ಪ ಪ್ರಸ್ತಾಪಿಸಿದ್ದಾರೆ.
ಸಚಿವ ಸಂಪುಟದಲ್ಲಿ ಬೆಂಬಲ ಬೆಲೆ ಘೋಷಣೆ ಆಗಬಹುದೆಂದು ಜಿಲ್ಲೆಯ ಮಾವು ಬೆಳೆಗಾರರು, ವ್ಯಾಪಾರಿಗಳು ಹಾಗೂ ರೈತ ಮುಖಂಡರು ಭಾವಿಸಿದ್ದರು.
ಮಾವಿನ ಧಾರಣೆ ಕುಸಿದು ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದು, ಬೆಂಬಲ ಬೆಲೆಗಾಗಿ ಕಳೆದ 17 ದಿನಗಳಿಂದ ಬೆಳಗಾರರು, ಮುಖಂಡರು, ರೈತ ಮುಖಂಡರು ಆಗ್ರಹಿಸುತ್ತಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ ಮಾಜಿ ಸಚಿವ ಕೆ.ಆರ್.ರಮೇಶ್ ಕುಮಾರ್, ಮುಖ್ಯಮಂತ್ರಿ ಭೇಟಿ ಮಾಡಿ ಬೆಂಬಲ ಬೆಲೆಗೆ ಆಗ್ರಹಿಸಿದ್ದರು. ಜೆಡಿಎಸ್ ಶಾಸಕರಾದ ಜಿ.ಕೆ.ವೆಂಕಟಶಿವಾರೆಡ್ಡಿ, ಸಮೃದ್ಧಿ ಮಂಜುನಾಥ್ ವಿಧಾನಸೌಧ ಆವರಣದಲ್ಲಿನ ಗಾಂಧಿ ಪ್ರತಿಮೆ ಎದುರು ಧರಣಿ ನಡೆಸಿದ್ದರು. ಮಾವು ಬೆಳೆಗಾರರ ಕ್ಷೇಮಾಭಿವೃದ್ಧಿ ಸಂಗದ ಜಿಲ್ಲಾ ಅಧ್ಯಕ್ಷ ನೀಲಟೂರು ಚಿನ್ನಪ್ಪರೆಡ್ಡಿ ನೇತೃತ್ವದಲ್ಲಿ ಶ್ರೀನಿವಾಸಪುರ ತಾಲ್ಲೂಕು ಬಂದ್ ಮಾಡಿ ಪ್ರತಿಭಟನೆ ನಡೆಸಲಾಗಿತ್ತು.
ಪಕ್ಕದ ಆಂಧ್ರ ಪ್ರದೇಶ ಸರ್ಕಾರದ ಮಾದರಿಯಲ್ಲಿ ಮಾವಿಗೆ ಬೆಂಬಲ ಬೆಲೆ ಘೋಷಿಸುವಂತೆ ಪಟ್ಟು ಹಿಡಿದಿದ್ದಾರೆ. ಬೆಲೆ ಇಲ್ಲದೆ ತೋತಾಪುರಿ ಮಾವಿನ ಕಾಯಿಗಳನ್ನು ಕಟಾವು ಮಾಡದೆ ತೋಟದಲ್ಲೇ ಬಿಟ್ಟಿದ್ದು, ಕೊಳೆಯುವ ಹಂತ ತಲುಪಿವೆ ಎಂದು ರೈತರು ದೂರಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.