ADVERTISEMENT

ನಗರಸಭೆ ಚುನಾವಣೆ: ನಾಮಪತ್ರ ಸಲ್ಲಿಕೆಗೆ ತೆರೆ

ರಂಗೇರಿದ ಚುನಾವಣಾ ಕಣ: ಬಂಡಾಯ ಅಭ್ಯರ್ಥಿಗಳ ಮನವೊಲಿಕೆ ಕಸರತ್ತು

ಜೆ.ಆರ್.ಗಿರೀಶ್
Published 1 ನವೆಂಬರ್ 2019, 11:01 IST
Last Updated 1 ನವೆಂಬರ್ 2019, 11:01 IST
ಜೆಡಿಎಸ್‌ ಅಭ್ಯರ್ಥಿಗಳು ಕೋಲಾರ ನಗರಸಭೆ ಚುನಾವಣೆಗೆ ಗುರುವಾರ ನಾಮಪತ್ರ ಸಲ್ಲಿಸಲು ಪಕ್ಷದ ಕಾರ್ಯಕರ್ತರು ಹಾಗೂ ಬೆಂಬಲಿಗರೊಂದಿಗೆ ಮೆರವಣಿಗೆಯಲ್ಲಿ ಬಂದರು.
ಜೆಡಿಎಸ್‌ ಅಭ್ಯರ್ಥಿಗಳು ಕೋಲಾರ ನಗರಸಭೆ ಚುನಾವಣೆಗೆ ಗುರುವಾರ ನಾಮಪತ್ರ ಸಲ್ಲಿಸಲು ಪಕ್ಷದ ಕಾರ್ಯಕರ್ತರು ಹಾಗೂ ಬೆಂಬಲಿಗರೊಂದಿಗೆ ಮೆರವಣಿಗೆಯಲ್ಲಿ ಬಂದರು.   

ಕೋಲಾರ: ಜಿಲ್ಲೆಯ 3 ನಗರಸಭೆ ಚುನಾವಣೆಗೆ ನಾಮಪತ್ರ ಸಲ್ಲಿಸುವ ಪ್ರಕ್ರಿಯೆಗೆ ಗುರುವಾರ ತೆರೆಬಿದ್ದಿದ್ದು, ಚುನಾವಣಾ ಕಣ ರಂಗೇರಿದೆ. ವಿವಿಧ ರಾಜಕೀಯ ಪಕ್ಷಗಳ ಅಭ್ಯರ್ಥಿಗಳು ಹಾಗೂ ಪಕ್ಷೇತರರು ಸೇರಿದಂತೆ ಸುಮಾರು 800 ಮಂದಿ ಉಮೇದುವಾರಿಕೆ ಸಲ್ಲಿಸಿದ್ದಾರೆ.

ರಾಜ್ಯ ಚುನಾವಣಾ ಆಯೋಗವು ಜಿಲ್ಲೆಯ ಕೋಲಾರ, ಮುಳಬಾಗಿಲು ಹಾಗೂ ಕೆಜಿಎಫ್‌ (ರಾಬರ್ಟ್‌ಸನ್‌ಪೇಟೆ) ನಗರಸಭೆಗೆ ಅ.20ರಂದು ಚುನಾವಣಾ ಅಧಿಸೂಚನೆ ಹೊರಡಿಸಿತ್ತು. ಆರಂಭದಲ್ಲಿ ಹೆಚ್ಚಿನ ನಾಮಪತ್ರ ಸಲ್ಲಿಕೆಯಾಗಿರಲಿಲ್ಲ. ಆದರೆ, ಸೋಮವಾರದಿಂದ (ಅ.28) ಉಮೇದುವಾರಿಕೆ ಸಲ್ಲಿಕೆ ಪ್ರಕ್ರಿಯೆ ಚುರುಕುಗೊಂಡಿತು.

ನಾಮಪತ್ರ ಸಲ್ಲಿಕೆಯ ಕಡೆಯ ದಿನವಾದ ಗುರುವಾರ ಅಭ್ಯರ್ಥಿಗಳು ಉಮೇದುವಾರಿಕೆ ಸಲ್ಲಿಕೆಗೆ ಹೆಚ್ಚಿನ ಉತ್ಸಾಹ ತೋರಿದರು. 3 ನಗರಸಭೆಗಳಿಗೆ ಒಂದೇ ದಿನ ಸುಮಾರು 550 ನಾಮಪತ್ರ ಸಲ್ಲಿಕೆಯಾದವು. ರಾಜಕೀಯ ಪಕ್ಷಗಳ ಅಭ್ಯರ್ಥಿಗಳಿಗಿಂತ ಪಕ್ಷೇತರರು ಹೆಚ್ಚಿನ ಸಂಖ್ಯೆಯಲ್ಲಿ ಉಮೇದುವಾರಿಕೆ ಸಲ್ಲಿಸಿದರು. ಚುನಾವಣಾಧಿಕಾರಿಗಳ ಕಚೇರಿ ಮುಂದೆ ಅಭ್ಯರ್ಥಿಗಳು ಬೆಳಿಗ್ಗೆಯಿಂದಲೇ ಸಾಲುಗಟ್ಟಿ ನಿಂತಿದ್ದರು.

ADVERTISEMENT

ರೋಡ್‌ ಶೋ: ಬಿಜೆಪಿ ಮತ್ತು ಜೆಡಿಎಸ್‌ ಅಭ್ಯರ್ಥಿಗಳು ಬೆಂಬಲಿಗರು ಹಾಗೂ ಕಾರ್ಯಕರ್ತರೊಂದಿಗೆ ನಾಮಪತ್ರ ಸಲ್ಲಿಕೆಗೂ ಮುನ್ನ ರೋಡ್‌ ಶೋ ನಡೆಸಿದರು. ಕಾರ್ಯಕರ್ತರು ರೋಡ್‌ ಶೋ ಉದ್ದಕ್ಕೂ ತಮ್ಮ ಪಕ್ಷ ಮತ್ತು ಅಭ್ಯರ್ಥಿಗಳ ಪರ ಜೈಕಾರ ಕೂಗಿದರು. ಅಲ್ಲದೇ, ಅಭ್ಯರ್ಥಿಗಳನ್ನು ಹೆಗಲ ಮೇಲೆ ಹೊತ್ತು ಹೆಜ್ಜೆ ಹಾಕಿದರು.

ಹಲವು ಅಭ್ಯರ್ಥಿಗಳು ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಿದರು. ಮತ್ತೆ ಕೆಲವರು ಪ್ರಾರ್ಥನಾ ಮಂದಿರಗಳಲ್ಲಿ ಪ್ರಾರ್ಥನೆ ಸಲ್ಲಿಸಿದರು. ಮುನ್ನೆಚ್ಚರಿಕೆ ಕ್ರಮವಾಗಿ ಚುನಾವಣಾಧಿಕಾರಿಗಳ ಕಚೇರಿ ಸುತ್ತಮುತ್ತ ನಿಷೇಧಾಜ್ಞೆ ಜಾರಿಗೊಳಿಸಿ ಬ್ಯಾರಿಕೇಡ್‌ ಹಾಕಲಾಗಿತ್ತು. ಜತೆಗೆ ಹೆಚ್ಚಿನ ಪೊಲೀಸರನ್ನು ಬಂದೋಬಸ್ತ್‌ಗೆ ನಿಯೋಜಿಸಲಾಗಿತ್ತು. ಕಾರ್ಯಕರ್ತರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸಪಟ್ಟರು.

ಕೆಲ ಅಭ್ಯರ್ಥಿಗಳು ರಾಜಕೀಯ ಪಕ್ಷಗಳಿಂದ ಹಾಗೂ ಪಕ್ಷೇತರರಾಗಿ, ಮತ್ತೆ ಕೆಲವರು ಎರಡು ಸೆಟ್‌ ನಾಮಪತ್ರ ಸಲ್ಲಿಸಿದರು. ಕೋಲಾರ ನಗರಸಭೆಯ 35 ವಾರ್ಡ್‌ಗೆ ಕೊನೆಯ ದಿನ 174, ಮುಳಬಾಗಿಲು ನಗರಸಭೆಯ 31 ವಾರ್ಡ್‌ಗೆ ಸುಮಾರು 200 ಮತ್ತು ಕೆಜಿಎಫ್‌ ನಗರಸಭೆಯ 35 ವಾರ್ಡ್‌ಗೆ 176 ನಾಮಪತ್ರ ಸಲ್ಲಿಕೆಯಾದವು.

ಅಭ್ಯರ್ಥಿಗಳು ಹಾಗೂ ಸೂಚಕರ ಸಮ್ಮುಖದಲ್ಲಿ ಶನಿವಾರ (ನ.2) ನಾಮಪತ್ರ ಪರಿಶೀಲನೆ ಪ್ರಕ್ರಿಯೆ ನಡೆಯಲಿದೆ. ನ.4 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದ್ದು, ಪ್ರಮುಖ ರಾಜಕೀಯ ಪಕ್ಷಗಳಲ್ಲಿನ ಬಂಡಾಯ ಅಭ್ಯರ್ಥಿಗಳ ಮನವೊಲಿಕೆ ಕಸರತ್ತು ಆರಂಭವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.