ADVERTISEMENT

ನರೇಗಾ ಅಕ್ರಮ: ತನಿಖೆಗೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 2 ನವೆಂಬರ್ 2021, 17:03 IST
Last Updated 2 ನವೆಂಬರ್ 2021, 17:03 IST
ನರೇಗಾ ಕಾಮಗಾರಿಗಳಲ್ಲಿ ಅಕ್ರಮ ಎಸಗಿರುವವರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿ ರೈತ ಸಂಘ ಸದಸ್ಯರು ಕೋಲಾರದಲ್ಲಿ ಮಂಗಳವಾರ ಜಿಲ್ಲಾ ಪಂಚಾಯಿತಿ ಎದುರು ಪ್ರತಿಭಟನೆ ಮಾಡಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು
ನರೇಗಾ ಕಾಮಗಾರಿಗಳಲ್ಲಿ ಅಕ್ರಮ ಎಸಗಿರುವವರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿ ರೈತ ಸಂಘ ಸದಸ್ಯರು ಕೋಲಾರದಲ್ಲಿ ಮಂಗಳವಾರ ಜಿಲ್ಲಾ ಪಂಚಾಯಿತಿ ಎದುರು ಪ್ರತಿಭಟನೆ ಮಾಡಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು   

ಕೋಲಾರ: ನರೇಗಾ ಕಾಮಗಾರಿಗಳಲ್ಲಿ ಅಕ್ರಮ ಎಸಗಿರುವವರ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸುವಂತೆ ಒತ್ತಾಯಿಸಿ ರೈತ ಸಂಘ (ಪುಟ್ಟಣ್ಣಯ್ಯ ಬಣ) ಸದಸ್ಯರು ಇಲ್ಲಿ ಮಂಗಳವಾರ ಜಿಲ್ಲಾ ಪಂಚಾಯಿತಿ ಎದುರು ಪ್ರತಿಭಟನೆ ಮಾಡಿದರು.

‘ಜಿಲ್ಲೆಯ ಹಲವು ಗ್ರಾ.ಪಂಗಳ ವ್ಯಾಪ್ತಿಯ ನರೇಗಾ ಕಾಮಗಾರಿಗಳಲ್ಲಿ ಕೋಟ್ಯಂತರ ರೂಪಾಯಿ ಅಕ್ರಮ ನಡೆದಿದೆ. ಗ್ರಾ.ಪಂ ಸದಸ್ಯರು ಹಾಗೂ ಭ್ರಷ್ಟ ಅಧಿಕಾರಿಗಳು ಶಾಮೀಲಾಗಿ ಯಂತ್ರೋಪಕರಣಗಳ ಮೂಲಕ ಕಾಮಗಾರಿ ಮಾಡಿ ಯೋಜನೆಯ ಹಣ ದೋಚಿದ್ದಾರೆ’ ಎಂದು ಪ್ರತಿಭಟನಾಕಾರರು ಆರೋಪಿಸಿದರು.

‘ಕೇಂದ್ರ ಸರ್ಕಾರ ಗ್ರಾಮೀಣ ಜನರಿಗೆ ಉದ್ಯೋಗ ಖಾತ್ರಿ ನೀಡುವ ಉದ್ದೇಶಕ್ಕೆ ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ (ನರೇಗಾ) ಜಾರಿಗೊಳಿಸಿದೆ. ಆದರೆ, ಗ್ರಾ.ಪಂ ಸದಸ್ಯರು ಯೋಜನೆಯ ಮೂಲ ಉದ್ದೇಶಕ್ಕೆ ತಿಲಾಂಜಲಿ ಹಾಡಿ ರಾಜಾರೋಷವಾಗಿ ಯಂತ್ರೋಪಕರಣಗಳಿಂದ ನರೇಗಾ ಕಾಮಗಾರಿಗಳನ್ನು ನಡೆಸುತ್ತಿದ್ದಾರೆ’ ಎಂದು ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಎಂ.ಶ್ರೀನಿವಾಸ್ ದೂರಿದರು.

ADVERTISEMENT

‘ನರೇಗಾ ಜಾಬ್‌ ಕಾರ್ಡ್‌ ಹೊಂದಿರುವ ಕುಟುಂಬಗಳಿಗೆ ಸರ್ಕಾರ 100 ದಿನಗಳ ಕೆಲಸ ಮಿತಿಗೊಳಿಸಿರುವುದು ಖಂಡನೀಯ. ರೈತ ಕುಟುಂಬಗಳಿಗೆ ಜೀವಿತಾವಧಿ ₹ 2.50 ಲಕ್ಷ ನಿಗದಿಪಡಿಸಿ ಯೋಜನೆಯಡಿ ಫಲಾನುಭವಿ ಮತ್ತೆ ಯಾವುದೇ ಸವಲತ್ತು ಪಡೆಯುವಂತಿಲ್ಲ ಎಂದು ನಿಯಮ ಜಾರಿಗೊಳಿಸಿರುವುದು ಸರಿಯಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಅನುದಾನ ಕಡಿತ: ‘ಕೇಂದ್ರ ಅಥವಾ ರಾಜ್ಯ ಸರ್ಕಾರ ಬಡವರಿಗೆ ಮನೆ ಮಂಜೂರು ಮಾಡಿಲ್ಲ. ಕೋವಿಡ್‌ ನೆಪ ಹೇಳಿ ಹಲವು ಯೋಜನೆಗಳ ಅನುದಾನ ಕಡಿತಗೊಳಿಸಲಾಗಿದೆ. ಈ ಹಿಂದೆ ಮಂಜೂರಾಗಿ ನಿರ್ಮಾಣಗೊಂಡಿರುವ ಮನೆಗಳಿಗೂ ಹಣ ಬಿಡುಗಡೆ ಮಾಡಿಲ್ಲ. ಇದರಿಂದ ಮನೆಗಳ ನಿರ್ಮಾಣ ಅರ್ಧಕ್ಕೆ ನಿಂತಿದೆ’ ಎಂದು ಪ್ರತಿಭಟನಾಕಾರರು ಕಿಡಿಕಾರಿದರು.

‘ನರೇಗಾ ಕಾಮಗಾರಿಗಳಲ್ಲಿನ ಅಕ್ರಮದ ಸಂಬಂಧ ಉನ್ನತ ತನಿಖೆ ನಡೆಸಬೇಕು. ಅಕ್ರಮದಲ್ಲಿ ಭಾಗಿಯಾಗಿರುವ ಗ್ರಾ.ಪಂ ಸದಸ್ಯರ ಸದಸ್ಯತ್ವ ರದ್ದುಪಡಿಸಬೇಕು. ಅಕ್ರಮಕ್ಕೆ ಕೈಜೋಡಿಸಿರುವ ಸಿಬ್ಬಂದಿ ವಿರುದ್ಧ ಕ್ರಿಮಿನಲ್‌ ಪ್ರಕರಣ ದಾಖಲಿಸಿ ಸೇವೆಯಿಂದ ಅಮಾನತು ಮಾಡಬೇಕು. ವಸತಿ ಯೋಜನೆಗಳಡಿ ಬಡವರಿಗೆ ಮನೆ ಮಂಜೂರು ಮಾಡಬೇಕು’ ಎಂದು ಒತ್ತಾಯಿಸಿದರು.

ಸಂಘದ ಜಿಲ್ಲಾ ಘಟಕದ ಉಪಾಧ್ಯಕ್ಷ ಫಾರೂಕ್‌ ಪಾಷಾ, ತಾಲ್ಲೂಕು ಘಟಕದ ಅಧ್ಯಕ್ಷ ರವಿ, ಮಹಿಳಾ ಘಟಕದ ಅಧ್ಯಕ್ಷೆ ರತ್ನಮ್ಮ, ಬಂಗಾರಪೇಟೆ ತಾಲ್ಲೂಕು ಘಟಕದ ಅಧ್ಯಕ್ಷ ಅಮರೇಶ್ ಪಾಲ್ಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.