ADVERTISEMENT

ಕೋಲಾರ: ಗೊಂದಲಕ್ಕೆ ಎಡೆಯಿಲ್ಲ; ಡಿಡಿಪಿಐ ಕೃಷ್ಣಮೂರ್ತಿ

​ಪ್ರಜಾವಾಣಿ ವಾರ್ತೆ
Published 19 ಜುಲೈ 2021, 15:31 IST
Last Updated 19 ಜುಲೈ 2021, 15:31 IST
ಕೋಲಾರದ ನೂತನ ಪದವಿ ಪೂರ್ವ ಕಾಲೇಜು ಪರೀಕ್ಷಾ ಕೇಂದ್ರಕ್ಕೆ ಸೋಮವಾರ ಭೇಟಿ ನೀಡಿದ ಡಿಡಿಪಿಐ ಕೃಷ್ಣಮೂರ್ತಿ ಅವರಿಗೆ ಥರ್ಮಲ್‌ ಸ್ಕ್ರೀನಿಂಗ್‌ ನಡೆಸಲಾಯಿತು
ಕೋಲಾರದ ನೂತನ ಪದವಿ ಪೂರ್ವ ಕಾಲೇಜು ಪರೀಕ್ಷಾ ಕೇಂದ್ರಕ್ಕೆ ಸೋಮವಾರ ಭೇಟಿ ನೀಡಿದ ಡಿಡಿಪಿಐ ಕೃಷ್ಣಮೂರ್ತಿ ಅವರಿಗೆ ಥರ್ಮಲ್‌ ಸ್ಕ್ರೀನಿಂಗ್‌ ನಡೆಸಲಾಯಿತು   

ಕೋಲಾರ: ‘ಕೋವಿಡ್ ಆತಂಕದ ನಡುವೆಯೂ ಜಿಲ್ಲೆಯಲ್ಲಿ ಸಾಕಷ್ಟು ಸಿದ್ಧತೆಯೊಂದಿಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಸಲಾಗಿದ್ದು, ಮೊದಲ ದಿನ ಯಾವುದೇ ಪರೀಕ್ಷಾ ಅಕ್ರಮದ ಪ್ರಕರಣ ವರದಿಯಾಗಿಲ್ಲ’ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೃಷ್ಣಮೂರ್ತಿ ತಿಳಿಸಿದರು.

ಜಿಲ್ಲಾ ಕೇಂದ್ರದ ಪರೀಕ್ಷಾ ಕೇಂದ್ರಗಳಲ್ಲಿ ಸೋಮವಾರ ಪರಿಶೀಲನೆ ನಡೆಸಿ ಮಾತನಾಡಿ, ‘ಕೋವಿಡ್‌ ಭೀತಿ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆಗೆ ಒತ್ತು ನೀಡುವ ನಿಟ್ಟಿನಲ್ಲಿ ಸುರಕ್ಷತಾ ಮಾರ್ಗಸೂಚಿ ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ. ಡೆಸ್ಕ್‌ಗೆ ಒಬ್ಬ ವಿದ್ಯಾರ್ಥಿಯಂತೆ ಇದೇ ಮೊದಲ ಬಾರಿಗೆ ವಿಶಿಷ್ಟ ರೀತಿಯಲ್ಲಿ ಪರೀಕ್ಷೆ ನಡೆಸಲಾಗಿದೆ’ ಎಂದರು.

‘ಎಸ್ಸೆಸ್ಸೆಲ್ಸಿ ಪರೀಕ್ಷೆಯ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ಒಎಂಆರ್ ಶೀಟ್‌ ಮೂಲಕ ಒಂದೊಂದು ದಿನಕ್ಕೆ 3 ವಿಷಯಗಳ ಪರೀಕ್ಷೆ ಏಕಕಾಲದಲ್ಲಿ ಪರೀಕ್ಷೆ ನಡೆಸಲಾಗಿದೆ. ಪ್ರತಿ ವಿಷಯಕ್ಕೆ ತಲಾ 40 ಅಂಕದಂತೆ ಒಟ್ಟಾರೆ 120 ಅಂಕಗಳಿಗೆ ಬಹು ಆಯ್ಕೆ ಪ್ರಶ್ನೆಗಳನ್ನು ನೀಡಿ ಪರೀಕ್ಷೆ ಬರೆಸಲಾಗಿದೆ’ ಎಂದು ವಿವರಿಸಿದರು.

ADVERTISEMENT

‘ಪ್ರಶ್ನೆಪತ್ರಿಕೆ ವಿತರಣೆಯಲ್ಲಿ ಯಾವುದೇ ಲೋಪವಾಗದಂತೆ ತಡೆಯಲು ಡಿಡಿಪಿಐ ಕಚೇರಿಯಿಂದ ಪ್ರತಿ ತಾಲ್ಲೂಕು ಖಜಾನೆಗೆ ಒಬ್ಬರು ಅಧಿಕಾರಿಯನ್ನು ಕಳುಹಿಸಿ ಕಟ್ಟೆಚ್ಚರ ವಹಿಸಲಾಯಿತು’ ಎಂದು ಮಾಹಿತಿ ನೀಡಿದರು.

ಜಿಲ್ಲಾ ಕೇಂದ್ರದ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿ ಆರ್.ಸೆಲ್ವಮಣಿ, ಕೋವಿಡ್ ಮಾರ್ಗಸೂಚಿ ಅನುಸರಿಸಿ ಕೈಗೊಂಡಿರುವ ಸಿದ್ಧತೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು. ಪರೀಕ್ಷಾ ನೋಡಲ್ ಅಧಿಕಾರಿ ಎ.ಎನ್.ನಾಗೇಂದ್ರಪ್ರಸಾದ್, ಶಿಕ್ಷಣಾಧಿಕಾರಿ ಸಿ.ಆರ್.ಅಶೋಕ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.