ADVERTISEMENT

ಪ್ರಕೃತಿ ವಿಕೋಪ: ಮುನ್ನೆಚ್ಚರಿಕಾ ಕ್ರಮ ಕೈಗೊಳ್ಳಲು ಸೂಚನೆ

​ಪ್ರಜಾವಾಣಿ ವಾರ್ತೆ
Published 27 ಮೇ 2019, 15:32 IST
Last Updated 27 ಮೇ 2019, 15:32 IST
ಕೋಲಾರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರಕೃತಿ ವಿಕೋಪ ಹಾಗೂ ಬರ ಪರಿಸ್ಥಿತಿ ನಿರ್ವಹಣೆ ಕುರಿತು ಸೋಮವಾರ ನಡೆದ ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ ಜೆ.ಮಂಜುನಾಥ್ ಮಾಡಿದರು.
ಕೋಲಾರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರಕೃತಿ ವಿಕೋಪ ಹಾಗೂ ಬರ ಪರಿಸ್ಥಿತಿ ನಿರ್ವಹಣೆ ಕುರಿತು ಸೋಮವಾರ ನಡೆದ ಅಧಿಕಾರಿಗಳ ಸಭೆಯಲ್ಲಿ ಜಿಲ್ಲಾಧಿಕಾರಿ ಜೆ.ಮಂಜುನಾಥ್ ಮಾಡಿದರು.   

ಕೋಲಾರ: ಜಿಲ್ಲೆಗೆ ಮುಂಗಾರು ಮಳೆ ಪ್ರವೇಶಿಸಿದ್ದು, ಇದರಿಂದ ಆಗಬಹುದಾದ ಅನಾಹುತಗಳನ್ನು ತಪ್ಪಿಸಲು ಸಂಬಂಪಟ್ಟ ಇಲಾಖಾಧಿಕಾರಿಗಳು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಜೆ.ಮಂಜುನಾಥ್ ತಿಳಿಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಪ್ರಕೃತಿ ವಿಕೋಪ ಹಾಗೂ ಬರ ಪರಿಸ್ಥಿತಿ ನಿರ್ವಹಣೆ ಕುರಿತು ಸೋಮವಾರ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿ, ಜಿಲ್ಲೆಯಲ್ಲಿ ಪ್ರಕೃತಿ ವಿಕೋಪ ಕುರಿತಂತೆ ಸಾರ್ವಜನಿಕರು ಮಾಹಿತಿ ನೀಡಲು 1,077 ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಿದರೆ ಶೀಘ್ರದಲ್ಲೇ ಕ್ರಮಕೈಗೊಳ್ಳಲಾಗುವುದು ಎಂದು ಹೇಳಿದರು.

ತಾಲ್ಲೂಕು ಮಟ್ಟದಲ್ಲಿ ಶೀಘ್ರವೇ ಸಹಾಯವಾಣಿ ಸ್ಥಾಪಿಸಲಾಗುವುದು. ರಾಜಕಾಲುವೆಗಳಲ್ಲಿ ತುಂಬಿರುವ ಹೂಳನ್ನು ತೆಗೆಯಬೇಕು. ಜತೆಗೆ ಸರ್ವೇ ಮಾಡಿ ಒತ್ತುವರಿ ತೆರವುಗೊಳಿಸಬೇಕು. ಒತ್ತುವರಿದಾರರು ಅವಕಾಶ ನೀಡದಿದ್ದರೆ ಪೊಲೀಸರ ರಕ್ಷಣೆಯಲ್ಲಿ ತೆರವು ಕಾರ್ಯಚಾರಣೆ ನಡೆಸಿ. ಪ್ರತಿ ತಾಲ್ಲೂಕಿನಲ್ಲಿ ಗಂಜಿ ಕೇಂದ್ರಗಳನ್ನು ತೆರೆಯಲು ಅಗತ್ಯ ಸಿದ್ಧತೆ ಮಾಡಿಕೊಂಡಿರಬೇಕು ಎಂದು ತಹಶೀಲ್ದಾರರಿಗೆ ಸೂಚಿಸಿದರು.

ADVERTISEMENT

ಸಾರ್ವಜನಿಕರು ಹಾಗೂ ಅಧಿಕಾರಿಗಳು ಸಿಡಿಲು ಆ್ಯಪ್ ಅನ್ನು ಡೌನ್‍ಲೋಡ್ ಮಾಡಿಕೊಳ್ಳಿ, ಇದರಲ್ಲಿ ಹವಮಾನದ ಕುರಿತು ನಿಖರ ಮಾಹಿತಿ ಲಭ್ಯವಾಗುತ್ತದೆ. ಪ್ರಕೃತಿ ವಿಕೋಪ ಎದುರಿಸಲು ಜಿಲ್ಲೆಯಲ್ಲಿ 1,100 ಹೋಂಗಾರ್ಡ್ ಹಾಗೂ 60 ಜನ ಈಜುಗಾರರು ಇದ್ದಾರೆ. ಅಗ್ನಿಶಾಮಕ ದಳವು ತಂಡ ತಂಡವಾಗಿ ತಯಾರಾಗಿದೆ ಎಂದರು.

ಜಿಲ್ಲೆಯಲ್ಲಿ ಮಳೆಯಿಂದ ವಿದ್ಯುತ್ ಕಂಬಗಳು ಧರೆಗುರುಳಿ ವಿದ್ಯುತ್ ಸಂಪರ್ಕ ಕಡಿತವಾದರೆ, ಸಾರ್ವಜನಿಕರು ಬೆಸ್ಕಾಂ ಟೋಲ್ ಪ್ರೀ ನಂಬರ್ 1912 ಗೆ ಕರೆ ಮಾಡಿ ದೂರು ಸಲ್ಲಿಸಬಹುದು. ಬೆಸ್ಕಾಂ ಅಧಿಕಾರಿಗಳು ತಂಡಗಳನ್ನು ರಚಿಸಿಕೊಂಡು ಸಮಸ್ಯೆ ಬಗೆಹರಿಸಲು ಸಿದ್ದರಿರಬೇಕು. ವಿದ್ಯುತ್ ಕಂಬಗಳು ಮಳೆಯಿಂದ ಬಿದ್ದು ಹೋದರೆ ಸಾಧ್ಯವಾದಷ್ಟು ಬೇಗ ಹೊಸ ಕಂಬಗಳನ್ನು ಅಳವಡಿಸಿ ವಿದ್ಯುತ್ ಸಂಪರ್ಕ ಕಲ್ಪಿಸಬೇಕು ಎಂದು ಸಲಹೆ ನೀಡಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಜಗದೀಶ್ ಮಾತನಾಡಿ, ಖಾದ್ರಿಪುರ ಸೇತುವೆ ಕೆಳಗೆ ನೀರು ನಿಂತು ಪ್ರಯಾಣಿಕರು ಸಂಚರಿಸಲು ತೊಂದರೆಯಾಗುತ್ತಿದೆ. ನಗರಸಭೆ ಹಾಗೂ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಸಮಸ್ಯೆ ಬಗೆಹರಿಸಲು ಮುಂದಾಗಬೇಕು ಎಂದು ಸೂಚಿಸಿದರು.

ಸಭೆಯಲ್ಲಿ ಉಪವಿಭಾಗಾಧಿಕಾರಿಗಳಾದ ಸೋಮಶೇಖರ್, ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿಗಳಾದ ಲಕ್ಷ್ಮಿನಾರಾಯಣ್ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ನೋಡಲ್ ಅಧಿಕಾರಿಗಳು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.