ADVERTISEMENT

ಅಧಿಕಾರಿಗಳು ಗುತ್ತಿಗೆದಾರರ ತಾಳಕ್ಕೆ ಕುಣಿಯಬೇಡಿ

ಜನಪರವಾಗಿ ಕೆಲಸ ಮಾಡಿ: ಸಭೆಯಲ್ಲಿ ಶಾಸಕ ರಮೇಶ್‌ಕುಮಾರ್‌ ತಾಕೀತು

​ಪ್ರಜಾವಾಣಿ ವಾರ್ತೆ
Published 16 ಏಪ್ರಿಲ್ 2021, 14:31 IST
Last Updated 16 ಏಪ್ರಿಲ್ 2021, 14:31 IST
ಶಾಸಕ ಕೆ.ಆರ್.ರಮೇಶ್‌ಕುಮಾರ್ ಕೋಲಾರದಲ್ಲಿ ಶುಕ್ರವಾರ ಅಧಿಕಾರಿಗಳ ಸಭೆ ನಡೆಸಿದರು.
ಶಾಸಕ ಕೆ.ಆರ್.ರಮೇಶ್‌ಕುಮಾರ್ ಕೋಲಾರದಲ್ಲಿ ಶುಕ್ರವಾರ ಅಧಿಕಾರಿಗಳ ಸಭೆ ನಡೆಸಿದರು.   

ಕೋಲಾರ: ‘ಅಭಿವೃದ್ಧಿ ವಿಚಾರದಲ್ಲಿ ಯಾವುದೇ ತಾರತಮ್ಯ ಮಾಡಿಲ್ಲ. ಅಧಿಕಾರಿಗಳು ಗುತ್ತಿಗೆದಾರರ ತಾಳಕ್ಕೆ ತಕ್ಕಂತೆ ಕುಣಿಯುವುದನ್ನು ಬಿಟ್ಟು ಜನಪರವಾಗಿ ಕೆಲಸ ಮಾಡಬೇಕು’ ಎಂದು ಶಾಸಕ ಕೆ.ಆರ್.ರಮೇಶ್‌ಕುಮಾರ್ ತಾಕೀತು ಮಾಡಿದರು.

ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಅಭಿವೃದ್ಧಿ ಕಾಮಗಾರಿಗಳ ಸಂಬಂಧ ಇಲ್ಲಿ ಶುಕ್ರವಾರ ಕಂದಾಯ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ಇಲಾಖೆ ಅಧಿಕಾರಿಗಳ ಜತೆ ನಡೆದ ಸಭೆಯಲ್ಲಿ ಮಾತನಾಡಿ, ‘ಅಭಿವೃದ್ಧಿ ವಿಚಾರದಲ್ಲಿ ರಾಜಕೀಯ ಮಾಡಬಾರದು’ ಎಂದು ಸೂಚಿಸಿದರು.

‘ಅಧಿಕಾರಿಗಳು ಪ್ರತಿ ಗ್ರಾಮಕ್ಕೆ ಭೇಟಿ ಕೊಟ್ಟು ಸ್ಥಳೀಯರ ಸಮಸ್ಯೆ ಆಲಿಸಿ ಪರಿಹರಿಸಬೇಕು. ತ್ವರಿತವಾಗಿ ಆಗಬೇಕಿರುವ ಕಾಮಗಾರಿಗಳ ಕ್ರಿಯಾಯೋಜನೆ ಸಿದ್ಧಪಡಿಸಿ ಸಲ್ಲಿಸಿದರೆ ಅನುದಾನ ಮಂಜೂರು ಮಾಡಿಸುತ್ತೇನೆ’ ಎಂದು ಭರವಸೆ ನೀಡಿದರು.

ADVERTISEMENT

‘ಪ್ರತಿ ಗ್ರಾಮದಲ್ಲೂ ಸ್ಮಶಾನಕ್ಕೆ ಜಾಗ ಗುರುತಿಸಬೇಕು. ಸರ್ಕಾರಿ ಜಾಗವನ್ನು ಸ್ಮಶಾನಕ್ಕೆ ಮೀಸಲಿಡುವ ವಿಚಾರದಲ್ಲಿ ಯಾರಾದರೂ ಆಕ್ಷೇಪ ವ್ಯಕ್ತಪಡಿಸಿದರೆ ಪೊಲೀಸ್‌ ಭದ್ರತೆಯಲ್ಲಿ ಸಮಸ್ಯೆ ಇತ್ಯರ್ಥಪಡಿಸಬೇಕು. ಅಧಿಕಾರಿಗಳು ಯಾವುದೇ ಒತ್ತಡಕ್ಕೆ ಮಣಿಯದೆ ಕಾರ್ಯ ನಿರ್ವಹಿಸಬೇಕು’ ಎಂದು ಕಿವಿಮಾತು ಹೇಳಿದರು.

‘ಸ್ವಚ್ಛ ಭಾರತ್‌ ಮಿಷನ್‌ ಯೋಜನೆಯಡಿ ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಸ ವಿಲೇವಾರಿ ಘಟಕ ಸ್ಥಾಪಿಸಬೇಕು. ಘಟಕಕ್ಕೆ ಗ್ರಾ.ಪಂ ಕೇಂದ್ರದಲ್ಲಿ ಜಾಗ ಸಿಗದಿದ್ದರೆ ಆ ಪಂಚಾಯಿತಿ ವ್ಯಾಪ್ತಿಯ ಯಾವುದೇ ಗ್ರಾಮದಲ್ಲಿ ಜಾಗ ಗುರುತಿಸಬಹುದು. ಸರ್ಕಾರಿ ಜಾಗ ಒತ್ತುವರಿಯಾಗಿದ್ದರೆ ಮುಲಾಜಿಲ್ಲದೆ ಒತ್ತುವರಿ ತೆರವುಗೊಳಿಸಿ ಸ್ವಾಧೀನಕ್ಕೆ ಪಡೆಯಿರಿ. ನಂತರ ಜಾಗದ ಸುತ್ತ ಕಾಂಪೌಂಡ್ ನಿರ್ಮಿಸಿ’ ಎಂದು ತಿಳಿಸಿದರು.

‘ಜೂನ್‌ 6ರಂದು ದೇವರಾಜ ಅರಸು ಅವರ ಜಯಂತಿಯಿದೆ. ಆ ದಿನ ರಾಯಲ್ಪಾಡು ಗ್ರಾ.ಪಂ ವ್ಯಾಪ್ತಿಯಲ್ಲಿ ಕಸ ವಿಲೇವಾರಿ ಘಟಕ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸುತ್ತೇವೆ. ಕಾರ್ಯಕ್ರಮಕ್ಕೆ ಸಿದ್ಧತೆ ಮಾಡಿಕೊಳ್ಳಿ’ ಎಂದು ಸೂಚಿಸಿದರು.

ಬಡವರ ಸೇವೆ ಕನಸು: ‘ಗ್ರಾಮಗಳಲ್ಲಿ ಇಂದಿಗೂ ಸಾಕಷ್ಟು ಮಂದಿ ನಿವೇಶನ ಮತ್ತು ವಸತಿರಹಿತರಿದ್ದಾರೆ. ಅವರ ಪಟ್ಟಿ ಸಿದ್ಧಪಡಿಸುವಂತೆ 3 ವರ್ಷದ ಹಿಂದಯೇ ಹೇಳಿದ್ದೆ. ಆದರೆ, ಅಧಿಕಾರಿಗಳು ಇನ್ನೂ ಪಟ್ಟಿ ಸಿದ್ಧಪಡಿಸಿಲ್ಲ. ಸ್ಥಳೀಯ ಹೊಂದಾಣಿಕೆ ಏನೆಂದು ನನಗೆ ಗೊತ್ತಿಲ್ಲ. ಬಡವರ ಸೇವೆ ನನ್ನ ಕನಸು. ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ನಾನು ಜನರಿಗೆ ಉತ್ತರ ಕೊಡಲು ಆಗುತ್ತಿಲ್ಲ. ಇನ್ನಾದರೂ ಜವಾಬ್ದಾರಿ ಅರಿತು ಕೆಲಸ ಮಾಡಿ’ ಎಂದು ಖಡಕ್‌ ಎಚ್ಚರಿಕೆ ನೀಡಿದರು.

‘ಕ್ಷೇತ್ರದ ಜನ ನನ್ನ ಮೇಲೆ ನಂಬಿಕೆಯಿಟ್ಟು ಚುನಾವಣೆಯಲ್ಲಿ ಆಯ್ಕೆ ಮಾಡಿದ್ದಾರೆ. ಜನರ ನಿರೀಕ್ಷೆ ಮೀರಿ ಕೆಲಸ ಮಾಡಬೇಕು. ಇದಕ್ಕೆ ಅಧಿಕಾರಿಗಳ ಸಹಕಾರ ಮುಖ್ಯ. ಅಧಿಕಾರಿಗಳು ಸಹಕಾರ ನೀಡದ ಸಬೂಬು ಹೇಳುತ್ತಾ ಕಾಲ ಕಳೆದರೆ ಸಹಿಸಲ್ಲ’ ಎಂದು ಗುಡುಗಿದರು.

‘ಕ್ಷೇತ್ರದಲ್ಲಿ ಯಾವ ಅಧಿಕಾರಿಗಳು ಏನು ಕೆಲಸ ಮಾಡುತ್ತಾರೆ ಎಂಬುದು ಗೊತ್ತಿದೆ. ಬಡವರ ಕೆಲಸ ಮಾಡಿ ಮುಗಿಸಿದರೆ ಗೌರವ. ಬೇಸಿಗೆ ಕಾಲ ಆರಂಭವಾಗಿದೆ. ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಗಂಭೀರವಾಗುತ್ತಿದ್ದು, ಪಿಡಿಒಗಳು ಮತ್ತು ಎಂಜಿನಿಯರ್‌ಗಳು ಗ್ರಾಮಗಳಿಗೆ ತೆರಳಿ ಸಮಸ್ಯೆ ಅರಿಯಬೇಕು. ನೀರಿನ ಸಮಸ್ಯಾತ್ಮಕ ಗ್ರಾಮಗಳ ಪಟ್ಟಿ ಮಾಡಿ ಶೀಘ್ರವೇ ನೀರಿನ ಸೌಕರ್ಯ ಕಲ್ಪಿಸಬೇಕು’ ಎಂದರು.

ಶ್ರೀನಿವಾಸಪುರ ತಹಶೀಲ್ದಾರ್‌ ಶ್ರೀನಿವಾಸ್, ಕೋಲಾರ ತಹಶೀಲ್ದಾರ್‌ ಆರ್.ಶೋಭಿತಾ, ಶ್ರೀನಿವಾಸಪುರ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಆನಂದ್, ಕೋಲಾರ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಬಾಬು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.