ADVERTISEMENT

‘ಎಲ್ಲ ಗ್ರಾಮ ಪಂಚಾಯಿತಿಗೆ ಸ್ವಂತ ಕಟ್ಟಡ’

ಹುಲಿಬೆಲೆ, ಡಿ.ಕೆ.ಹಳ್ಳಿ ಗ್ರಾಮ ಪಂಚಾಯಿತಿಗಳ ಕಟ್ಟಡ ನಿರ್ಮಾಣಕ್ಕೆ ಶಾಸಕರಿಂದ ಶಂಕುಸ್ಥಾಪನೆ

​ಪ್ರಜಾವಾಣಿ ವಾರ್ತೆ
Published 16 ನವೆಂಬರ್ 2020, 5:18 IST
Last Updated 16 ನವೆಂಬರ್ 2020, 5:18 IST
ಬಂಗಾರಪೇಟೆ ತಾಲ್ಲೂಕಿನ ಹುಲಿಬೆಲೆ ಗ್ರಾಮ ಪಂಚಾಯಿತಿ ನೂತನ ಕಟ್ಟಡ ನಿರ್ಮಾಣಕ್ಕೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಅವರು ಶಂಕುಸ್ಥಾಪನೆ ನೆರವೇರಿಸಿದರು
ಬಂಗಾರಪೇಟೆ ತಾಲ್ಲೂಕಿನ ಹುಲಿಬೆಲೆ ಗ್ರಾಮ ಪಂಚಾಯಿತಿ ನೂತನ ಕಟ್ಟಡ ನಿರ್ಮಾಣಕ್ಕೆ ಶಾಸಕ ಎಸ್.ಎನ್.ನಾರಾಯಣಸ್ವಾಮಿ ಅವರು ಶಂಕುಸ್ಥಾಪನೆ ನೆರವೇರಿಸಿದರು   

ಬಂಗಾರಪೇಟೆ: ‘ಹುಲಿಬೆಲೆ ಮತ್ತು ಡಿ.ಕೆ.ಹಳ್ಳಿ ಗ್ರಾಮ ಪಂಚಾಯಿತಿ ಕಟ್ಟಡಗಳನ್ನು ₹40 ಲಕ್ಷ ವೆಚ್ಚದಲ್ಲಿ ನಿರ್ಮಾಣ ಮಾಡಲಾಗುವುದು’ ಎಂದು ಶಾಸಕ ಎಸ್.ಎನ್.ನಾರಾಯಣಸ್ವಾಮಿ ಅವರು ಹೇಳಿದರು.

ತಾಲ್ಲೂಕಿನ ಹುಲಿಬೆಲೆ ಮತ್ತು ಡಿ.ಕೆ.ಹಳ್ಳಿ ಗ್ರಾಮ ಪಂಚಾಯಿತಿಗಳ ಕಟ್ಟಡ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.

‘ತಾಲ್ಲೂಕಿನ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಸ್ವಂತ ಕಟ್ಟಡ ಒದಗಿಸಬೇಕು ಎನ್ನುವುದು ನನ್ನ ಅಭಿಲಾಷೆ. ಡಿಸೆಂಬರ್ ತಿಂಗಳಲ್ಲಿ ಗ್ರಾಮ ಪಂಚಾಯಿತಿಗಳಿಗೆ ಚುನಾವಣೆ ನಡೆಯಲಿದೆ. ಜನವರಿಯೊಳಗೆ ಕಟ್ಟಡ ಕಾಮಗಾರಿ ಪೂರ್ಣಗೊಳಿಸಿ ಹೊಸ ಕಟ್ಟಡದಲ್ಲೇ ಮುಂದಿನ ಆಡಳಿತ ಮಂಡಳಿ ಕಾರ್ಯಚಟುವಟಿಕೆ ನಡೆಸಲಿ’ ಎಂದರು.

ADVERTISEMENT

‘ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲಿ ಮಾಲೂರು ತಾಲ್ಲೂಕು ನೂಟವೆಯಿಂದ ಪಟ್ಟಣವರೆಗೂ 30 ಅಡಿ ವಿಸ್ತೀರ್ಣದ ರಸ್ತೆ ನಿರ್ಮಾಣಕ್ಕೆ ₹10 ಕೋಟಿ ಮಂಜೂರಾಗಿತ್ತು. ಅದೇ ರೀತಿ ಹೊಸಕೋಟೆಯಿಂದ ಆಂಧ್ರದ ವಿ.ಕೋಟೆವರೆಗೂ ರಸ್ತೆ ವಿಸ್ತೀರ್ಣಕ್ಕೆ ₹ 100 ಕೋಟಿ ಬಿಡುಗಡೆ ಮಾಡಲಾಗಿತ್ತು. ಬಿಜೆಪಿ ಸರ್ಕಾರ ಹಣವನ್ನು ಹಿಂಪಡೆದಿದ್ದರಿಂದ ಕಾಮಗಾರಿ ನೆನೆಗುದಿಗೆ ಬಿದ್ದಿತ್ತು. ಈಗ ಮತ್ತೆ ಹಣ ಮಂಜೂರು ಮಾಡಿದ್ದು, 15ದಿನದೊಳಗೆ ಕಾಮಗಾರಿ ಆರಂಭವಾಗಲಿದೆ’ ಎಂದರು.

‘ಈ ರಸ್ತೆಗಳು ಅಭಿವೃದ್ಧಿಯಾದರೆ ಎಲ್ಲಾ ಆರ್ಥಿಕ ಚಟುವಟಿಕೆ ವೃದ್ಧಿಯಾಗಲಿದೆ. ನೂಟವೆಯಿಂದ ರಸ್ತೆ ಕಾಮಗಾರಿ ಹುಲಿಬೆಲೆ ಗ್ರಾಮದ ಮೂಲಕ ಹಾದು ಹೋಗಲಿದ್ದು, ಗ್ರಾಮಸ್ಥರು ರಸ್ತೆಗೆ ಅಡ್ಡವಾಗಿರುವ ಮನೆಗಳನ್ನು ಸ್ವಯಂ ಪ್ರೇರಿತರಾಗಿ ತೆರವುಗೊಳಿಸಬೇಕು’ ಎಂದು ಹೇಳಿದರು.

‘ಹುಲಿಬೆಲೆ ಹಾಗೂ ಡಿ.ಕೆ.ಹಳ್ಳಿ ಗ್ರಾಮ ಪಂಚಾಯಿತಿಗಳಲ್ಲಿ ಎಸ್ಸಿಪಿ ಯೋಜನೆ ಅಡಿಯಲ್ಲಿ ತಲಾ ₹ 26 ಲಕ್ಷ ವೆಚ್ಚದಲ್ಲಿ ಸಿಮೆಂಟ್ ರಸ್ತೆ ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗಿದೆ’ ಎಂದರು.

ಜಿಲ್ಲಾ ಪಂಚಾಯಿತಿ ಸದಸ್ಯ ಬಿ.ವಿ.ಮಹೇಶ್, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಮಹದೇವ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗರಾಜ್, ಭೂ ಬ್ಯಾಂಕಿನ ಅಧ್ಯಕ್ಷ ಎಚ್.ಕೆ.ನಾರಾಯಣಸ್ವಾಮಿ, ಕಾರ್ಯ ನಿರ್ವಹಣಾಧಿಕಾರಿ ವೆಂಕಟೇಶಪ್ಪ, ಎಇಇ ಶೇಷಾದ್ರಿ, ಮುಖಂಡರಾದ ವೀಣಾವೆಂಕಟೇಶ್, ಜಾಫರ್, ಆರ್.ವಿ.ಸುರೇಶ್, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷೆ ವರಲಕ್ಷ್ಮೀ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಾದ ಶ್ರೀರಾಮರೆಡ್ಡಿ, ವಸಂತ್, ಕಾರ್ಯದರ್ಶಿ ಶಿವು ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.