ಕೋಲಾರ: ‘ಮಹಾರಾಷ್ಟ್ರದವರು ಸದಾ ಖ್ಯಾತೆ ತೆಗೆಯುತ್ತಿರುತ್ತಾರೆ. ನಮ್ಮ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹಾಳು ಮಾಡಲು ಪ್ರಯತ್ನಿಸಿದರೆ ಪೊಲೀಸರು ಕಠಿಣ ಕ್ರಮಕೈಗೊಳ್ಳಲಿದ್ದಾರೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಹೇಳಿದರು.
ನಗರದಲ್ಲಿ ಸೋಮವಾರ ರಾಜ್ಯಮಟ್ಟದ ಜನಪರ ಉತ್ಸವಕ್ಕೆ ಚಾಲನೆ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ‘ಮಹಾರಾಷ್ಟ್ರದ ವರ್ತನೆ ವಿರುದ್ಧ ರಾಜ್ಯ ಸರ್ಕಾರ ಉಗ್ರ ಪ್ರತಿಭಟನೆ ನಡೆಸುತ್ತದೆ. ಕೇಂದ್ರ ಸರ್ಕಾರಕ್ಕೂ ಮನವಿ ಸಲ್ಲಿಸುತ್ತೇವೆ’ ಎಂದರು.
ಎಸ್‌ಸಿಪಿ ಟಿಎಸ್‌ಪಿ ಅನುದಾನವನ್ನು ಗ್ಯಾರಂಟಿಗೆ ಬಳಕೆ ಮಾಡಿಕೊಳ್ಳುತ್ತಿರುವ ಪ್ರಶ್ನೆಗೆ, ‘ಎಸ್‌ಸಿಪಿ ಟಿಎಸ್‌ಪಿ ಅನುದಾನ ನೀಡಿದ್ದೇ ಮುಖ್ಯಮಂತ್ರಿ ಸಿದ್ದರಾಮಯ್ಯ. ದಲಿತರ ಬಗ್ಗೆ ಸಿದ್ದರಾಮಯ್ಯ ಅವರಿಗಿರುವಷ್ಟು ಕಾಳಜಿ ಬೇರೆ ಯಾರಿಗೆ ಇದೆ ಹೇಳಿ. ಶೇ 1ರಷ್ಟು ಕಾಳಜಿಯೂ ಉಳಿದ ಪಕ್ಷದವರಿಗೆ ಇಲ್ಲ. ರಾಜಕೀಯ ಕಾರಣಕ್ಕೆ ಬಿಜೆಪಿ, ಜೆಡಿಎಸ್ ಮುಖಂಡರು ಮೊಸಳೆ ಕಣ್ಣೀರು ಸುರಿಸುತ್ತಾರೆ’ ಎಂದು ತಿರುಗೇಟು ನೀಡಿದರು.
ಕೋಲಾರ ಜಿಲ್ಲೆಯ ಕಾಂಗ್ರೆಸ್ ಪಕ್ಷದ ಕೆಲ ಶಾಸಕರು ಯಾವುದೇ ಕಾರ್ಯಕ್ರಮಕ್ಕೆ ಬರುತ್ತಿಲ್ಲ, ಸಹಕಾರ ನೀಡುತ್ತಿಲ್ಲ ಎಂಬ ಪ್ರಶ್ನೆಗೆ, ‘ಕೆ.ವೈ.ನಂಜೇಗೌಡರು ಬೇರೆ ಕೆಲಸದ ಮೇಲೆ ಹೊರ ಹೋಗಿದ್ದಾರೆ. ಕಾಂಗ್ರೆಸ್ ಸರ್ಕಾರದ ಇರುವುದೇ ಜನರ ಅಭಿವೃದ್ಧಿಗೆ. ನಾನು ಬರಲಿ ಅಥವಾ ಬೇರೆ ಯಾರೇ ಬರಲಿ, ಬಾರದಿರಲಿ ಯೋಜನೆಗಳು ಜನಸಾಮಾನ್ಯರಿಗೆ ತಲುಪಬೇಕು ಅಷ್ಟೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.