ADVERTISEMENT

ತೈಲೋತ್ಪನ್ನ ಬೆಲೆ ಏರಿಕೆ: ಪ್ರತಿಭಟನೆ

ಕೇಂದ್ರ ಸರ್ಕಾರ– ಪ್ರಧಾನಿ ಮೋದಿ ವಿರುದ್ಧ ಕರಾವೇ ಸದಸ್ಯರ ಆಕ್ರೋಶ

​ಪ್ರಜಾವಾಣಿ ವಾರ್ತೆ
Published 9 ಫೆಬ್ರುವರಿ 2021, 14:36 IST
Last Updated 9 ಫೆಬ್ರುವರಿ 2021, 14:36 IST
ತೈಲೋತ್ಪನ್ನ ಬೆಲೆ ಏರಿಕೆ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಸದಸ್ಯರು ಕೋಲಾರದಲ್ಲಿ ಮಂಗಳವಾರ ಪ್ರಧಾನಿ ಮೋದಿಯ ಪ್ರತಿಕೃತಿ ದಹಿಸಿ ಪ್ರತಿಭಟನೆ ಮಾಡಿದರು.
ತೈಲೋತ್ಪನ್ನ ಬೆಲೆ ಏರಿಕೆ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ ಸದಸ್ಯರು ಕೋಲಾರದಲ್ಲಿ ಮಂಗಳವಾರ ಪ್ರಧಾನಿ ಮೋದಿಯ ಪ್ರತಿಕೃತಿ ದಹಿಸಿ ಪ್ರತಿಭಟನೆ ಮಾಡಿದರು.   

ಕೋಲಾರ: ತೈಲೋತ್ಪನ್ನ ಬೆಲೆ ಏರಿಕೆ ಖಂಡಿಸಿ ಕರ್ನಾಟಕ ರಕ್ಷಣಾ ವೇದಿಕೆ (ಪ್ರವೀಣ್‌ಕುಮಾರ್‌ ಶೆಟ್ಟಿ ಬಣ) ಸದಸ್ಯರು ಇಲ್ಲಿ ಮಂಗಳವಾರ ಪ್ರತಿಭಟನೆ ಮಾಡಿದರು.

ಪ್ರತಿಭಟನಾಕಾರರು ಹೊಸ ಬಸ್‌ ನಿಲ್ದಾಣ ವೃತ್ತದಲ್ಲಿ ಪ್ರಧಾನಿ ನರೇಂದ್ರ ಮೋದಿಯ ಪ್ರತಿಕೃತಿ ದಹಿಸಿ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

‘ಕೇಂದ್ರ ಸರ್ಕಾರವು ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆ ಏರಿಸುವ ಮೂಲಕ ಕೊರೊನಾ ಸಂಕಷ್ಟದಲ್ಲಿರುವ ಜನಸಾಮಾನ್ಯರ ಬದುಕಿನ ಮೇಲೆ ಬರೆ ಎಳೆದಿದೆ. ಕೇಂದ್ರದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಅಗತ್ಯ ವಸ್ತುಗಳ ಬೆಲೆ ಏರು ಗತಿಯಲ್ಲಿ ಸಾಗಿದೆ. ಇದರಿಂದ ಜನಸಾಮಾನ್ಯರು ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ್ದಾರೆ’ ಎಂದು ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ರಾಜೇಶ್‌ ದೂರಿದರು.

ADVERTISEMENT

‘ಪೆಟ್ರೋಲ್‌ ಮತ್ತು ಡೀಸೆಲ್‌ ಬೆಲೆ ಸಾರ್ವಕಾಲಿಕ ದಾಖಲೆಯ ಗರಿಷ್ಠ ಮಟ್ಟ ತಲುಪಿದೆ. ಬೇಳೆ ಕಾಳು, ಅಕ್ಕಿ, ಅಡುಗೆ ಎಣ್ಣೆಯಂತಹ ಆಹಾರ ಪದಾರ್ಥಗಳ ಬೆಲೆ ದುಪ್ಪಟ್ಟಾಗಿದೆ. ದುಡಿಮೆಯ ಹಣ ಜೀವನ ನಿರ್ವಹಣೆಗೆ ಸಾಕಾಗುತ್ತಿಲ್ಲ. ಕೇಂದ್ರದ ಅವೈಜ್ಞಾನಿಕ ಆರ್ಥಿಕ ನೀತಿಯಿಂದ ಬಡ ಮತ್ತು ಮಧ್ಯಮ ವರ್ಗದ ಜನ, ಕಾರ್ಮಿಕರು, ರೈತರು ತೊಂದರೆ ಅನುಭವಿಸುವಂತಾಗಿದೆ’ ಎಂದು ಹೇಳಿದರು.

ಪ್ರಧಾನಿ ವಿಫಲ: ‘ಪ್ರಧಾನಿ ಮೋದಿ ಜನಪರ ಆಡಳಿತ ನೀಡುವಲ್ಲಿ ವಿಫಲರಾಗಿದ್ದಾರೆ. ಬಂಡವಾಳಶಾಹಿಗಳು ಹಾಗೂ ಕಾರ್ಪೊರೇಟ್‌ ಕಂಪನಿಗಳ ಕೈಗೊಂಬೆಯಾಗಿರುವ ಅವರಿಗೆ ಜನಸಾಮಾನ್ಯರ ಕಷ್ಟದ ಅರಿವಿಲ್ಲ. ಜನರ ಮೇಲೆ ತೆರಿಗೆ ಹೊರೆ ಹೆಚ್ಚಿದೆ. ತೈಲೋತ್ಪನ್ನ ಹಾಗೂ ಅಗತ್ಯ ವಸ್ತುಗಳ ಬೆಲೆ ನಿಯಂತ್ರಿಸುವಲ್ಲಿ ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ’ ಎಂದು ಪ್ರತಿಭಟನಾಕಾರರು ಕಿಡಿಕಾರಿದರು.

‘ಜನಸಾಮಾನ್ಯರ ಹಿತ ಕಾಯದ ಕೇಂದ್ರ ಸರ್ಕಾರವು ಕೋಮಾ ಸ್ಥಿತಿಯಲ್ಲಿದೆ. ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಬಡ ಕುಟುಂಬಗಳ, ಕೂಲಿ ಕಾರ್ಮಿಕರ ಬದುಕು ಬರ್ಬರವಾಗಿದೆ. ನಿರಾಶದಾಯಕವಾಗಿರುವ ಕೇಂದ್ರದ ಬಜೆಟ್‌ನಲ್ಲಿ ಜನಪರ ಯೋಜನೆಗಳನ್ನು ಘೋಷಿಸಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಬೀದಿಗಿಳಿದು ಹೋರಾಟ: ‘ಕೇಂದ್ರದ ದುರಾಡಳಿತದಿಂದ ಬೇಸತ್ತಿರುವ ಜನ ಹಿಡಿಶಾಪ ಹಾಕುತ್ತಿದ್ದಾರೆ. ತೈಲೋತ್ಪನ್ನ ಹಾಗೂ ಅಗತ್ಯ ವಸ್ತುಗಳ ಬೆಲೆ ನಿಯಂತ್ರಿಸದಿದ್ದರೆ ಮತ್ತಷ್ಟು ಕಷ್ಟದ ದಿನಗಳು ಎದುರಾಗುತ್ತವೆ. ತೈಲೋತ್ಪನ್ನಗಳನ್ನು ಜಿಎಸ್‌ಟಿ ವ್ಯಾಪ್ತಿಗೆ ಸೇರಿಸಬೇಕು. ತೈಲೋತ್ಪನ್ನ ಕಂಪನಿಗಳನ್ನು ರಾಷ್ಟ್ರೀಕರಣಗೊಳಿಸಿ ಬೆಲೆ ಏರಿಕೆಗೆ ಕಡಿವಾಣ ಹಾಕಬೇಕು. ಇಲ್ಲದಿದ್ದರೆ ಜನ ಬೀದಿಗಿಳಿದು ಹೋರಾಟ ಮಾಡುತ್ತಾರೆ’ ಎಂದು ಎಚ್ಚರಿಕೆ ನೀಡಿದರು.

ಸಂಘಟನೆಯ ಜಿಲ್ಲಾ ಘಟಕದ ಉಪಾಧ್ಯಕ್ಷ ಚೌಡರೆಡ್ಡಿ, ಕಾರ್ಯದರ್ಶಿ ಲೋಕೇಶ್, ಪ್ರಧಾನ ಕಾರ್ಯದರ್ಶಿ ಹರೀಶ್, ಸಂಚಾಲಕ ರಮೇಶ್‌, ಗೌರವ ಸಲಹೆಗಾರ ಕೃಷ್ಣಪ್ಪ, ವಿವಿಧ ತಾಲ್ಲೂಕು ಘಟಕಗಳ ಅಧ್ಯಕ್ಷರು ಪಾಲ್ಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.