ADVERTISEMENT

ನೀರಿನ ಸಮಸ್ಯೆ ಪರಿಹಾರಕ್ಕೆ ಆದ್ಯತೆ

​ಪ್ರಜಾವಾಣಿ ವಾರ್ತೆ
Published 28 ನವೆಂಬರ್ 2019, 16:08 IST
Last Updated 28 ನವೆಂಬರ್ 2019, 16:08 IST
ಸಿ.ಎಸ್‌.ವೆಂಕಟೇಶ್‌
ಸಿ.ಎಸ್‌.ವೆಂಕಟೇಶ್‌   

ಕೋಲಾರ: ‘ಕುಡಿಯುವ ನೀರಿನ ಸಮಸ್ಯೆ ಪರಿಹಾರ, ಆರೋಗ್ಯ ಮತ್ತು ಶಿಕ್ಷಣ ಸೌಲಭ್ಯಕ್ಕೆ ಪ್ರಥಮ ಆದ್ಯತೆ ನೀಡುತ್ತೇನೆ’ ಎಂದು ಜಿಲ್ಲಾ ಪಂಚಾಯಿತಿ ನೂತನ ಅಧ್ಯಕ್ಷ ಸಿ.ಎಸ್.ವೆಂಕಟೇಶ್ ತಿಳಿಸಿದರು.

ಅಧ್ಯಕ್ಷರಾಗಿ ಆಯ್ಕೆಯಾದ ನಂತರ ಇಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಜಿಲ್ಲೆಯ ಪ್ರಮುಖ ಸಮಸ್ಯೆಗಳ ಪರಿಹಾರಕ್ಕಾಗಿ ಕಾಂಗ್ರೆಸ್, ಜೆಡಿಎಸ್ ಹಾಗೂ ಬಿಜೆಪಿಯ ಎಲ್ಲಾ ಸದಸ್ಯರು ನನ್ನನ್ನು ಬೆಂಬಲಿಸಿ ಅಧ್ಯಕ್ಷನಾಗಿ ಆಯ್ಕೆ ಮಾಡಿದ್ದಾರೆ. ಸರ್ಕಾರದಿಂದ ಹೆಚ್ಚಿನ ಅನುದಾನ ತಂದು ಜಿಲ್ಲೆಯನ್ನು ಅಭಿವೃದ್ಧಿ ಪಡಿಸುತ್ತೇನೆ’ ಎಂದು ಭರವಸೆ ನೀಡಿದರು.

‘ಜಿಲ್ಲೆಯಲ್ಲಿ ಬದಲಾವಣೆ ತರುವ ಉದ್ದೇಶಕ್ಕೆ ಎಲ್ಲಾ ಪಕ್ಷಗಳ ಸದಸ್ಯರು ರಾಜಕೀಯ ಮರೆತು ಚುನಾವಣೆಯಲ್ಲಿ ನನ್ನನ್ನು ಬೆಂಬಲಿಸಿದ್ದಾರೆ. ಅದೇ ರೀತಿ ಸಂಸದರು, ಹಾಲಿ ಹಾಗೂ ಮಾಜಿ ಶಾಸಕರು, ಮುಖಂಡರು ನನ್ನನ್ನು ಬೆಂಬಲಿಸಿದ್ದು, ಅವರ ನಂಬಿಕೆಗೆ ತಕ್ಕಂತೆ ಕೆಲಸ ಮಾಡುತ್ತೇನೆ’ ಎಂದರು.

ADVERTISEMENT

‘ಜಿಲ್ಲೆಯಲ್ಲಿ ನೀರಿನ ಸಮಸ್ಯೆ ಗಂಭೀರವಾಗಿದೆ. ಸರ್ಕಾರಿ ಆಸ್ಪತ್ರೆಗಳನ್ನು ಮೇಲ್ದರ್ಜೆಗೆ ಏರಿಸಬೇಕು. ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ಸಿಗಬೇಕು. ಈ ನಿಟ್ಟಿನಲ್ಲಿ ಶಕ್ತಿಮೀರಿ ಕೆಲಸ ಮಾಡುತ್ತೇನೆ. ಕೆಲ ತಿಂಗಳುಗಳಿಂದ ಜಿ.ಪಂ ಸಾಮಾನ್ಯ ಸಭೆಗಳು ನಡೆದಿಲ್ಲ. ಇದರಿಂದ ಅಭಿವೃದ್ಧಿ ಕಾರ್ಯ ಕುಂಠಿತವಾಗಿದ್ದು,  ಮುಂದೆ ಕಾಲಕಾಲಕ್ಕೆ ಸಾಮಾನ್ಯ ಸಭೆ ನಡೆಸುತ್ತೇವೆ’ ಎಂದು ಹೇಳಿದರು.

‘ನಿಗದಿತ ಕಾಲಮಿತಿಯಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗುವುದು. ಸರ್ಕಾರದ ಸೌಲಭ್ಯ ಸದ್ಬಳಕೆ ಮಾಡಿಕೊಂಡು ಜಿಲ್ಲೆಯನ್ನು ಅಭಿವೃದ್ಧಿ ಪಥದಲ್ಲಿ ಕೊಂಡೊಯ್ಯುತ್ತೇನೆ. ಬಿಜೆಪಿ ಸಂಸದ ಎಸ್.ಮುನಿಸ್ವಾಮಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಚ್.ನಾಗೇಶ್ ಅವರ ಸಹಕಾರದೊಂದಿಗೆ ಜಿಲ್ಲೆಗೆ ಹೆಚ್ಚಿನ ಅನುದಾನ ಬಿಡುಗಡೆ ಮಾಡಿಸುತ್ತೇನೆ’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.