ADVERTISEMENT

ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆಗೆ ಸಕಲ ಸಿದ್ಧತೆ

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2021, 12:42 IST
Last Updated 24 ಸೆಪ್ಟೆಂಬರ್ 2021, 12:42 IST

ಕೋಲಾರ: ಜಿಲ್ಲೆಯ 3 ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಪೂರಕ ಪರೀಕ್ಷೆ ನಡೆಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಸಕಲ ಸಿದ್ಧತೆ ನಡೆಸಿದ್ದು, 344 ವಿದ್ಯಾರ್ಥಿಗಳು ಪರೀಕ್ಷೆಗೆ ಹೆಸರು ನೋಂದಾಯಿಸಿದ್ದಾರೆ.

ಸೆ.27 ಮತ್ತು 29ರಂದು ಕೋಲಾರದ 2 ಹಾಗೂ ಬಂಗಾರಪೇಟೆಯ 1 ಕೇಂದ್ರದಲ್ಲಿ ಪರೀಕ್ಷೆ ನಡೆಯಲಿದೆ. ಕೋಲಾರ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನಲ್ಲಿ 123 ವಿದ್ಯಾರ್ಥಿಗಳು, ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ 127 ಹಾಗೂ ಬಂಗಾರಪೇಟೆ ಸಂತೋಷ್ ಪ್ರೌಢ ಶಾಲಾ ಪರೀಕ್ಷಾ ಕೇಂದ್ರದಲ್ಲಿ 94 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.

ಆಗಸ್ಟ್‌ನಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಗೈರಾದವರು, ಹಿಂದಿನ ವರ್ಷದ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾಗಿ ಪರೀಕ್ಷೆ ತೆಗೆದುಕೊಳ್ಳದ ಅಭ್ಯರ್ಥಿಗಳು ಈ ಬಾರಿ ಪೂರಕ ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷಾ ಕಾರ್ಯಕ್ಕೆ ಅಧೀಕ್ಷಕರು, ಕಸ್ಟೋಡಿಯನ್, ಜಾಗೃತ ದಳ ಸಿಬ್ಬಂದಿ, ಕೊಠಡಿ ಮೇಲ್ವಿಚಾರಕರನ್ನು ನಿಯೋಜಿಸಲಾಗಿದೆ.

ADVERTISEMENT

ಶಾಲೆಗಳಲ್ಲಿ ತರಗತಿಗೆ ತೊಂದರೆಯಾಗದಂತೆ ಹೆಚ್ಚಿನ ಪ್ರಮಾಣದಲ್ಲಿ ದೈಹಿಕ ಹಾಗೂ ವೃತ್ತಿ ಶಿಕ್ಷಕರನ್ನೇ ಕೊಠಡಿ ಮೇಲ್ವಿಚಾರಕರಾಗಿ ತೆಗೆದುಕೊಳ್ಳಲಾಗಿದೆ. ಜಿಲ್ಲಾಧಿಕಾರಿಯು ಪರೀಕ್ಷಾ ದಿನ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಆದೇಶ ಹೊರಡಿಸಿದ್ದಾರೆ. ಜತೆಗೆ ಕೇಂದ್ರಗಳ ಅಕ್ಕಪಕ್ಕದ ಜೆರಾಕ್ಸ್ ಅಂಗಡಿಗಳನ್ನು ಬಂದ್ ಮಾಡುವಂತೆ ಸೂಚಿಸಿದ್ದಾರೆ.

ಥರ್ಮಲ್ ಸ್ಕ್ರೀನಿಂಗ್: ‘ಪ್ರತಿ ಪರೀಕ್ಷಾ ಕೇಂದ್ರದಲ್ಲೂ ಪರೀಕ್ಷೆಗೆ ಬರುವ ಸಿಬ್ಬಂದಿ, ವಿದ್ಯಾರ್ಥಿಗಳಿಗೆ ಥರ್ಮಲ್ ಸ್ಕ್ರೀನಿಂಗ್ ನಡೆಸಲಾಗುತ್ತದೆ. ಜತೆಗೆ ಕೈಗಳನ್ನು ಸ್ವಚ್ಛಗೊಳಿಸಿಕೊಳ್ಳಲು ಸ್ಯಾನಿಟೈಸರ್‌ನ ವ್ಯವಸ್ಥೆ ಮಾಡಲಾಗಿದ್ದು, ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಕಡ್ಡಾಯವಾಗಿ ಮಾಸ್ಕ್ ಧರಿಸಿ ಬರಬೇಕು’ ಎಂದು ಜಿಲ್ಲಾ ಪರೀಕ್ಷಾ ನೋಡಲ್ ಅಧಿಕಾರಿ ಎ.ಎನ್.ನಾಗೇಂದ್ರಪ್ರಸಾದ್ ಸುದ್ದಿಗಾರರಿಗೆ ತಿಳಿಸಿದರು.

‘ಅನಾರೋಗ್ಯಪೀಡಿತ, ಕೋವಿಡ್ ಲಕ್ಷಣವುಳ್ಳ ಮಕ್ಕಳು ಪರೀಕ್ಷೆಗೆ ಬಂದಲ್ಲಿ ಅವರಿಗೆ ಪ್ರತಿ ಕೇಂದ್ರದಲ್ಲಿ ಪ್ರತ್ಯೇಕ ವಿಶೇಷ ಕೊಠಡಿ ವ್ಯವಸ್ಥೆ ಮಾಡಲಾಗಿದೆ. ಪ್ರತಿ ವಿದ್ಯಾರ್ಥಿಗೆ ಒಂದೊಂದು ಡೆಸ್ಕ್ ಒದಗಿಸಬೇಕಾದ ಕಾರಣ ಆಸನ ವ್ಯವಸ್ಥೆಗೆ ಒತ್ತು ನೀಡಲಾಗಿದೆ. ವಿದ್ಯಾರ್ಥಿಗಳು ನೆಲದ ಮೇಲೆ ಕುಳಿತು ಪರೀಕ್ಷೆ ಬರೆಯುವಂತಿಲ್ಲ’ ಎಂದು ಹೇಳಿದರು.

‘ಪರೀಕ್ಷಾ ಸಿದ್ಧತೆ ಸಂಬಂಧ ಶನಿವಾರ (ಸೆ.25) ಸಿಬ್ಬಂದಿಯ ಸಭೆ ನಡೆಸಿ ಮಾರ್ಗದರ್ಶನ ನೀಡಲಾಗುತ್ತದೆ. ಯಾವುದೇ ಗೊಂದಲಗಳಿಲ್ಲದೆ ಸುಸೂತ್ರವಾಗಿ ಪರೀಕ್ಷೆ ನಡೆಸಲು ಇಲಾಖೆ ಸನ್ನದ್ಧವಾಗಿದೆ’ ಎಂದು ವಿವರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.