ADVERTISEMENT

ಪೂರ್ವಸಿದ್ಧತಾ ಪರೀಕ್ಷೆ ಪ್ರಶ್ನೆಪತ್ರಿಕೆ ಬಹಿರಂಗ

​ಪ್ರಜಾವಾಣಿ ವಾರ್ತೆ
Published 19 ಫೆಬ್ರುವರಿ 2020, 12:06 IST
Last Updated 19 ಫೆಬ್ರುವರಿ 2020, 12:06 IST

ಕೋಲಾರ: ಜಿಲ್ಲೆಯ ಬಂಗಾರಪೇಟೆ ತಾಲ್ಲೂಕಿನಲ್ಲಿ ಮಂಗಳವಾರ ಎಸ್ಸೆಸ್ಸೆಲ್ಸಿ ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆಪತ್ರಿಕೆ ಪರೀಕ್ಷೆ ಆರಂಭಕ್ಕೂ ಮುನ್ನವೇ ಬಹಿರಂಗಗೊಂಡಿದ್ದು, ಈ ಸಂಬಂಧ ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಪಿ.ಕೆಂಪಯ್ಯ ಸ್ಥಳೀಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಇದೇ ಮೊದಲ ಬಾರಿಗೆ ರಾಜ್ಯದೆಲ್ಲೆಡೆ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯಿಂದ ಪ್ರಶ್ನೆಪತ್ರಿಕೆ ಸಿದ್ಧಪಡಿಸಿ ಪೂರ್ವಸಿದ್ಧತಾ ಪರೀಕ್ಷೆ ನಡೆಸಲಾಗುತ್ತಿದ್ದು, ಮಂಗಳವಾರ ಗಣಿತ ಪರೀಕ್ಷೆ ನಿಗದಿಯಾಗಿತ್ತು. ಬೆಳಿಗ್ಗೆ 9.30ಕ್ಕೆ ಪರೀಕ್ಷೆ ಆರಂಭವಾಗಬೇಕಿತ್ತು. ಆದರೆ, ಅರ್ಧ ತಾಸು ಮುನ್ನವೇ ಬಂಗಾರಪೇಟೆ ತಾಲ್ಲೂಕಿನ ಶಾಲೆಗಳಲ್ಲಿ ಗಣಿತ ವಿಷಯದ ಪ್ರಶ್ನೆಪತ್ರಿಕೆ ಬಹಿರಂಗವಾಗಿದೆ.

ಪ್ರಶ್ನೆಪತ್ರಿಕೆಯು ವಾಟ್ಸ್‌ಆ್ಯಪ್‌ ಮೂಲಕ ವಿದ್ಯಾರ್ಥಿಗಳ ಮೊಬೈಲ್‌ನಿಂದ ಮೊಬೈಲ್‌ಗೆ ಹರಿದಾಡಿತು. ಈ ಸಂಗತಿ ತಿಳಿದ ಬಿಇಒ ಕೆಂಪಯ್ಯ ಪರೀಕ್ಷೆ ನಡೆಸುವಂತೆ ಶಿಕ್ಷಕರು ಹಾಗೂ ಅಧಿಕಾರಿಗಳಿಗೆ ಸೂಚಿಸಿದರು. ಹೀಗಾಗಿ ಶಿಕ್ಷಕರು ಅನಿವಾರ್ಯವಾಗಿ ಪರೀಕ್ಷೆ ನಡೆಸಿದರು.

ADVERTISEMENT

‘ಪ್ರಶ್ನೆಪತ್ರಿಕೆ ಬಹಿರಂಗವಾಗಿರುವ ಸಂಬಂಧ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಿರ್ದೇಶಕಿ ಸುಮಂಗಲಾ ಅವರ ಆದೇಶದಂತೆ ಬಂಗಾರಪೇಟೆ ಠಾಣೆಯಲ್ಲಿ ದೂರು ದಾಖಲಿಸಿದ್ದೇವೆ. ಪ್ರಕರಣದಲ್ಲಿ ಇಲಾಖೆ ಶಿಕ್ಷಕರು ಹಾಗೂ ಕೆಜಿಎಫ್‌ನ ವಿದ್ಯಾರ್ಥಿ ಭಾಗಿಯಾಗಿರುವುದು ಗೊತ್ತಾಗಿದೆ. ಅವರ ಮೊಬೈಲ್‌ ಸಂಖ್ಯೆ ಬಗ್ಗೆ ಪೊಲೀಸರಿಗೆ ಮಾಹಿತಿ ಕೊಟ್ಟಿದ್ದೇವೆ’ ಎಂದು ಬಿಇಒ ಕೆಂಪಯ್ಯ ‘ಪ್ರಜಾವಾಣಿ’ಗೆ ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.