ADVERTISEMENT

ಕೋಲಾರ: ಬಾಲ ಕಾರ್ಮಿಕರ ರಕ್ಷಣೆ

​ಪ್ರಜಾವಾಣಿ ವಾರ್ತೆ
Published 4 ಮಾರ್ಚ್ 2021, 11:20 IST
Last Updated 4 ಮಾರ್ಚ್ 2021, 11:20 IST
ಜಿಲ್ಲಾ ಕಾರ್ಮಿಕ ಅಧಿಕಾರಿ ಶ್ರೀಕಾಂತ್‌ ಬಿ.ಪಾಟೀಲ್‌ ನೇತೃತ್ವದ ಅಧಿಕಾರಿಗಳ ತಂಡವು ಕೋಲಾರದ ವಿವಿಧೆಡೆ ಗುರುವಾರ ಕಾರ್ಯಾಚರಣೆ ನಡೆಸಿ ಬಾಲ ಕಾರ್ಮಿಕರನ್ನು ರಕ್ಷಿಸಿತು.
ಜಿಲ್ಲಾ ಕಾರ್ಮಿಕ ಅಧಿಕಾರಿ ಶ್ರೀಕಾಂತ್‌ ಬಿ.ಪಾಟೀಲ್‌ ನೇತೃತ್ವದ ಅಧಿಕಾರಿಗಳ ತಂಡವು ಕೋಲಾರದ ವಿವಿಧೆಡೆ ಗುರುವಾರ ಕಾರ್ಯಾಚರಣೆ ನಡೆಸಿ ಬಾಲ ಕಾರ್ಮಿಕರನ್ನು ರಕ್ಷಿಸಿತು.   

ಕೋಲಾರ: ಜಿಲ್ಲಾ ಕಾರ್ಮಿಕ ಅಧಿಕಾರಿ ಶ್ರೀಕಾಂತ್‌ ಬಿ.ಪಾಟೀಲ್‌ ನೇತೃತ್ವದಲ್ಲಿ ನಗರದ ವಿವಿಧೆಡೆ ಗುರುವಾರ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳ ತಂಡವು ಅಂಗಡಿ ಹಾಗೂ ವಾಣಿಜ್ಯ ಸಂಸ್ಥೆಗಳಲ್ಲಿ ಕೆಲಸ ಮಾಡುತ್ತಿದ್ದ 4 ಮಂದಿ ಬಾಲ ಕಾರ್ಮಿಕರನ್ನು ರಕ್ಷಿಸಿತು.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರ, ಕಾರ್ಮಿಕ ಇಲಾಖೆ, ಬಾಲ ಕಾರ್ಮಿಕ ಯೋಜನಾ ಸೊಸೈಟಿ, ಬಚ್ಪನ್ ಬಚಾವೋ ಆಂದೋಲನ, ಮಕ್ಕಳ ಸಹಾಯವಾಣಿ, ಪೊಲೀಸ್‌ ಇಲಾಖೆ ಅಧಿಕಾರಿಗಳು ಹಾಗೂ ಜಾಗೃತಿ ಸೇವಾ ಸಂಸ್ಥೆ ಸದಸ್ಯರು ಬಾಲ ಕಾರ್ಮಿಕರನ್ನು ಕೆಲಸಕ್ಕೆ ನೇಮಿಸಿಕೊಂಡಿದ್ದ ಅಂಗಡಿಗಳ ಮೇಲೆ ದಿಢೀರ್‌ ದಾಳಿ ನಡೆಸಿದರು.

ಕ್ಲಾಕ್‌ಟವರ್‌ ಬಳಿಯ ವರ್ಕ್‌ಶಾಪ್‌, ಬಂಬೂ ಬಜಾರ್‌ನ ಮರದ ಡಿಪೊಗಳಲ್ಲಿ ಕಾನೂನುಬಾಹಿರವಾಗಿ ಬಾಲ ಕಾರ್ಮಿಕರಿಂದ ಕೆಲಸ ಮಾಡಿಸಲಾಗುತ್ತಿತ್ತು. ಈ ಸಂಬಂಧ ಸಾರ್ವಜನಿಕರು ಮಕ್ಕಳ ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಿದ್ದರು. ಈ ಮಾಹಿತಿ ಆಧರಿಸಿ ದಾಳಿ ನಡೆಸಿದ ಅಧಿಕಾರಿಗಳು ಬಾಲ ಕಾರ್ಮಿಕರನ್ನು ರಕ್ಷಿಸಿ ವರ್ಕ್‌ಶಾಪ್‌ ಹಾಗೂ ಮರದ ಡಿಪೊ ಮಾಲೀಕರ ವಿರುದ್ಧ ಪ್ರಕರಣ ದಾಖಲಿಸಿದರು.

ADVERTISEMENT

‘ಕೊರೊನಾ ಹಿನ್ನೆಲೆಯಲ್ಲಿ ಶಾಲೆಗಳು ಮುಚ್ಚಿರುವುದರಿಂದ ಬಾಲ ಕಾರ್ಮಿಕರ ಸಂಖ್ಯೆ ಹೆಚ್ಚಾಗಿದೆ. ಪೋಷಕರು ಮನೆಯಲ್ಲಿರುವ ಮಕ್ಕಳನ್ನು ದುಡಿಮೆಗೆ ಕಳುಹಿಸುತ್ತಿದ್ದಾರೆ. ಬಾಲ ಕಾರ್ಮಿಕ ಸಂರಕ್ಷಣೆ ಸಮಿತಿಯು ದಿಢೀರ್‌ ದಾಳಿ ನಡೆಸಿ ಬಾಲ ಕಾರ್ಮಿಕರನ್ನು ಕೆಲಸಕ್ಕೆ ನೇಮಿಸಿಕೊಂಡಿರುವ ಮಾಲೀಕರ ವಿರುದ್ಧ ಶಿಸ್ತುಕ್ರಮ ಜರುಗಿಸಲಿದೆ’ ಎಂದು ಕಾರ್ಮಿಕ ಇಲಾಖೆ ಅಧಿಕಾರಿಗಳು ಎಚ್ಚರಿಕೆ ನೀಡಿದರು.

ಬಚ್ಪನ್ ಬಚಾವೋ ಆಂದೋಲನದ ರಾಜ್ಯ ಸಂಚಾಲಕ ಬಿನು ವರ್ಗೀಸ್, ಯೋಜನಾ ನಿರ್ದೇಶಕ ಎಂ.ಸಿ.ಲಕ್ಷ್ಮಿನಾರಾಯಣ, ಕಾರ್ಮಿಕ ನಿರೀಕ್ಷಕರಾದ ಆಶಾರಾಣಿ, ರಾಜೇಶ್ವರಿ, ಮಂಜುನಾಥ್‌ಪ್ರಸಾದ್, ರೇಣುಕಾಪ್ರಸನ್ನ, ಮಂಜುಶ್ರೀ, ರೂಪಾಶ್ರೀ, ಮಕ್ಕಳ ಸಹಾಯವಾಣಿ ಸಿಬ್ಬಂದಿ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.