ADVERTISEMENT

ದಲಿತ ಸಮುದಾಯಕ್ಕೆ ಅನುದಾನ ಮೀಸಲಿಡಿ

​ಪ್ರಜಾವಾಣಿ ವಾರ್ತೆ
Published 30 ಜನವರಿ 2019, 13:53 IST
Last Updated 30 ಜನವರಿ 2019, 13:53 IST

ಕೋಲಾರ: ‘ರಾಜ್ಯ ಸರ್ಕಾರ ಬಜೆಟ್‌ನಲ್ಲಿ ದಲಿತ ಸಮುದಾಯಕ್ಕೆ ₹ 40 ಸಾವಿರ ಕೋಟಿ ಅನುದಾನ ಮೀಸಲಿಡಬೇಕು’ ಎಂದು ಜಿಲ್ಲಾ ಕಾಂಗ್ರೆಸ್ ಎಸ್‍ಸಿ ಘಟಕದ ಅಧ್ಯಕ್ಷ ಅಶ್ವತ್ಥನಾರಾಯಣ ಒತ್ತಾಯಿಸಿದರು.

ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಹಿಂದಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ಅವರು ದಲಿತ ಸಮುದಾಯಕ್ಕೆ ಆದ್ಯತೆ ಮೇರೆಗೆ ಅನುದಾನ ಮೀಸಲಿಟ್ಟಿದ್ದರು. ಅದೇ ರೀತಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಅನುದಾನ ಮೀಸಲಿಡಬೇಕು’ ಎಂದರು.

‘ರಾಜ್ಯ ಸರ್ಕಾರ ಭೋವಿ ನಿಗಮ ಸ್ಥಾಪಿಸಿ ₹ 350 ಕೋಟಿ ಬಿಡುಗಡೆ ಮಾಡಿದೆ. ಜಿಲ್ಲೆಯಲ್ಲಿ ಮಧ್ಯವರ್ತಿಗಳು ನಕಲಿ ದಾಖಲೆಪತ್ರ ಸೃಷ್ಟಿಸಿ ನಿಗಮದ ಸವಲತ್ತು ಕಬಳಿಸುತ್ತಿರುವ ಸಂಗತಿ ತಿಳಿದ ಜಿಲ್ಲಾಧಿಕಾರಿ ಅಕ್ರಮಕ್ಕೆ ಕಡಿವಾಣ ಹಾಕಿರುವುದು ಸ್ವಾಗತಾರ್ಹ. ಮಧ್ಯವರ್ತಿಗಳ ಹಾವಳಿ ತಡೆಗೆ ಪರಿಣಾಮಕಾರಿ ಕ್ರಮ ಕೈಗೊಳ್ಳಬೇಕು’ ಎಂದು ಮನವಿ ಮಾಡಿದರು.

ADVERTISEMENT

‘ಕೆ.ಸಿ ವ್ಯಾಲಿ ಯೋಜನೆಗೆ ಸುಪ್ರೀಂ ಕೋರ್ಟ್ ನೀಡಿರುವ ತಡೆಯಾಜ್ಞೆ ತೆರವುಗೊಳಿಸಲು ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು. ಈ ದಿಸೆಯಲ್ಲಿ ಜಿಲ್ಲೆಯ ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು ಸರ್ಕಾರದ ಮೇಲೆ ಒತ್ತಡ ಹೇರಬೇಕು’ ಎಂದು ಸಲಹೆ ನೀಡಿದರು.

ಕೆಪಿಸಿಸಿ ಎಸ್‍ಸಿ ವಿಭಾಗದ ರಾಜ್ಯ ಸಂಚಾಲಕ ಎಂ.ವಿಜಯಕುಮಾರ್, ಕಾಂಗ್ರೆಸ್ ಎಸ್‍ಸಿ ವಿಭಾಗದ ಜಿಲ್ಲಾ ಸಂಚಾಲಕ ವೆಂಕಟೇಶಪ್ಪ, ಕೋಲಾರ ಗ್ರಾಮಾಂತರ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಬಿ.ರಾಮಚಂದ್ರ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.