ADVERTISEMENT

ಯಾಂತ್ರಿಕ ಜೀವನದಿಂದ ಮಾನಸಿಕ ಒತ್ತಡ

​ಪ್ರಜಾವಾಣಿ ವಾರ್ತೆ
Published 10 ಆಗಸ್ಟ್ 2019, 10:47 IST
Last Updated 10 ಆಗಸ್ಟ್ 2019, 10:47 IST

ಕೋಲಾರ: ‘ಪ್ರಚಲಿತ ಸಮಾಜದಲ್ಲಿ ಪ್ರತಿಯೊಬ್ಬರೂ ಒತ್ತಡದಲ್ಲಿ ಜೀವನ ಸಾಗಿಸುವಂತಾಗಿದ್ದು, ಇದರಿಂದ ಹೊರಬರಲು ವೈದ್ಯರ ಸಲಹೆ ಸೂಚನೆ ಪಾಲಿಸಬೇಕು’ ಎಂದು ಮನೋವೈದ್ಯೆ ಡಾ.ಪಾವನಾ ತಿಳಿಸಿದರು.

ರಾಷ್ಟ್ರೀಯ ಆರೋಗ್ಯ ಯೋಜನೆಗಳ ಕುರಿತು ತಾಲ್ಲೂಕು ಮಟ್ಟದ ಅಧಿಕಾರಿಗಳಿಗೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಇಲ್ಲಿ ಶನಿವಾರ ಹಮ್ಮಿಕೊಂಡಿದ್ದ ಅರಿವು ಕಾರ್ಯಕ್ರಮದಲ್ಲಿ ಮಾತನಾಡಿದರು.

‘ಯಾವ ಪರಿಸ್ಥಿತಿಯನ್ನು ನಮ್ಮ ಹತೋಟಿಗೆ ತೆಗೆದುಕೊಳ್ಳಲು ಸಾಧ್ಯ ಆಗುವುದಿಲ್ಲವೋ ಅದನ್ನು ಒತ್ತಡ ಎನ್ನುತ್ತೇವೆ. ದೇಶದಲ್ಲಿ ಶೇ 86ರಷ್ಟು ಮಂದಿ ಒತ್ತಡದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಒತ್ತಡ ಹೆಚ್ಚಿದರೆ ಆರೋಗ್ಯದ ಮೇಲೆ ದುಷ್ಪರಿಣಾಮ ಆಗುತ್ತದೆ’ ಎಂದು ಹೇಳಿದರು.

ADVERTISEMENT

‘ಬದಲಾಗುತ್ತಿರುವ ಜೀವನ ಶೈಲಿ ಹಾಗೂ ಆಹಾರ ಪದ್ಧತಿಯಿಂದ ಮನುಷ್ಯ ಗಂಭೀರ ಆರೋಗ್ಯ ಸಮಸ್ಯೆ ಎದುರಿಸುತ್ತಿದ್ದಾನೆ. ಯಾಂತ್ರಿಕ ಜೀವನದಿಂದ ಮಾನಸಿಕ ಒತ್ತಡ ಹೆಚ್ಚಿ ಜನ ಕಾಯಿಲೆಗೆ ತುತ್ತಾಗುತ್ತಿದ್ದಾರೆ. ಜನರ ಆಹಾರ ಕ್ರಮ ಮತ್ತು ಜೀವನ ಶೈಲಿ ಬದಲಾದರೆ ರೋಗಮುಕ್ತ ಬದುಕು ಸಾಗಿಸಬಹುದು’ ಎಂದು ಕಿವಿಮಾತು ಹೇಳಿದರು.

‘ಹಣ ಸಂಪಾದನೆ, ಆಸ್ತಿ ಗಳಿಕೆಗಿಂತ ಆರೋಗ್ಯ ಮುಖ್ಯ. ಕೋಟಿಗಟ್ಟಲೇ ಹಣ, ಆಸ್ತಿ ಸಂಪಾದಿಸಿ ಆರೋಗ್ಯವೇ ಸರಿ ಇಲ್ಲದಿದ್ದರೆ ಪ್ರಯೋಜನವಿಲ್ಲ. ಆದ ಕಾರಣ ಆರೋಗ್ಯದ ಕಡೆ ಹೆಚ್ಚು ಗಮನ ಹರಿಸಬೇಕು. ಸಣ್ಣ ಪುಟ್ಟ ಆರೋಗ್ಯ ಸಮಸ್ಯೆ ಎದುರಾದರೂ ನಿರ್ಲಕ್ಷಿಸದೆ ಚಿಕಿತ್ಸೆ ಪಡೆಯಬೇಕು’ ಎಂದು ಸಲಹೆ ನೀಡಿದರು.

ಮುಂಜಾಗ್ರತೆ ವಹಿಸಬೇಕು: ‘ಐಷಾರಾಮಿ ಬದುಕು, ದೈಹಿಕ ಪರಿಶ್ರಮವಿಲ್ಲದ ವೃತ್ತಿ, ಅಸಮತೋಲಿತ ಆಹಾರ ಮತ್ತು ಒತ್ತಡದ ಜೀವನ ಶೈಲಿಯಿಂದ ಜನರಿಗೆ ಆರೋಗ್ಯ ಸಮಸ್ಯೆಗಳು ಕಾಣಿಸಿಕೊಳ್ಳುತ್ತಿವೆ. ಮಾನಸಿಕ ಒತ್ತಡ ನಿವಾರಣೆಗೆ ಪ್ರತಿನಿತ್ಯ ಯೋಗ, ವ್ಯಾಯಾಮ, ವಾಯುವಿಹಾರ ಹಾಗೂ ಧ್ಯಾನ ಮಾಡಬೇಕು. ವೈದ್ಯರ ಬಳಿ ಹೋಗುವ ಬದಲು ಕಾಯಿಲೆ ಬರದಂತೆ ಮುಂಜಾಗ್ರತೆ ವಹಿಸಬೇಕು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.