ADVERTISEMENT

ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ

​ಪ್ರಜಾವಾಣಿ ವಾರ್ತೆ
Published 17 ಮೇ 2022, 11:42 IST
Last Updated 17 ಮೇ 2022, 11:42 IST
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಸಂಜೀವಪ್ಪ ಕೋಲಾರ ತಾಲ್ಲೂಕಿನ ಕ್ಯಾಲನೂರು ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಮಂಗಳವಾರ ಪರಿಶೀಲನೆ ನಡೆಸಿದರು
ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಸಂಜೀವಪ್ಪ ಕೋಲಾರ ತಾಲ್ಲೂಕಿನ ಕ್ಯಾಲನೂರು ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಮಂಗಳವಾರ ಪರಿಶೀಲನೆ ನಡೆಸಿದರು   

ಕೋಲಾರ: ‘ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ಸಿಗುತ್ತಿದ್ದು, ಪೋಷಕರು ಸರ್ಕಾರಿ ಶಾಲೆಗಳಿಗೆ ಮಕ್ಕಳನ್ನು ದಾಖಲಿಸಬೇಕು’ ಎಂದು ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಸಂಜೀವಪ್ಪ ಕಿವಿಮಾತು ಹೇಳಿದರು.

ತಾಲ್ಲೂಕಿನ ಕ್ಯಾಲನೂರು ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಗೆ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿ, ‘ಕೋವಿಡ್‌ನಿಂದ ಆತಂಕದಿಂದ ಜಗತ್ತು ತಲ್ಲಣಗೊಂಡಿದೆ. ಕೋವಿಡ್‌ ನಡುವೆಯೂ ಶಾಲೆಗಳನ್ನು ಆರಂಭಿಸಲಾಗಿದ್ದು, ವಿದ್ಯಾರ್ಥಿಗಳ ಸುರಕ್ಷತೆ ಮುಖ್ಯ. ಈ ವಿಚಾರದಲ್ಲಿ ಶಿಕ್ಷಕರು ನಿರ್ಲಕ್ಷ್ಯ ತೋರಬಾರದು’ ಎಂದು ಸೂಚಿಸಿದರು.

‘ಸರ್ಕಾರ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟ, ಕ್ಷೀರಭಾಗ್ಯ, ಉಚಿತ ಪುಸ್ತಕ, ಸಮವಸ್ತ್ರ ನೀಡುತ್ತಿದೆ. ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣದ ಜತೆಗೆ ಉಚಿತ ಸೌಲಭ್ಯಗಳು ಸಿಗುತ್ತಿದ್ದು, ಪೋಷಕರು ಇದರ ಸದುಪಯೋಗ ಪಡೆಯಬೇಕು. ಕಾನ್ವೆಂಟ್ ವ್ಯಾಮೋಹದಿಂದ ಹೊರಬರಬೇಕು. ಸರ್ಕಾರಿ ಶಾಲೆಗಳಲ್ಲಿ ಓದಿದ ಅನೇಕ ಮಹನೀಯರು ದೇಶದ ಉನ್ನತ ಹುದ್ದೆ ಅಲಂಕರಿಸಿದ್ದಾರೆ. ಇಲ್ಲಿ ನುರಿತ ಶಿಕ್ಷಕರಿದ್ದಾರೆ. ಪೋಷಕರು ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ಕಳುಹಿಸಬೇಕು’ ಎಂದು ಸಲಹೆ ನೀಡಿದರು.

ADVERTISEMENT

‘ಖಾಸಗಿ ಶಾಲೆಗಳ ಪೈಪೋಟಿ ನಡುವೆ ಸರ್ಕಾರಿ ಶಾಲೆಗಳು ಬಲಗೊಳ್ಳಬೇಕಿದೆ. ಸಮಾನ ಶಿಕ್ಷಣದ ಪರಿಕಲ್ಪನೆ ಉಳಿಯಲು, ಪ್ರತಿಯೊಬ್ಬರಿಗೂ ಉಚಿತ ಶಿಕ್ಷಣ ಸಿಗಲು ಸರ್ಕಾರಿ ಶಾಲೆಗಳನ್ನು ಉಳಿಸಿ ಅಭಿವೃದ್ಧಿಪಡಿಸಬೇಕು. ಈ ಕಾರ್ಯಕ್ಕೆ ಸಮಾಜ ಮತ್ತು ಸಮುದಾಯದ ಸಹಕಾರ ಅಗತ್ಯ. ಸರ್ಕಾರಿ ಶಾಲೆಗಳನ್ನು ಉಳಿಸುವ ಪ್ರಯತ್ನಕ್ಕೆ ಉಳ್ಳವರು ನೆರವಿನ ಹಸ್ತ ಚಾಚಬೇಕು’ ಎಂದು ಮನವಿ ಮಾಡಿದರು.

ಕೊಠಡಿ ಕೊರತೆ: ‘ಶಾಲೆಯಲ್ಲಿ ಕೊಠಡಿಗಳ ಕೊರತೆಯಿದ್ದು, ಮಕ್ಕಳಿಗೆ ಸಮಸ್ಯೆಯಾಗುತ್ತಿದೆ. ಹೀಗಾಗಿ ಹೆಚ್ಚುವರಿ ಕೊಠಡಿಗಳನ್ನು ನಿರ್ಮಿಸಿ ಸಮಸ್ಯೆ ಪರಿಹರಿಸಬೇಕು’ ಎಂದು ಶಾಲೆಯ ಎಸ್‌ಡಿಎಂಸಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು ಕೋರಿದರು. ಇದಕ್ಕೆ ಸ್ಪಂದಿಸಿದ ಸಂಜೀವಪ್ಪ, ‘ಹೊಸ ಕೊಠಡಿಗಳ ನಿರ್ಮಾಣ ಮಾಡುತ್ತೇವೆ. ಈ ಸಂಬಂಧ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗೆ ಸೂಚನೆ ನೀಡುತ್ತೇವೆ’ ಎಂದು ಹೇಳಿದರು.

ಶಾಲೆಯ ಮುಖ್ಯ ಶಿಕ್ಷಕ ಓ.ಮಲ್ಲಿಕಾರ್ಜುನ, ಶಿಕ್ಷಕರಾದ ರಾಮಲಿಂಗಪ್ಪ, ಜ್ಯೋತಿ, ಧನ್ಯಕುಮಾರ್, ರಾಮಾಂಜಪ್ಪ, ಶಿವಪ್ಪ, ಸೌಮ್ಯ, ರಾಜೇಶ್, ಭಾಗ್ಯಶ್ರೀ, ರಾಧಿಕಾ ಹಾಜರಿದ್ದರು.

Lok Sabha Elections Results 2024 |ನರೇಂದ್ರ ಮೋದಿ ಅವರ 'ವಿಕಸಿತ ಭಾರತ' ಅಥವಾ ರಾಹುಲ್ ಗಾಂಧಿ ಅವರ ಇಂಡಿಯಾ ಐಕ್ಯ ಭಾರತ? ಜಗತ್ತಿನ ಅತಿದೊಡ್ಡ ಪ್ರಜಾಪ್ರಭುತ್ವದ 18ನೇ ಲೋಕಸಭೆಗೆ ನಡೆದ ಚುನಾವಣೆ ಫಲಿತಾಂಶದ ಕ್ಷಣ ಕ್ಷಣದ ಮಾಹಿತಿ, ವಿಶ್ವಾಸಾರ್ಹ ವಿಶ್ಲೇಷಣೆ, ಅಂಕಿ ಅಂಶಗಳಿಗಾಗಿ ಪ್ರಜಾವಾಣಿ ನೋಡಿ. ಇದರ ಜೊತಗೆ, ಆಂಧ್ರಪ್ರದೇಶ ಮತ್ತು ಒಡಿಶಾ ವಿಧಾನಸಭೆ ಚುನಾವಣೆಯ ಫಲಿತಾಂಶವೂ ಇಲ್ಲೇ ಲಭ್ಯ. ಪ್ರಜಾವಾಣಿಯನ್ನು ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಫಾಲೋ ಮಾಡಲು ಮರೆಯದಿರಿ.