ADVERTISEMENT

ಗಿರಣಿಗಳಲ್ಲಿ ಪಡಿತರ ಅಕ್ಕಿ ತನಿಖೆ ನಡೆಸಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 9 ಜುಲೈ 2021, 3:41 IST
Last Updated 9 ಜುಲೈ 2021, 3:41 IST
ಬಂಗಾರಪೇಟೆಯಲ್ಲಿ ದಲಿತ ರೈತ ಸೇನೆ ಪದಾಧಿಕಾರಿಗಳು ತಹಶೀಲ್ದಾರ್ ಎಂ. ದಯಾನಂದ ಅವರಿಗೆ ಮನವಿ ಸಲ್ಲಿಸಿದರು
ಬಂಗಾರಪೇಟೆಯಲ್ಲಿ ದಲಿತ ರೈತ ಸೇನೆ ಪದಾಧಿಕಾರಿಗಳು ತಹಶೀಲ್ದಾರ್ ಎಂ. ದಯಾನಂದ ಅವರಿಗೆ ಮನವಿ ಸಲ್ಲಿಸಿದರು   

ಬಂಗಾರಪೇಟೆ:ಕಾಳಸಂತೆಯಲ್ಲಿ ಪಡಿತರ ಅಕ್ಕಿ ಮಾರಾಟವಾಗುತ್ತಿದ್ದು, ಅಕ್ಕಿ ಗಿರಣಿಗಳಿಗೆ ಸಾಗಾಣಿಕೆಯಾಗುತ್ತಿದೆ. ಈ ಬಗ್ಗೆ ತನಿಖೆ ನಡೆಸಬೇಕು ಎಂದು ಒತ್ತಾಯಿಸಿ ಕರ್ನಾಟಕ ದಲಿತ ರೈತ ಸೇನೆ ಸದಸ್ಯರು ತಹಶೀಲ್ದಾರ್ ದಯಾನಂದ ಅವರಿಗೆ ಮನವಿ ಸಲ್ಲಿಸಿದರು.

ಬಡವರ ಹಸಿವು ನೀಗಿಸಲು ಸರ್ಕಾರ ಅನ್ನಭಾಗ್ಯ ಯೋಜನೆ ಜಾರಿಗೊಳಿಸಿದೆ. ಆದರೆ, ಬಡವರಿಗೆ ಸಿಗಬೇಕಾದ ಆಹಾರ ಧಾನ್ಯಗಳು ಕಾಳಸಂತೆಯಲ್ಲಿ ಮಾರಾಟವಾಗುತ್ತಿವೆ. ಆಹಾರ ಇಲಾಖೆಯ ಜಂಟಿ ನಿರ್ದೇಶಕರೇ ಈಚೆಗೆ ಪಟ್ಟಣದ ಪಿಆರ್‌ಎಸ್ ಆಗ್ರೋಟೆಕ್ ರೈಸ್‌ಮಿಲ್ ಮೇಲೆ ದಾಳಿ ನಡೆಸಿ ಸಾವಿರಾರು ಚೀಲ ಪಡಿತರ ಅಕ್ಕಿಯನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ ಎಂದರು.

ತಾಲ್ಲೂಕಿನಲ್ಲಿರುವ ಎಲ್ಲಾ ಅಕ್ಕಿ ಗಿರಣಿಗಳು ದಂಧೆ ನಡೆಸುತ್ತಿರುವ ಅನುಮಾನವಿದೆ. ಕೆಲವು ಅಂಗಡಿಗಳಲ್ಲಿ ಆಂಧ್ರಪ್ರದೇಶ, ತಮಿಳುನಾಡಿನಿಂದ ಬರುವ ಅಕ್ಕಿ ಮಾರಾಟ ಮಾಡುತ್ತಿರುವುದು ಕಂಡುಬಂದಿದೆ ಎಂದು ದೂರಿದರು.

ADVERTISEMENT

ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮಕೈಗೊಂಡು ಪರವಾನಗಿ ರದ್ದುಪಡಿಸಬೇಕು ಎಂದು ರಾಜ್ಯ ಘಟಕದ ಅಧ್ಯಕ್ಷ ಹುಣಸನಹಳ್ಳಿ ಎನ್. ವೆಂಕಟೇಶ್ ಒತ್ತಾಯಿಸಿದರು.

ಮನವಿ ಸ್ವೀಕರಿಸಿದ ತಹಶೀಲ್ದಾರ್ ಎಂ. ದಯಾನಂದ, ಈ ಬಗ್ಗೆ ಈಗಾಗಲೇ ಹಲವು ದೂರುಗಳು ಬಂದಿವೆ. ತನಿಖೆ ಮಾಡಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದೆಂದು ಭರವಸೆ ನೀಡಿದ್ದಾರೆ ಎಂದರು.

ಜೀವಿಕ ರಾಮಚಂದ್ರಪ್ಪ, ಕರ್ನಾಟಕ ದಲಿತ ರೈತ ಸೇನೆಯ ಮಾರಿ, ಗಣೇಶ್, ಕ್ಯಾಸಂಬಳ್ಳಿ ಲೋಕೇಶ್, ಆನಂದ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.