ADVERTISEMENT

ರೈತ ವಿರೋಧಿ ಕಾಯ್ದೆ ತಿದ್ದುಪಡಿ ರದ್ದುಗೊಳಿಸಿ: ಕೃಷಿಕರ ಒತ್ತಾಯ

​ಪ್ರಜಾವಾಣಿ ವಾರ್ತೆ
Published 26 ಸೆಪ್ಟೆಂಬರ್ 2020, 2:10 IST
Last Updated 26 ಸೆಪ್ಟೆಂಬರ್ 2020, 2:10 IST
ಬಂಗಾರಪೇಟೆಯಲ್ಲಿ ರಾಜ್ಯ ರೈತ ಸಂಘದ ಸದಸ್ಯರು ಶುಕ್ರವಾರ ಪ್ರತಿಭಟನೆ ನಡೆಸಿದರು
ಬಂಗಾರಪೇಟೆಯಲ್ಲಿ ರಾಜ್ಯ ರೈತ ಸಂಘದ ಸದಸ್ಯರು ಶುಕ್ರವಾರ ಪ್ರತಿಭಟನೆ ನಡೆಸಿದರು   

ಬಂಗಾರಪೇಟೆ: ರೈತವಿರೋಧಿ ಕಾಯ್ದೆಗಳ ತಿದ್ದುಪಡಿ ಹಿಂಪಡೆಯಬೇಕು ಎಂದು ಆಗ್ರಹಿಸಿ ರೈತ ಸಂಘದ ಸದಸ್ಯರು ಪಟ್ಟಣದ ತಾಲ್ಲೂಕು ಕಚೇರಿ ಎದುರು ಶುಕ್ರವಾರ ಪ್ರತಿಭಟನೆನಡೆಸಿದರು.

ಭೂ ಸುಧಾರಣಾ, ಎಪಿಎಂಸಿ ತಿದ್ದುಪಡಿ ಮತ್ತು ವಿದ್ಯುತ್ ಕಾಯ್ದೆ ತಿದ್ದುಪಡಿಗಳನ್ನು ಸರ್ಕಾರ ಸುಗ್ರೀವಾಜ್ಞೆ ಮೂಲಕ ಜಾರಿಗೊಳಿಸಿದೆ. ಈ ಬಗ್ಗೆ ಯಾವುದೇ ವಿಷಯ ಚರ್ಚಿಸದೆ ಏಕಾಏಕಿ ಜಾರಿಮಾಡಿದ್ದು ಖಂಡನೀಯ. ಈ ಮೂಲಕ ಸರ್ಕಾರ ಕಾರ್ಪೊರೇಟ್ ಕಂಪನಿಗಳ
ಪರ ನಿಲ್ಲುವ ಹುನ್ನಾರ ನಡೆಸಿದೆ. ರೈತರು, ಕಾರ್ಮಿಕರನ್ನು ಕಡೆಗಣಿಸಿದೆ. ಎಂದು ಪ್ರತಿಭಟನಕಾರರು ಆಕ್ರೋಶ ವ್ಯಕ್ತಪಡಿಸಿದರು.

‌ಭೂ ಸುಧಾರಣಾ ಕಾಯ್ದೆ ತಿದ್ದುಪಡಿ ಮಾಡುವ ಮೂಲಕ ಕೃಷಿ ಜಮೀನಿನ ಮೇಲೆ ಕಪ್ಪು ಹಣ ಹೂಡಿಕೆ ಮಾಡಲು ಅನುವು ಮಾಡಿದೆ. ರೈತರ ಹೆಸರಿನಲ್ಲಿ ಬಂಡವಾಳಶಾಹಿಗಳಿಗೆ, ಕಾರ್ಮಿಕರ ಹೆಸರಲ್ಲಿ ಕೈಗಾರಿಕೋದ್ಯಮಿಗಳಿಗೆ ಪರೋಕ್ಷವಾಗಿ ಸಹಕಾರ ನೀಡುತ್ತಿದೆ ಎಂದು ಪ್ರತಿಭಟನಕಾರರು ದೂರಿದರು.

ADVERTISEMENT

ವಿದ್ಯುತ್ ಕಂಪನಿಗಳ ಖಾಸಗೀಕರಣಕ್ಕೆ ಸರ್ಕಾರ ಮುಂದಾಗಿದೆ. ಇದರಿಂದ ರೈತರಿಗೆ ಸಿಗುತ್ತಿರುವ ಉಚಿತ ಹಾಗೂ ಸಬ್ಸಿಡಿ ವಿದ್ಯುತ್ ಸೌಲಭ್ಯ ಸ್ಥಗಿತಗೊಳ್ಳಲಿದೆ. ಉತ್ಪಾದನಾ ವೆಚ್ಚ ಏರಿಕೆಯಾಗಲಿದ್ದು, ಆ ಹೊರೆಯನ್ನು ರೈತರ ಮೇಲೆ ಹೇರಲಾಗುತ್ತದೆ. ಇಂತಹ ಕಾಯ್ದೆಗಳನ್ನು ಜಾರಿ ಮಾಡುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು. ‌

ತಿದ್ದುಪಡಿ ವಾಪಸ್‌ ಪಡೆಯುವಂತೆ ಒತ್ತಾಯಿಸಿ ಉಪ ತಹಶೀಲ್ದಾರ್ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.

ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಐತಾಂಡಹಳ್ಳಿ ಮಂಜುನಾಥ್, ಹುಣಸನಹಳ್ಳಿ ವೆಂಕಟೇಶ್, ವಿ.ಅಮರೇಶ್, ಕೆ.ವಿ.ಶ್ರೀನಿವಾಸ್, ಕೆ.ಪ್ರಕಾಶ್, ಇಲಿಯಾಜ್ ಖಾನ್‌, ಮುನೇಗೌಡ, ವೆಂಕಟರಾಮಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.