ADVERTISEMENT

ಪ್ರತಿಕೃತಿ ದಹನ: ಸರ್ಕಾರದ ವಿರುದ್ಧ ಆಕ್ರೋಶ

ರೈತ ಮುಖಂಡರ ಬಂಧನ ಖಂಡಿಸಿ ರೈತ ಸಂಘ ಸದಸ್ಯರ ಧರಣಿ

​ಪ್ರಜಾವಾಣಿ ವಾರ್ತೆ
Published 24 ಸೆಪ್ಟೆಂಬರ್ 2020, 14:22 IST
Last Updated 24 ಸೆಪ್ಟೆಂಬರ್ 2020, 14:22 IST
ರೈತ ವಿರೋಧಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ಮಾಡುತ್ತಿದ್ದ ರೈತ ಮುಖಂಡರನ್ನು ಬಂಧಿಸಿರುವ ಕ್ರಮ ಖಂಡಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸದಸ್ಯರು ಕೋಲಾರದಲ್ಲಿ ಗುರುವಾರ ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪರ ಪ್ರತಿಕೃತಿ ದಹಿಸಿ ಧರಣಿ ನಡೆಸಿದರು.
ರೈತ ವಿರೋಧಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ಮಾಡುತ್ತಿದ್ದ ರೈತ ಮುಖಂಡರನ್ನು ಬಂಧಿಸಿರುವ ಕ್ರಮ ಖಂಡಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸದಸ್ಯರು ಕೋಲಾರದಲ್ಲಿ ಗುರುವಾರ ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪರ ಪ್ರತಿಕೃತಿ ದಹಿಸಿ ಧರಣಿ ನಡೆಸಿದರು.   

ಕೋಲಾರ: ಸದನದಲ್ಲಿ ಮಂಡಿಸಿರುವ ರೈತ ವಿರೋಧಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ಮಾಡುತ್ತಿದ್ದ ರೈತರು ಮತ್ತು ರೈತ ಮುಖಂಡರನ್ನು ಬಂಧಿಸಿರುವ ಕ್ರಮ ಖಂಡಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ (ಪ್ರೊ.ನಂಜುಂಡಸ್ವಾಮಿ ಬಣ) ಸದಸ್ಯರು ಇಲ್ಲಿ ಗುರುವಾರ ಧರಣಿ ನಡೆಸಿದರು.

ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಪ್ರತಿಕೃತಿ ದಹಿಸಿದ ಧರಣಿನಿರತರು ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

‘ರೈತ ವಿರೋಧಿ ಕಾಯ್ದೆಗಳನ್ನು ಹಿಂಪಡೆಯುವಂತೆ ಮತ್ತು ರೈತರ ಹಕ್ಕುಗಳ ರಕ್ಷಣೆಗಾಗಿ ನ್ಯಾಯಯುತ ರೀತಿಯಲ್ಲಿ ಹೋರಾಟ ಮಾಡುತ್ತಿದ್ದ ರೈತ ಮುಖಂಡರನ್ನು ಪೊಲೀಸರು ಬಂಧಿಸಿದ್ದಾರೆ. ಸರ್ಕಾರ ಪೊಲೀಸ್‌ ಬಲ ಬಳಸಿ ರೈತರ ಹೋರಾಟ ಹತ್ತಿಕ್ಕುವ ಪ್ರಯತ್ನ ಮಾಡುತ್ತಿದೆ’ ಎಂದು ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ರಾಮುಶಿವಣ್ಣ ಆರೋಪಿಸಿದರು.

ADVERTISEMENT

‘ಬಂಡವಾಳಶಾಹಿಗಳು, ಕಾರ್ಪೊರೇಟ್‌ ಕಂಪನಿಗಳು ಹಾಗೂ ಹಣವಂತ ರಾಜಕಾರಣಿಗಳಿಗೆ ಅನುಕೂಲ ಮಾಡಿಕೊಡಲು ಸರ್ಕಾರ ರೈತ ವಿರೋಧಿ ಕಾಯ್ದೆಗಳನ್ನು ಜಾರಿಗೊಳಿಸುತ್ತಿದೆ. ಈ ಜನ ವಿರೋಧಿ ನಡೆಯಿಂದ ರೈತ ಕುಲವು ತಬ್ಬಲಿಯಾಗುವ ದುಸ್ಥಿತಿ ಬರಲಿದೆ. ಸರ್ಕಾರಗಳು ಕೃಷಿ ಕ್ಷೇತ್ರ ನಾಶ ಮಾಡಿ ಆಹಾರ ಭದ್ರತೆಗಾಗಿ ಹೊರ ದೇಶಗಳತ್ತ ಕೈಚಾಚುವ ಪರಿಸ್ಥಿತಿ ಸೃಷ್ಟಿಸುತ್ತಿವೆ’ ಎಂದು ಕಳವಳ ವ್ಯಕ್ತಪಡಿಸಿದರು.

ನೈತಿಕತೆಯಿಲ್ಲ: ‘ರಾಜ್ಯ ಸರ್ಕಾರ ರೈತರ ಬೇಡಿಕೆಗಳಿಗೆ ಸ್ಪಂದಿಸುವುದನ್ನು ಬಿಟ್ಟು ಪೊಲೀಸ್‌ ಬಳಸಿಕೊಂಡು ರೈತ ಮುಖಂಡರ ಮೇಲೆ ದೌರ್ಜನ್ಯ ನಡೆಸಿದೆ. ಹೋರಾಟಗಾರರನ್ನು ಬಂಧಿಸಿ ಸದನದಲ್ಲಿ ರೈತ ವಿರೋಧಿ ಕಾಯ್ದೆಗಳನ್ನು ಮಂಡಿಸಿ ತುಘಲಕ್‌ ದರ್ಬಾರ್‌ ನಡೆಸುತ್ತಿದೆ. ಲಜ್ಜೆಗೆಟ್ಟ ಈ ಸರ್ಕಾರದಲ್ಲಿ ಅಧಿಕಾರದಲ್ಲಿ ಮುಂದುವರಿಯುವ ನೈತಿಕತೆಯಿಲ್ಲ’ ಎಂದು ಧರಣಿನಿರತರು ಕಿಡಿಕಾರಿದರು.

‘ಸರ್ಕಾರ ರೈತರನ್ನು ಬೀದಿಗೆ ತಳ್ಳಿ ರಿಯಲ್‌ ಎಸ್ಟೇಟ್‌ ಉದ್ಯಮಿಗಳ ಹಿತ ಕಾಯಲು ಹೊರಟಿದೆ. ರಿಯಲ್‌ ಎಸ್ಟೇಟ್‌ ಉದ್ಯಮಿಗಳ ಕೈಗೊಂಬೆಯಾಗಿರುವ ಸರ್ಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿದ್ದು, ಸಣ್ಣ ಭೂ ಹಿಡುವಳಿದಾರರು ಭೂಮಿ ಕಳೆದುಕೊಳ್ಳುವ ಆತಂಕ ಎದುರಾಗಿದೆ’ ಎಂದು ದೂರಿದರು.

‘ಜಿಲ್ಲೆಯ ಎಲ್ಲಾ ಶಾಸಕರು ಪಕ್ಷಾತೀತವಾಗಿ ರೈತರ ವಿರೋಧಿ ಶಾಸನಗಳ ವಿರುದ್ಧ ಧ್ವನಿ ಎತ್ತಬೇಕು. ರೈತರು, ಕಾರ್ಮಿಕರು, ಬಡ ಜನರ ಪರವಾಗಿ ಕಾಯ್ದೆಗಳನ್ನು ರೂಪಿಸುವಂತೆ ಒತ್ತಾಯಿಸಬೇಕು. ಇಲ್ಲವಾದರೆ ಜಿಲ್ಲೆಯ ಎಲ್ಲಾ ಶಾಸಕರ ಮನೆ ಮುಂದೆ ಹೋರಾಟ ನಡೆಸುತ್ತೇವೆ’ ಎಂದು ಎಚ್ಚರಿಕೆ ನೀಡಿದರು.

ಸಂಘಟನೆಯ ಜಿಲ್ಲಾ ಘಟಕದ ಉಪಾಧ್ಯಕ್ಷ ನಂದಕುಮಾರ್, ಕಾರ್ಯಾಧ್ಯಕ್ಷ ಗಣೇಶ್, ಸದಸ್ಯರಾದ ಗೋಪಾಲಕೃಷ್ಣಮೂರ್ತಿ, ಚಂದ್ರಣ್ಣ, ವಿವಿಧ ತಾಲ್ಲೂಕು ಘಟಕದ ಅಧ್ಯಕ್ಷರು ಪಾಲ್ಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.