ಕೋಲಾರ: ಈ ಬಾರಿ ಗಣರಾಜ್ಯೋತ್ಸವ ಸಮಾರಂಭವನ್ನು ಅದ್ದೂರಿ ಹಾಗೂ ಅಚ್ಚುಕಟ್ಟಾಗಿ ಆಚರಿಸಲು ಅಧಿಕಾರಿಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಹೆಚ್ಚುವರಿ ಜಿಲ್ಲಾಧಿಕಾರಿ ಎಸ್.ಎಂ.ಮಂಗಳಾ ಸೂಚನೆ ನೀಡಿದರು.
ಜಿಲ್ಲಾಡಳಿತ ಭವನ ಕಚೇರಿ ಸಭಾಂಗಣದಲ್ಲಿ 76ನೇ ಗಣರಾಜ್ಯೋತ್ಸ ಆಚರಣೆ ಸಂಬಂಧ ಹಮ್ಮಿಕೊಂಡಿದ್ದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
‘ಸಮಾರಂಭವನ್ನು ಅತ್ಯಂತ ಸಡಗರ, ಸಂಭ್ರಮದಿಂದ ಆಚರಿಸಲಾಗುವುದು. ಜ.26ರಂದು ಬೆಳಗ್ಗೆ 9 ಗಂಟೆಗೆ ಸರ್ ಎಂ.ವಿಶ್ವೇಶ್ವರಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ ಧ್ವಜಾರೋಹಣ ನೆರವೇರಿಸಲಿದ್ದಾರೆ. ಶಾಲಾ ಮಕ್ಕಳು, ಎನ್‍ಸಿಸಿ, ಪೊಲೀಸ್ ಇಲಾಖೆ, ಸ್ಕೌಟ್ಸ್ ಮತ್ತು ಗೈಡ್ಸ್ ಮಕ್ಕಳಿಂದ ಆಕರ್ಷಕ ಪಥಸಂಚಲನ, ನಾನಾ ಶಾಲಾ ಮಕ್ಕಳಿಂದ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಡಲು ಕ್ರಮವಹಿಸಿ’ ಎಂದು ನಿರ್ದೇಶನ ನೀಡಿದರು.
‘ಕ್ರೀಡಾಂಗಣದ ಸ್ವಚ್ಛತೆ, ವೇದಿಕೆ, ಶಾಮಿಯಾನ, ಆಸನ ವ್ಯವಸ್ಥೆ ಕುರಿತಂತೆ ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಅಗತ್ಯ ಸಿದ್ಧತೆ ಕೈಗೊಳ್ಳಬೇಕು. ನಾಡಗೀತೆ, ರೈತಗೀತೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಪ್ರಸ್ತುತಪಡಿಸಬೇಕು. ಕಾರ್ಯಕ್ರಮದ ಸಂದರ್ಭದಲ್ಲಿ ವಿದ್ಯುತ್ ಅಡಚಣೆಯಾಗದಂತೆ ನೋಡಿಕೊಳ್ಳಬೇಕು. ಸಾರ್ವಜನಿಕ ಅಹಿತಕರ ಘಟನೆ ನಡೆಯದಂತೆ ಪೊಲೀಸ್ ಇಲಾಖೆ ಅಗತ್ಯ ಬಂದೋಬಸ್ತ್ ಕೈಗೊಳ್ಳಬೇಕು. ಯಾವುದೇ ಅವಘಡ ಸಂಭವಿಸದಂತೆ ಅಗ್ನಿಶಾಮಕ ದಳ ಎಚ್ಚರವಹಿಸಬೇಕು’ ಎಂದು ಅವರು ಸಂಬಂಧಿಸಿದ ಅಧಿಕಾರಿಗಳಿಗೆ ತಿಳಿಸಿದರು.
‘ಕಾರ್ಯಕ್ರಮದಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡಬೇಕು. ಆರೋಗ್ಯ ಇಲಾಖೆಯು ಅಂಬ್ಯುಲೆನ್ಸ್ ವ್ಯವಸ್ಥೆ ಮತ್ತು ಪ್ರಥಮ ಚಿಕಿತ್ಸಾ ಕೇಂದ್ರ ತೆರೆಯಬೇಕು. ಆಯಾ ಇಲಾಖೆಗಳಿಗೆ ವಹಿಸಿಕೊಟ್ಟ ಕಾರ್ಯಕ್ರಮದ ಜವಾಬ್ದಾರಿಗಳನ್ನು ಬಹಳ ಅಚ್ಚುಕಟ್ಟಾಗಿ ನಿರ್ವಹಿಸಬೇಕು’ ಎಂದು ತಾಕೀತು ಮಾಡಿದರು.
‘ಪ್ರತಿ ಕಚೇರಿಯ ಮುಂದೆ ಜ. 26ರಂದು ಬೆಳಿಗ್ಗೆ 8 ಗಂಟೆಗೆ ಕಡ್ಡಾಯವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಬೇಕು. ಧ್ವಜ ಸಂಹಿತೆ ಅನುಸಾರವಾಗಿ ಧ್ವಜಾರೋಹಣ ಮಾಡಬೇಕು. ಧ್ವಜದ ನಿಯಮ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಪ್ರವೀಣ್ ಪಿ.ಬಾಗೇವಾಡಿ, ಅಬಕಾರಿ ಉಪ ಆಯುಕ್ತೆರಾ ಸಯೀದಾ ಆಜ್ಮತ್ ಅಫ್ರೀನ್, ಡಿವೈಎಸ್‍ಪಿ ಮಂಜುನಾಥ್, ಕೋಲಾರ ತಾಲ್ಲೂಕು ತಹಶೀಲ್ದಾರ್ ನಯನಾ, ಶಿಕ್ಷಣ ಇಲಾಖೆಯ ಉಪನಿರ್ದೇಶಕ ಕೃಷ್ಣಮೂರ್ತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ವಿಜಯಲಕ್ಷ್ಮಿ, ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಸಿಬ್ಬಂದಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.