ADVERTISEMENT

ಒತ್ತುವರಿ ತೆರವಿಗೆ ಮನವಿ ಸಲ್ಲಿಕೆ

​ಪ್ರಜಾವಾಣಿ ವಾರ್ತೆ
Published 17 ಮೇ 2019, 12:39 IST
Last Updated 17 ಮೇ 2019, 12:39 IST

ಕೋಲಾರ: ತಾಲ್ಲೂಕಿನ ಹುತ್ತೂರು ಹೋಬಳಿ ವ್ಯಾಪ್ತಿಯ ಗ್ರಾಮಗಳಲ್ಲಿನ ಸರ್ಕಾರಿ ಜಮೀನು ಒತ್ತುವರಿ ತೆರವುಗೊಳಿಸುವಂತೆ ಒತ್ತಾಯಿಸಿ ರಾಜ್ಯ ರೈತ ಸೇನೆ ಸದಸ್ಯರು ಇಲ್ಲಿ ಶುಕ್ರವಾರ ಕಂದಾಯ ಇಲಾಖೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.

‘ಖಾಸಗಿ ವ್ಯಕ್ತಿಗಳು ನಕಲಿ ದಾಖಲೆಪತ್ರ ಸೃಷ್ಟಿಸಿ ಕೋಟ್ಯಂತರ ರೂಪಾಯಿ ಬೆಲೆ ಬಾಳುವ ಸರ್ಕಾರಿ ಜಮೀನು ಒತ್ತುವರಿ ಮಾಡಿದ್ದಾರೆ. ಈ ಅಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧಿಕಾರಿಗಳು ಶಾಮೀಲಾಗಿದ್ದಾರೆ’ ಎಂದು ಸದಸ್ಯರು ಆರೋಪಿಸಿದರು.

‘ಗ್ರಾಮಗಳಲ್ಲಿನ ಸ್ಮಶಾನ, ರಾಜಕಾಲುವೆ, ಗುಂಡು ತೋಪು, ಕೆರೆ ಕೋಡಿ ಬಳಿಯಿರುವ ಜಮೀನನ್ನು ಖಾಸಗಿ ವ್ಯಕ್ತಿಗಳು ಅತಿಕ್ರಮಿಸಿಕೊಂಡಿದ್ದಾರೆ. ಈ ಸಂಗತಿ ಗೊತ್ತಿದ್ದರೂ ಅಧಿಕಾರಿಗಳು ಒತ್ತುವರಿ ತೆರವುಗೊಳಿಸದೆ ಮೌನಕ್ಕೆ ಶರಣಾಗಿದ್ದಾರೆ’ ಎಂದು ಸಂಘಟನೆಯ ಜಿಲ್ಲಾ ಘಟಕದ ಅಧ್ಯಕ್ಷ ಕೆ.ವೈ.ಗಣೇಶ್‌ಗೌಡ ದೂರಿದರು.

ADVERTISEMENT

‘ಒತ್ತುವರಿ ತೆರವುಗೊಳಿಸುವಂತೆ ಗ್ರಾ.ಪಂ ಅಧಿಕಾರಿಗಳಿಗೆ ಸಾಕಷ್ಟು ಬಾರಿ ದೂರು ಕೊಟ್ಟಿದ್ದೇವೆ. ಆದರೆ. ಒತ್ತುವರಿದಾರರ ಕೈಗೊಂಬೆಯಾಗಿರುವ ಅಧಿಕಾರಿಗಳು ಲಂಚದಾಸೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಸರ್ಕಾರಿ ಜಮೀನು ರಕ್ಷಿಸಬೇಕಾದ ಅಧಿಕಾರಿಗಳೇ ಜಮೀನಿನ ಒತ್ತುವರಿಗೆ ಅವಕಾಶ ಮಾಡಿಕೊಟ್ಟಿದ್ದಾರೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಹೋರಾಟ ನಡೆಸುತ್ತೇವೆ: ‘ಕೆಲ ಜನಪ್ರತಿನಿಧಿಗಳು ಒತ್ತುವರಿದಾರರ ರಕ್ಷಣೆಗೆ ನಿಂತಿದ್ದಾರೆ. ಒತ್ತುವರಿದಾರರು ಹಣ ಬಲ ಹಾಗೂ ರಾಜಕೀಯ ಬಲದಿಂದ ಸರ್ಕಾರಿ ಭೂಮಿ ಅತಿಕ್ರಮಿಸಿಕೊಂಡು ರಿಯಲ್‌ ಎಸ್ಟೇಟ್‌ ದಂಧೆ ನಡೆಸುತ್ತಿದ್ದಾರೆ. ಕಂದಾಯ ಇಲಾಖೆ ಹಿರಿಯ ಅಧಿಕಾರಿಗಳು ಈ ಬಗ್ಗ ಗಮನಹರಿಸಿ ಒತ್ತುವರಿ ತೆರವುಗೊಳಿಸದಿದ್ದರೆ ತಾಲ್ಲೂಕು ಕಚೇರಿ ಎದುರು ಹೋರಾಟ ನಡೆಸುತ್ತೇವೆ’ ಎಂದು ಸಂಘಟನೆ ಸದಸ್ಯರು ಎಚ್ಚರಿಕೆ ನೀಡಿದರು.

ಸಂಘಟನೆ ಸದಸ್ಯರಾದ ಕೆ.ಬಿ.ಮುನಿವೆಂಕಟಪ್ಪ, ಮುಜಿಬ್‌ ಪಾಷಾ, ಕೃಷ್ಣಪ್ಪ, ನಾರಾಯಣಸ್ವಾಮಿ, ಮಂಜುನಾಥ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.