ADVERTISEMENT

ಕೋಲಾರ: ಕೋವಿಡ್‌ ಪರೀಕ್ಷೆಗೆ ಮನವಿ ಸಲ್ಲಿಕೆ

​ಪ್ರಜಾವಾಣಿ ವಾರ್ತೆ
Published 15 ಜುಲೈ 2020, 14:53 IST
Last Updated 15 ಜುಲೈ 2020, 14:53 IST
ಹೊರ ಜಿಲ್ಲೆ ಹಾಗೂ ಹೊರ ರಾಜ್ಯದಿಂದ ಜಿಲ್ಲೆಗೆ ಬರುವ ವ್ಯಕ್ತಿಗಳಿಗೆ ಕಡ್ಡಾಯವಾಗಿ ಕೋವಿಡ್‌ ಪರೀಕ್ಷೆ ಮಾಡುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸದಸ್ಯರು ಕೋಲಾರದಲ್ಲಿ ಬುಧವಾರ ತಹಶೀಲ್ದಾರ್‌ ಕಚೇರಿ ಶಿರಸ್ತೇದಾರ್ ಕೊಂಡಪ್ಪ ಅವರಿಗೆ ಮನವಿ ಸಲ್ಲಿಸಿದರು.
ಹೊರ ಜಿಲ್ಲೆ ಹಾಗೂ ಹೊರ ರಾಜ್ಯದಿಂದ ಜಿಲ್ಲೆಗೆ ಬರುವ ವ್ಯಕ್ತಿಗಳಿಗೆ ಕಡ್ಡಾಯವಾಗಿ ಕೋವಿಡ್‌ ಪರೀಕ್ಷೆ ಮಾಡುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸದಸ್ಯರು ಕೋಲಾರದಲ್ಲಿ ಬುಧವಾರ ತಹಶೀಲ್ದಾರ್‌ ಕಚೇರಿ ಶಿರಸ್ತೇದಾರ್ ಕೊಂಡಪ್ಪ ಅವರಿಗೆ ಮನವಿ ಸಲ್ಲಿಸಿದರು.   

ಕೋಲಾರ: ಹೊರ ಜಿಲ್ಲೆ ಹಾಗೂ ಹೊರ ರಾಜ್ಯದಿಂದ ಜಿಲ್ಲೆಗೆ ಬರುವ ವ್ಯಕ್ತಿಗಳಿಗೆ ಕಡ್ಡಾಯವಾಗಿ ಕೋವಿಡ್‌ ಪರೀಕ್ಷೆ ನಡೆಸುವಂತೆ ಒತ್ತಾಯಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸದಸ್ಯರು ಇಲ್ಲಿ ಬುಧವಾರ ತಹಶೀಲ್ದಾರ್‌ ಕಚೇರಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.

‘ಕೊರೊನಾ ಸೋಂಕಿನ ಭೀತಿ ಹಿನ್ನೆಲೆಯಲ್ಲಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಲಾಕ್‌ಡೌನ್‌ ಘೋಷಿಸಲಾಗಿದೆ. ಬೆಂಗಳೂರಿನಲ್ಲಿರುವ ಜಿಲ್ಲೆಯ ಜನರು ಹಿಂದಿರುಗುತ್ತಿದ್ದು, ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಆತಂಕ ಹೆಚ್ಚಿದೆ. ಹೀಗಾಗಿ ಅವರ ಆರೋಗ್ಯ ತಪಾಸಣೆ ಮಾಡಬೇಕು’ ಎಂದು ಸಂಘಟನೆ ಸದಸ್ಯರು ಕೋರಿದರು.

‘ರಾಜ್ಯದ ರಾಜಧಾನಿ ಬೆಂಗಳೂರಿಗೆ ಹತ್ತಿರದಲ್ಲಿರುವ ಜಿಲ್ಲೆಯಲ್ಲಿ ಈಗಾಗಲೇ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಹೆಚ್ಚಿದೆ. ಇಂತಹ ಸಂದಿಗ್ಧ ಸ್ಥಿತಿಯಲ್ಲಿ ಬೆಂಗಳೂರು ಹಾಗೂ ಹೊರ ಜಿಲ್ಲೆಯ ಜನರು ಹಳ್ಳಿಗಳಿಗೆ ಮರಳಿರುವುದರಿಂದ ಪರಿಸ್ಥಿತಿ ಮತ್ತಷ್ಟು ಗಂಭೀರವಾಗಿದೆ’ ಎಂದು ಸಂಘಟನೆಯ ರಾಜ್ಯ ಘಟಕದ ಉಪಾಧ್ಯಕ್ಷ ಕೆ.ನಾರಾಯಣಗೌಡ ಹೇಳಿದರು.

ADVERTISEMENT

‘ಈ ಹಿಂದೆ ಸುಮಾರು 2 ತಿಂಗಳು ಲಾಕ್‌ಡೌನ್‌ ಜಾರಿ ಮಾಡಿದರೂ ಕೊರೊನಾ ಸೋಂಕಿನ ನಿಯಂತ್ರಣ ಸಾಧ್ಯವಾಗಿಲ್ಲ. ಆರೋಗ್ಯ ಇಲಾಖೆಯು ಬೆಂಗಳೂರಿನಿಂದ ಜಿಲ್ಲೆಗೆ ಬರುತ್ತಿರುವ ಜನರ ಆರೋಗ್ಯ ತಪಾಸಣೆ ಮಾಡುತ್ತಿಲ್ಲ. ಮತ್ತೊಂದೆಡೆ ಜಿಲ್ಲೆಯಲ್ಲಿ ಕೋವಿಡ್‌ ಮಾರ್ಗಸೂಚಿ ಕಟ್ಟುನಿಟ್ಟಾಗಿ ಪಾಲನೆಯಾಗುತ್ತಿಲ್ಲ’ ಎಂದು ದೂರಿದರು.

ನಿಗಾ ವಹಿಸಬೇಕು: ‘ನಗರ, ಪಟ್ಟಣ ಹಾಗೂ ಗ್ರಾಮೀಣ ಪ್ರದೇಶದಲ್ಲಿಮನೆ ಮನೆಗೆ ತೆರಳಿ ಜನರ ಆರೋಗ್ಯ ತಪಾಸಣೆ ಮಾಡಬೇಕು. ಮುಖ್ಯವಾಗಿ ಬೆಂಗಳೂರು ಮತ್ತು ಹೊರ ಜಿಲ್ಲೆಗಳಿಂದ ಬಂದವರಿಗೆ ಕೋವಿಡ್‌ ಪರೀಕ್ಷೆ ಮಾಡಬೇಕು. ಕೊರೊನಾ ಸೋಂಕಿನ ಪ್ರಮಾಣ ಹೆಚ್ಚಿರುವ ಪ್ರದೇಶಗಳಲ್ಲಿ ಹೆಚ್ಚು ನಿಗಾ ವಹಿಸಬೇಕು. ಜಿಲ್ಲೆಗೆ ಬರುವವರನ್ನು ಗಡಿ ಭಾಗದಲ್ಲೇ ತಡೆದು ಕ್ವಾರಂಟೈನ್ ಮಾಡಬೇಕು’ ಎಂದು ಸಂಘಟನೆ ಸದಸ್ಯರು ಒತ್ತಾಯಿಸಿದರು.

ಸಂಘಟನೆಯ ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಎ.ನಳಿನಿಗೌಡ, ಸದಸ್ಯರಾದ ತಿಮ್ಮಣ್ಣ, ವೆಂಕಟೇಶಪ್ಪ, ಮಂಜುನಾಥ್, ಭಾರ್ಗವ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.