ಕೋಲಾರ: ಕೊರೋನ ವೈರಸ್ ನಿಯಂತ್ರಣಕ್ಕೆ ಬರುವವರೆಗೂ ಕೃಷಿ ಕಾರ್ಮಿಕರಿಗೆ ಮಾಸಿಕವಾಗಿ ₹ 10 ಸಾವಿರ ಹಾಗೂ ಅಗತ್ಯವಿರುವ ವಸ್ತುಗಳನ್ನು ಉಚಿತವಾಗಿ ವಿತರಿಸಬೇಕು ಎಂದು ಒತ್ತಾಯಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸದಸ್ಯರು ಉಪ ವಿಭಾಗಾಧಿಕಾರಿ ಸೋಮಶೇಖರ್‌ಗೆ ಇತ್ತೀಚಿಗೆ ಮನವಿ ಸಲ್ಲಿಸಿದರು.
ಸಂಘದ ರಾಜ್ಯ ಘಟಕದ ಉಪಾಧ್ಯಕ್ಷ ಕೆ.ನಾರಾಯಣಗೌಡ ಮಾತನಾಡಿ, ‘ಕೊರೋನ ವೈರಸ್ ಭೀತಿಯಿಂದ ಇಡೀ ದೇಶವೇ ತತ್ತರಿ ಹೋಗಿದ್ದು, ಪ್ರತಿ ಕ್ಷೇತ್ರದ ಮೇಲೂ ಪರಿಣಾಮ ಬೀರಿದೆ. ಕೂಲಿ ಮಾಡಿ ಜೀವನ ನಡೆಸುತ್ತಿದ್ದ ಕೃಷಿ ಕಾರ್ಮಿಕರು ಊಟಕ್ಕಾಗಿ ಹಲೆದಾಡುವ ಪರಿಸ್ಥಿತಿ ನಿರ್ಮಾಣವಾಗಿದೆ’ ಎಂದು ಬೇಸರ ವ್ಯಕ್ತಪಡಿಸಿದರು.
‘ಕೊರೋನ ವೈರಸ್ ನಿಯಂತ್ರಣಕ್ಕೆ ಸರ್ಕಾರಗಳು ರಾಜ್ಯವನ್ನು ಲಾಕ್ ಡೌನ್ ಮಾಡಿವೆ. ಇದಕ್ಕೆ ಸಾರ್ವಜನಿಕರು ಸಹ ಸಹಕಾರ ನೀಡುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಅವರಿಗೆ ಸರ್ಕಾರಗಳು ಅಗತ್ಯ ವಸ್ತುಳನ್ನು ಕಲ್ಪಿಸುವ ಕೆಲಸಕ್ಕೆ ಮುಂದಾಗಬೇಕು’ ಎಂದು ಒತ್ತಾಯಿಸಿದರು.
‘ಖಾಸಗಿ ಪೈನಾನ್ಸ್ ಮತ್ತು ಬ್ಯಾಂಕ್‌ಗಳಲ್ಲಿ ಗ್ರಾಹಕರು ವಿವಿಧ ರೀತಿಯ ಸಾಲ ಪಡೆದುಕೊಂಡಿದ್ದು, ಮರುಪಾವತಿ ಮಾಡುವಂತೆ ಅಧಿಕಾರಿಗಳು ಒತ್ತಡ ಹಾಕುತ್ತಿದ್ದಾರೆ. ಸಾಲದ ಕಂತು ಪಾವತಿ ಮಾಡುವಲ್ಲಿ ತಡವಾದ ಕೂಡಲೇ ನೋಟೀಸ್ ಕೊಟ್ಟು ಕಿರುಕುಳ ನೀಡುತ್ತಿದ್ದಾರೆ, ಇದನ್ನು ತಪ್ಪಿಸಲು ಜಿಲ್ಲಾಡಳಿತದಿಂದ ಸುತ್ತೋಲೆ ಹೊರಡಿಸಬೇಕು’ ಎಂದು ಮನವಿ ಮಾಡಿದರು.
‘ರೈತರು ಬೆಳೆದ ಬೆಳೆಗಳಿಗೆ ಮಾರುಕಟ್ಟೆ ವ್ಯವಸ್ಥೆಯಿಲ್ಲ, ಇದರಿಂದಾಗಿ ರೈತರು ತರಕಾರಿಯನ್ನು ಬೀದಿಗೆ ಎಸೆಯುತ್ತಿದ್ದಾರೆ, ಬೆಳೆ ಮೇಲೆ ಹಾಕಿರುವ ಬಂಡವಾಳವು ಸಹ ದೊರೆಯದೆ ನಷ್ಟ ಅನುಭವಿಸುತ್ತಿದ್ದಾರೆ. ತೋಟದಿಂದ ಮಾರುಕಟ್ಟೆಗೆ ತರಕಾರಿ ವಾಹನ ಬರಲು ಪೊಲೀಸರು ಬಿಡುತ್ತಿಲ್ಲ. ಮಾರುಕಟ್ಟೆಯ ಮೇಲೆ ಇರುವ ನಿರ್ಬಂಧಗಳನ್ನು ಸಡಿಲಗೊಳಿಸಬೇಕು’ ಎಂದು ಕೋರಿದರು.
ಮನವಿ ಸ್ವೀಕರಿಸಿ ಮಾತನಾಡಿದ ಉಪ ವಿಭಾಗಧಿಕಾರಿ ಸೋಮಶೇಖರ್, ಸಾರ್ವಜನಿಕರ ಅನುಕೂಲಕ್ಕಾಗಿ ಕೊರೋನ ವೈರಸ್ ಹಾವಳಿ ನಿಯಂತ್ರಿಸುವ ಉದ್ದೇಶದಿಂದ ಸರ್ಕಾರ ನಿರ್ಬಂಧ ಹಾಕಿದೆ. ಇದಕ್ಕೆ ಪ್ರತಿಯೊಬ್ಬರು ಸಹಕಾರ ನೀಡಬೇಕು, ನಿಮ್ಮ ಬೇಡಿಕೆಗಳ ಬಗ್ಗೆ ಸರ್ಕಾರದ ಗಮನಕ್ಕೆ ತರಲಾಗುವುದು’ ಎಂದು ಭರವಸೆ ನೀಡಿದರು.
ಸಂಘದ ಜಿಲ್ಲಾ ಮಹಿ:ಆ ಘಟಕದ ಅಧ್ಯಕ್ಷೆ ಎ.ನಳಿನಿ, ಸದಸ್ಯರಾದ ಮಂಜುನಾಥ್, ನಾಗೇಶ್, ಸುಪ್ರೀಂಚಲ, ಜಗದೀಶ್, ವಿನೋದ್, ರಾಮಮೂರ್ತಿ ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.