ADVERTISEMENT

ಕಚೇರಿಯಲ್ಲಿ ಸಮಯ ನಿಗದಿಗೆ ಮನವಿ

ಕೋವಿಡ್‌ 2ನೇ ಅಲೆ ಆತಂಕ: ನೌಕರರ ಆರೋಗ್ಯ ರಕ್ಷಣೆಗೆ ಒತ್ತು ನೀಡಬೇಕು

​ಪ್ರಜಾವಾಣಿ ವಾರ್ತೆ
Published 19 ಏಪ್ರಿಲ್ 2021, 14:01 IST
Last Updated 19 ಏಪ್ರಿಲ್ 2021, 14:01 IST
ಕೋವಿಡ್ ಆತಂಕದ ಹಿನ್ನೆಲೆಯಲ್ಲಿ ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಭೇಟಿಗೆ ಸಮಯ ನಿಗದಿಪಡಿಸಬೇಕೆಂದು ಜಿಲ್ಲಾ ಸರ್ಕಾರಿ ನೌಕರರ ಸಂಘದ ಸದಸ್ಯರು ಕೋಲಾರದಲ್ಲಿ ಸೋಮವಾರ ಜಿಲ್ಲಾಧಿಕಾರಿ ಆರ್‌.ಸೆಲ್ವಮಣಿ ಅವರಿಗೆ ಮನವಿ ಸಲ್ಲಿಸಿದರು.
ಕೋವಿಡ್ ಆತಂಕದ ಹಿನ್ನೆಲೆಯಲ್ಲಿ ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರ ಭೇಟಿಗೆ ಸಮಯ ನಿಗದಿಪಡಿಸಬೇಕೆಂದು ಜಿಲ್ಲಾ ಸರ್ಕಾರಿ ನೌಕರರ ಸಂಘದ ಸದಸ್ಯರು ಕೋಲಾರದಲ್ಲಿ ಸೋಮವಾರ ಜಿಲ್ಲಾಧಿಕಾರಿ ಆರ್‌.ಸೆಲ್ವಮಣಿ ಅವರಿಗೆ ಮನವಿ ಸಲ್ಲಿಸಿದರು.   

ಕೋಲಾರ: ಕೋವಿಡ್ 2ನೇ ಅಲೆ ಹಿನ್ನೆಲೆಯಲ್ಲಿ ಸರ್ಕಾರಿ ನೌಕರರ ಆರೋಗ್ಯದ ದೃಷ್ಟಿಯಿಂದ ಕಚೇರಿಗಳಲ್ಲಿ ಸಾರ್ವಜನಿಕರ ಭೇಟಿಗೆ ಸಮಯ ನಿಗದಿಪಡಿಸಬೇಕೆಂದು ಜಿಲ್ಲಾ ಸರ್ಕಾರಿ ನೌಕರರ ಸಂಘದ ಸದಸ್ಯರು ಇಲ್ಲಿ ಸೋಮವಾರ ಜಿಲ್ಲಾಧಿಕಾರಿ ಆರ್‌.ಸೆಲ್ವಮಣಿ ಅವರಿಗೆ ಮನವಿ ಸಲ್ಲಿಸಿದರು.

‘ಜಿಲ್ಲೆಯಲ್ಲಿ ಕೋವಿಡ್ 2ನೇ ಅಲೆ ಆತಂಕಕಾರಿಯಾಗಿದೆ. ಹೀಗಾಗಿ ನೌಕರರ ಆರೋಗ್ಯ ರಕ್ಷಣೆಗೆ ಒತ್ತು ನೀಡುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಸಾರ್ವಜನಿಕರಿಗೆ ಸರ್ಕಾರಿ ಕಚೇರಿಗಳಿಗೆ ಬರಲು ಸಮಯ ನಿಗದಿಪಡಿಸಬೇಕು. ನೌಕರರಿಗೆ ಗುಣಮಟ್ಟದ ಮಾಸ್ಕ್, ಸ್ಯಾನಿಟೈಸರ್‌ ವಿತರಿಸಬೇಕು’ ಎಂದು ಸಂಘದ ಅಧ್ಯಕ್ಷ ಜಿ.ಸುರೇಶ್‌ಬಾಬು ಮನವಿ ಮಾಡಿದರು.

‘ನೌಕರರು ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸಲು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ಈ ನಡುವೆ ನೌಕರರ ಕುಟುಂಬ ವರ್ಗದಲ್ಲಿ ಕೊರೊನಾ ಸೋಂಕಿನ ತೀವ್ರತೆ ಬಗ್ಗೆ ಆತಂಕವಿದೆ. ಸೋಂಕು ತಡೆಗಾಗಿ ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರಿಗೆ ಪ್ರತಿನಿತ್ಯ ಮಧ್ಯಾಹ್ನ 3 ಗಂಟೆಗೆ ಸಮಯ ನಿಗದಿಪಡಿಸಬೇಕು’ ಎಂದು ಕೋರಿದರು.

ADVERTISEMENT

‘ಕೋವಿಡ್ ಸೋಂಕಿನಿಂದ ವಿದ್ಯಾರ್ಥಿಗಳ ರಕ್ಷಣೆ ಅಗತ್ಯವಾಗಿದೆ. ವಿದ್ಯಾರ್ಥಿಗಳು ಮತ್ತು ಶಿಕ್ಷಕರ ಸುರಕ್ಷತೆ ದೃಷ್ಟಿಯಿಂದ ಪ್ರತಿ ವರ್ಷದಂತೆ ಈ ಬಾರಿಯೂ ಶೀಘ್ರವೇ ಬೇಸಿಗೆ ರಜೆ ನೀಡಬೇಕು. ಈಗಾಗಲೇ 1ನೇ ತರಗತಿಯಿಂದ 9ನೇ ತರಗತಿವರೆಗೆ ರಜೆ ಘೋಷಿಸಲಾಗಿದೆ. ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಶಾಲೆ ನಡೆಯುತ್ತಿದ್ದು, ಪೋಷಕರು ಸೋಂಕು ಹರುಡುವ ಭೀತಿಯಲ್ಲಿದ್ದಾರೆ’ ಎಂದು ಹೇಳಿದರು.

‘ಪ್ರತಿ ವರ್ಷದಂತೆ ಏ.10ರಿಂದ ಮೇ 30ರವರೆಗೆ ಬೇಸಿಗೆ ರಜೆ ನೀಡುವ ಆದೇಶ ಜಾರಿ ಮಾಡಬೇಕು. ಸರ್ಕಾರಿ ಶಾಲೆಗಳಲ್ಲಿ ನಿರಂತರ, ವ್ಯಾಪಕ ಮೌಲ್ಯಮಾಪನ ಪದ್ಧತಿ ಇರುವುದರಿಂದ ಅದನ್ನೇ ಮಕ್ಕಳ ಉತ್ತೀರ್ಣಕ್ಕೆ ಪರಿಗಣಿಸಿ ರಜೆ ನೀಡಬೇಕು’ ಎಂದು ತಿಳಿಸಿದರು.

ದೂರಿಗೆ ಹೆದರಿದಿರಿ: ‘ಅನಾಮಧೇಯ ದೂರುಗಳಿಗೆ ಹೆದರದೆ ನಿಷ್ಠೆಯಿಂದ ಕರ್ತವ್ಯ ನಿರ್ವಹಿಸಿ. ಅಂತಹ ದೂರುಗಳಿಗೆ ಸ್ಪಂದಿಸದಿರಲು ಈಗಾಗಲೇ ಇಲಾಖೆಗಳಿಗೆ ಸೂಚನೆ ನೀಡಲಾಗಿದೆ. ನೌಕರರ ಸಂಘದ ಮನವಿಯಂತೆ ಜಿಲ್ಲೆಯ ವಿವಿಧ ಇಲಾಖೆಗಳಲ್ಲಿನ ಅಂಗವಿಕಲ ನೌಕರರಿಗೆ ಮನೆಯಿಂದಲೇ ಕರ್ತವ್ಯ ನಿರ್ವಹಿಸುವಂತೆ ಎಲ್ಲಾ ಇಲಾಖೆಗಳಿಗೆ ಸೂಚಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ಹೇಳಿದರು.

ಸಂಘದ ಖಜಾಂಚಿ ಕೆ.ವಿಜಯ್, ಗೌರವಾಧ್ಯಕ್ಷ ಶ್ರೀನಿವಾಸರೆಡ್ಡಿ, ಜಂಟಿ ಕಾರ್ಯದರ್ಶಿ ಮಂಜುನಾಥ್, ರಾಜ್ಯ ಪರಿಷತ್ ಸದಸ್ಯ ಗೌತಮ್, ಹಿರಿಯ ಉಪಾಧ್ಯಕ್ಷ ಸುಬ್ರಮಣಿ, ಉಪಾಧ್ಯಕ್ಷ ಪುರುಷೋತ್ತಮ್, ಜಿಲ್ಲಾ ಗ್ರಾಮ ಲೆಕ್ಕಿಗರ ಸಂಘದ ಅಧ್ಯಕ್ಷ ಅಜಯ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.