ADVERTISEMENT

ರಸ್ತೆ ತಡೆ: ಕಾರ್ಯಕರ್ತರ ಪ್ರತಿಭಟನೆ

ಶಾಸಕ ಶಿವಕುಮಾರ್‌ ಬಂಧನಕ್ಕೆ ಕಾಂಗ್ರೆಸ್‌ ಕಿಡಿ

​ಪ್ರಜಾವಾಣಿ ವಾರ್ತೆ
Published 4 ಸೆಪ್ಟೆಂಬರ್ 2019, 15:06 IST
Last Updated 4 ಸೆಪ್ಟೆಂಬರ್ 2019, 15:06 IST
ಶಾಸಕ ಡಿ.ಕೆ.ಶಿವಕುಮಾರ್‌ರ ಬಂಧನದ ಕ್ರಮ ಖಂಡಿಸಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಕಾರ್ಯಕರ್ತರು ಕೋಲಾರದಲ್ಲಿ ಬುಧವಾರ ರಸ್ತೆ ತಡೆ ಮಾಡಿ ಪ್ರತಿಭಟನೆ ನಡೆಸಿದರು.
ಶಾಸಕ ಡಿ.ಕೆ.ಶಿವಕುಮಾರ್‌ರ ಬಂಧನದ ಕ್ರಮ ಖಂಡಿಸಿ ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಕಾರ್ಯಕರ್ತರು ಕೋಲಾರದಲ್ಲಿ ಬುಧವಾರ ರಸ್ತೆ ತಡೆ ಮಾಡಿ ಪ್ರತಿಭಟನೆ ನಡೆಸಿದರು.   

ಕೋಲಾರ: ಕಾಂಗ್ರೆಸ್‌ನ ಪ್ರಭಾವಿ ಶಾಸಕ ಡಿ.ಕೆ.ಶಿವಕುಮಾರ್‌ ಬಂಧನವು ಜಿಲ್ಲೆಯಲ್ಲಿ ಆಕ್ರೋಶದ ಕಿಡಿ ಹೊತ್ತಿಸಿದ್ದು, ಪಕ್ಷದ ಕಾರ್ಯಕರ್ತರು ಜಾರಿ ನಿರ್ದೇನಾಲಯದ ಕ್ರಮ ಖಂಡಿಸಿ ಇಲ್ಲಿ ಬುಧವಾರ ಬೀದಿಗಿಳಿದು ಪ್ರತಿಭಟನೆ ಮಾಡಿದರು.

ಕೆಎಸ್‌ಆರ್‌ಟಿಸಿ ವೃತ್ತದಲ್ಲಿ ರಸ್ತೆ ತಡೆ ಮಾಡಿದ ಪ್ರತಿಭಟನಾಕಾರರು, ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಷಾ ಹಾಗೂ ಬಿಜೆಪಿ ವಿರುದ್ಧ ಘೋಷಣೆ ಕೂಗಿದರು. ಅಲ್ಲದೇ, ಮೋದಿ ಮತ್ತು ಷಾ ಅವರ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದರು.

‘ಡಿ.ಕೆ.ಶಿವಕುಮಾರ್‌ರ ಕಲ್ಲು ಬಂಧನದ ಹಿಂದೆ ಮೋದಿ, ಅಮಿತ್‌ ಷಾ ಹಾಗೂ ಬಿಜೆಪಿ ರಾಜ್ಯ ನಾಯಕರ ಕೈವಾಡವಿದೆ. ಬಿಜೆಪಿ ಮುಖಂಡರು ಶಿವಕುಮಾರ್‌ ಹಾಗೂ ಕಾಂಗ್ರೆಸ್‌ ಪಕ್ಷವನ್ನು ರಾಜಕೀಯವಾಗಿ ನಿರ್ನಾಮ ಮಾಡಲು ಈ ಸಂಚು ಮಾಡಿದ್ದಾರೆ’ ಎಂದು ಕಾಂಗ್ರೆಸ್‌ ಜಿಲ್ಲಾ ಘಟಕದ ಅಧ್ಯಕ್ಷ ಕೆ.ಚಂದ್ರಾರೆಡ್ಡಿ ದೂರಿದರು.

ADVERTISEMENT

‘ಗುಜರಾತ್‌ ಶಾಸಕರಿಗೆ ಆಶ್ರಯ ನೀಡಿದ್ದ ಶಿವಕುಮಾರ್‌ ವಿರುದ್ಧ ಕೇಂದ್ರ ಸರ್ಕಾರ ಈ ಹಿಂದೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಂದ ದಾಳಿ ಮಾಡಿಸಿತ್ತು. ಮೋದಿಯವರು ರಾಜಕೀಯ ದ್ವೇಷಕ್ಕೆ ಐ.ಟಿ ಮತ್ತು ಜಾರಿ ನಿರ್ದೇಶನಾಲಯವನ್ನು ದುರ್ಬಳಕೆ ಮಾಡಿಕೊಂಡಿದ್ದಾರೆ. ಸಂವಿಧಾನದ ಆಶಯಕ್ಕೆ ವಿರುದ್ಧವಾಗಿ ನಡೆದುಕೊಳ್ಳುತ್ತಿರುವ ಅವರು ಸರ್ವಾಧಿಕಾರಿಯಂತೆ ವರ್ತಿಸುತ್ತಿದ್ದಾರೆ’ ಎಂದು ಕಿಡಿಕಾರಿದರು.

ಅರಾಜಕತೆ ಸೃಷ್ಟಿ: ‘ಮೋದಿ ಮತ್ತು ಅಮಿತ್‌ ಷಾ ದೇಶದಲ್ಲಿ ಅರಾಜಕತೆ ಸೃಷ್ಟಿಸಿದ್ದಾರೆ. ಕಾಂಗ್ರೆಸ್‌ಗೆ ಕೆಟ್ಟ ಹೆಸರು ತರಲು ಬಿಜೆಪಿ ನಾಯಕರು ಅಡ್ಡದಾರಿ ಹಿಡಿದಿದ್ದಾರೆ. ಜನಪರ ಆಡಳಿತ ನೀಡುವಲ್ಲಿ ವಿಫಲವಾಗಿರುವ ಬಿಜೆಪಿ ದ್ವೇಷದ ರಾಜಕಾರಣ ಮಾಡುತ್ತಿದೆ. ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಂಡು ವಿಪಕ್ಷಗಳನ್ನು ಹತ್ತಿಕ್ಕುವ ಪ್ರಯತ್ನ ಮಾಡುತ್ತಿದೆ’ ಎಂದು ಪ್ರತಿಭಟನಾಕಾರರು ಆರೋಪಿಸಿದರು.

‘ಬಿಜೆಪಿ ನಾಯಕರ ರಾಜಕೀಯ ಷಡ್ಯಂತ್ರ ರಾಜ್ಯದ ಜನರಿಗೂ ಗೊತ್ತಿದೆ. ಕರ್ನಾಟಕದಲ್ಲಿ ಅವರ ಆಟ ನಡೆಯುವುದಿಲ್ಲ. ಅವರಿಗೆ ಮತದಾರರೇ ತಕ್ಕ ಪಾಠ ಕಲಿಸುತ್ತಾರೆ. ಇನ್ನಾದರೂ ಬಿಜೆಪಿ ನಾಯಕರು ಸಂವಿಧಾನಬದ್ಧವಾಗಿ ನಡೆದುಕೊಳ್ಳಬೇಕು. ಕೀಳು ಮಟ್ಟದ ರಾಜಕೀಯ ನಿಲ್ಲಿಸಬೇಕು. ಶಿವಕುಮಾರ್‌ ಅವರನ್ನು ಬಿಡುಗಡೆ ಮಾಡಬೇಕು. ಇಲ್ಲದಿದ್ದರೆ ತೀವ್ರ ಹೋರಾಟ ನಡೆಸುತ್ತೇವೆ’ ಎಂದು ಎಚ್ಚರಿಕೆ ನೀಡಿದರು.

ರಾಜ್ಯ ಮಾವು ಅಭಿವೃದ್ಧಿ ಮತ್ತು ಮಾರುಕಟ್ಟೆ ನಿಗಮದ ಮಾಜಿ ಅಧ್ಯಕ್ಷ ಗೋಪಾಲಕೃಷ್ಣ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಉದಯ್‌ಶಂಕರ್, ನಗರಸಭೆ ಮಾಜಿ ಸದಸ್ಯ ಪ್ರಸಾದ್‌ಬಾಬು, ಪಕ್ಷದ ಮುಖಂಡರಾದ ವೈ.ಶಿವಕುಮಾರ್, ಅಶ್ವತ್ಥ್ ನಾರಾಯಣ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.