ADVERTISEMENT

ಗುಂಡಿಗೆ ಬಾಗಿನ ಅರ್ಪಿಸಿ ಪ್ರತಿಭಟನೆ

ಜಿಲ್ಲಾ ಕೇಂದ್ರದ ರಸ್ತೆ ಅವ್ಯವಸ್ಥೆಗೆ ರೈತ ಸಂಘ ಸದಸ್ಯರ ಖಂಡನೆ

​ಪ್ರಜಾವಾಣಿ ವಾರ್ತೆ
Published 21 ಸೆಪ್ಟೆಂಬರ್ 2020, 13:20 IST
Last Updated 21 ಸೆಪ್ಟೆಂಬರ್ 2020, 13:20 IST
ಕೋಲಾರದ ರಸ್ತೆ ಅವ್ಯವಸ್ಥೆ ಖಂಡಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸದಸ್ಯರು ರಸ್ತೆಯಲ್ಲಿನ ಗುಂಡಿಗಳಿಗೆ ಸೋಮವಾರ ಬಾಗಿನ ಅರ್ಪಿಸಿ ವಿನೂತನ ರೀತಿಯಲ್ಲಿ ಪ್ರತಿಭಟನೆ ಮಾಡಿದರು.
ಕೋಲಾರದ ರಸ್ತೆ ಅವ್ಯವಸ್ಥೆ ಖಂಡಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸದಸ್ಯರು ರಸ್ತೆಯಲ್ಲಿನ ಗುಂಡಿಗಳಿಗೆ ಸೋಮವಾರ ಬಾಗಿನ ಅರ್ಪಿಸಿ ವಿನೂತನ ರೀತಿಯಲ್ಲಿ ಪ್ರತಿಭಟನೆ ಮಾಡಿದರು.   

ಕೋಲಾರ: ಜಿಲ್ಲಾ ಕೇಂದ್ರದ ರಸ್ತೆಗಳ ದುಸ್ಥಿತಿ ಖಂಡಿಸಿ ರಾಜ್ಯ ರೈತ ಸಂಘ ಮತ್ತು ಹಸಿರು ಸೇನೆ ಸದಸ್ಯರು ಇಲ್ಲಿ ಸೋಮವಾರ ರಸ್ತೆಯಲ್ಲಿನ ಗುಂಡಿಗಳಿಗೆ ಬಾಗಿನ ಅರ್ಪಿಸಿ ವಿನೂತನ ರೀತಿಯಲ್ಲಿ ಪ್ರತಿಭಟನೆ ಮಾಡಿದರು.

ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು ಹಾಗೂ ಕೋಲಾರ ವಿಧಾನಸಭಾ ಕ್ಷೇತ್ರದ ಶಾಸಕರ ಹೋಲುವ ಮುಖವಾಡ ಧರಿಸಿದ ಪ್ರತಿಭಟನಾಕಾರರು ಜಿಲ್ಲಾಡಳಿತ, ನಗರಸಭೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

‘ರಾಜ್ಯ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ಅಮೃತ್‌ ಯೋಜನೆಯಡಿ ನಗರದಲ್ಲಿ ಕೈಗೊಂಡಿರುವ ಒಳಚರಂಡಿ ಕಾಮಗಾರಿಯು ನಗರವಾಸಿಗಳಿಗೆ ಶಾಪವಾಗಿದೆ. ಕಾಮಗಾರಿಗಾಗಿ ರಸ್ತೆಗಳನ್ನು ಮನಸೋಇಚ್ಛೆ ಅಗೆಯಲಾಗಿದೆ. ಕಾಮಗಾರಿ ಪೂರ್ಣಗೊಂಡ ನಂತರ ಗುತ್ತಿಗೆದಾರರು ರಸ್ತೆ ದುರಸ್ತಿ ಮಾಡಿಲ್ಲ’ ಎಂದು ಸಂಘಟನೆಯ ರಾಜ್ಯ ಘಟಕದ ಉಪಾಧ್ಯಕ್ಷ ಕೆ.ನಾರಾಯಣಗೌಡ ದೂರಿದರು.

ADVERTISEMENT

‘ಕೋಲಾರ ಕ್ಷೇತ್ರದ ಶಾಸಕರು ನಗರದ ಅಭಿವೃದ್ಧಿ ಮರೆತಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು ಮುಳಬಾಗಿಲು ಕ್ಷೇತ್ರಕ್ಕಷ್ಟೇ ಸೀಮಿತವಾಗಿದ್ದಾರೆ. ಗುಂಡಿಮಯ ರಸ್ತೆಗಳಿಂದ ನಗರದ ಸೌಂದರ್ಯ ಹಾಳಾಗಿದ್ದು, ದೂಳಿನ ಆರ್ಭಟ ಹೆಚ್ಚಿದೆ. ನಗರವಾಸಿಗಳು ಹಾಗೂ ವಾಹನ ಸವಾರರು ಪ್ರತಿನಿತ್ಯ ಬವಣೆ ಪಡುವಂತಾಗಿದೆ’ ಎಂದು ಹೇಳಿದರು.

ಮೃತ್ಯುಕೂಪ: ‘ಗುಂಡಿಮಯ ರಸ್ತೆಗಳು ಜನರ ಪಾಲಿಗೆ ಮೃತ್ಯುಕೂಪವಾಗಿ ಪರಿಣಮಿಸಿವೆ. ಅಧಿಕಾರಿಗಳು ನೆಪಕ್ಕೆ ಗುಂಡಿಗಳಿಗೆ ಜಲ್ಲಿ ಪುಡಿ ಹಾಗೂ ಮಣ್ಣು ಸುರಿಸಿ ರಸ್ತೆಗೆ ಡಾಂಬರು ಹಾಕಿರುವುದಾಗಿ ಬಿಲ್‌ ಮಂಜೂರು ಮಾಡಿದ್ದಾರೆ. ಈ ಅಕ್ರಮದಲ್ಲಿ ಗುತ್ತಿಗೆದಾರರು ಹಾಗೂ ಅಧಿಕಾರಿಗಳು ಕೋಟಿಗಟ್ಟಲೆ ಹಣ ದೋಚಿದ್ದಾರೆ’ ಎಂದು ಪ್ರತಿಭಟನಾಕಾರರು ಆರೋಪಿಸಿದರು.

‘ರಸ್ತೆಗಳ ಅಕ್ಕಪಕ್ಕದ ಹೋಟೆಲ್‌, ಬೇಕರಿ, ಅಂಗಡಿ ಕೆಲಸಗಾರರು ಹಾಗೂ ವರ್ತಕರಿಗೆ ದೂಳಿನ ಸಮಸ್ಯೆಯಿಂದ ಕಿರಿಕಿರಿಯಾಗುತ್ತಿದೆ. ಜನಪ್ರತಿನಿಧಿಗಳು ಸಮಸ್ಯೆ ಪರಿಹಾರಕ್ಕೆ ಗಮನ ಹರಿಸುತ್ತಿಲ್ಲ. ಗುಂಡಿಮಯ ರಸ್ತೆಗಳಲ್ಲೇ ಸಂಚರಿಸುವ ಅವರಿಗೆ ಸಮಸ್ಯೆಯ ಅರಿವಿಲ್ಲ. ಅಧಿಕಾರಿಗಳು ರಸ್ತೆಗಳ ವಿಚಾರದಲ್ಲಿ ಕಣ್ಣಿದ್ದು ಕುರುಡಾಗಿದ್ದಾರೆ’ ಎಂದು ಕಿಡಿಕಾರಿದರು.

‘ಜಿಲ್ಲಾ ಕೇಂದ್ರ ರಸ್ತೆಗಳಿಗೆ ಶೀಘ್ರವೇ ಡಾಂಬರು ಹಾಕಬೇಕು. ನಗರದ ಮತ್ತು ಜಿಲ್ಲೆಯ ಅಭಿವೃದ್ಧಿ ದೃಷ್ಟಿಯಿಂದ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಪರಸ್ಪರ ಸಮನ್ವಯತೆಯಿಂದ ಕೆಲಸ ಮಾಡಬೇಕು. ಇಲ್ಲವಾದರೆ ಜನ ಬೀದಿಗಿಳಿದು ತಕ್ಕ ಪಾಠ ಕಲಿಸುತ್ತಾರೆ’ ಎಂದು ಎಚ್ಚರಿಕೆ ನೀಡಿದರು.

ಸಂಘಟನೆಯ ಜಿಲ್ಲಾ ಘಟಕದ ಸಂಚಾಲಕ ಕೆ.ಶ್ರೀನಿವಾಸಗೌಡ, ಸದಸ್ಯರಾದ ಮಂಜುನಾಥ್, ನಾಗರಾಜ್‌ಗೌಡ, ನಾಗೇಶ್, ತಿಮ್ಮಣ್ಣ, ವೆಂಕಟೇಶ್, ಹನುಮಯ್ಯ, ಸುಬ್ರಮಣಿ ಪಾಲ್ಗೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.